ನವದೆಹಲಿ: ಕೋವಿಡ್ 19 ಎರಡನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜಧಾನಿಯಲ್ಲಿ ಜಾರಿಗೊಳಿಸಿದ್ದ ಲಾಕ್ ಡೌನ್ ಅನ್ನು ಸೋಮವಾರ(ಮೇ 31)ದಿಂದ ಹಂತ, ಹಂತವಾಗಿ ಸಡಿಲಿಕೆ ಮಾಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ(ಮೇ 28) ತಿಳಿಸಿದ್ದಾರೆ.
ಇದನ್ನೂ ಓದಿ:ಕೇಂದ್ರದ 20 ಲಕ್ಷ ಕೋಟಿ ಪ್ಯಾಕೇಜ್ ಎಲ್ಲಿ ಹೋಯ್ತು : ಬಿಜೆಪಿ ವಿರುದ್ಧ ಕೈ ನಾಯಕರ ಆಕ್ರೋಶ
ಕೋವಿಡ್ 19 ಎರಡನೇ ಅಲೆಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಸಹಕಾರ ನೀಡಿದ ಕೋಟ್ಯಂತರ ಜನರಿಗೆ ಅಭಿನಂದನೆ ತಿಳಿಸುವುದಾಗಿ ಈ ಸಂದರ್ಭದಲ್ಲಿ ಕೇಜ್ರಿವಾಲ್ ಹೇಳಿದರು. ಕಳೆದ 24ಗಂಟೆಗಳಲ್ಲಿ ರಾಜಧಾನಿ ದೆಹಲಿಯಲ್ಲಿ ಪಾಸಿಟಿವಿಟಿ ದರ ಶೇ.1.5ಕ್ಕೆ ಇಳಿಕೆಯಾಗಿದ್ದು, ಕೇವಲ 1,100 ಕೋವಿಡ್ ಪ್ರಕರಣ ವರದಿಯಾಗಿದೆ ಎಂದು ತಿಳಿಸಿದ್ದಾರೆ.
ಕೋವಿಡ್ ಲಾಕ್ ಡೌನ್ ನಿಂದ ಕಳೆದ ತಿಂಗಳು ಅನುಭವಿಸಿದ ನಷ್ಟವನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ನಿಧಾನವಾಗಿ ಲಾಕ್ ಡೌನ್ ಅನ್ನು ತೆರವುಗೊಳಿಸುವ ಮೂಲಕ ಸಮತೋಲನ ಕಾಯ್ದುಕೊಳ್ಳಬೇಕು ಎಂದು ಇಂದು ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳ ಜತೆ ನಡೆಸಿದ ಸಭೆಯಲ್ಲಿ ಅಭಿಪ್ರಾಯ ಮೂಡಿಬಂದಿರುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ.
ಪ್ರಾಥಮಿಕ ಹಂತದಲ್ಲಿ ಕಾರ್ಮಿಕರು ಮತ್ತು ದಿನಗೂಲಿ ನೌಕರರಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುವುದು. ಇವರು ಕಟ್ಟಡ ನಿರ್ಮಾಣ ಕಾಮಗಾರಿಯ ಕಾರ್ಮಿಕರು ಮತ್ತು ಫ್ಯಾಕ್ಟರಿಗಳಲ್ಲಿ ಕಾರ್ಯನಿರ್ವಹಿಸುವ ಜನರು ಎಂದು ಗುರುತಿಸಲಾಗಿದೆ ಎಂದು ಹೇಳಿದರು.
ಸೋಮವಾರದಿಂದ ಕೈಗಾರಿಕಾ ಪ್ರದೇಶದಲ್ಲಿ ಉತ್ಪಾದನಾ ಚಟುವಟಿಕೆ ನಡೆಸಲು ಹಾಗೂ ಕಟ್ಟಡ ಕಾಮಗಾರಿ ಚಟುವಟಿಕೆ ನಡೆಸಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ.