ಕೋಲಾರ: ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಯೋಜನೆಗಳ ಬಗ್ಗೆ ಅರಿವು ಇರುವುದಿಲ್ಲ ಅಧಿಕಾರಿಗಳು ಅವರಿಗೆ ತಿಳಿಸಿ ಸಕಾಲಕ್ಕೆ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಿ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು.
ತಾಲೂಕಿನ ಹೋಳೂರು ಹೋಬಳಿಯ ಚಿಲ್ಲಪನಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ, “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ಎಂಬ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಇಂದು ನಿಮ್ಮ ಗ್ರಾಮಕ್ಕೆ ಬಂದಿದ್ದು, ನಿಮ್ಮ ಯಾವುದೇ ಸಮಸ್ಯೆಗಳಿದ್ದರೂ ಅಹವಾಲುಗಳ ಮೂಲಕ ನನಗೆ ನೀಡಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು. ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಿ ಎಂದರು.
ನಿಮ್ಮ ಊರಿಗೆ ಸರ್ಕಾರಿ ಬಸ್ಸು ಸರಿಯಾದ ಸಮಯಕ್ಕೆ ಬರುತ್ತಿಲ್ಲ ಎಂದು ಸರ್ಕಾರಿ ಶಾಲೆಯ ಶಿಕ್ಷಕರು ಮತ್ತು ಮಕ್ಕಳು ತಿಳಿಸಿದ್ದಾರೆ. ಅದನ್ನು ಆದಷ್ಟು ಬೇಗ ಬಗೆಹರಿಸಲಾಗುವುದು. ಚಿಲ್ಲಪನಹಳ್ಳಿ ಗ್ರಾಮದ ಕೆರೆಯು ಕೆ.ಸಿ.ವ್ಯಾಲಿ ನೀರಿನಿಂದ ತುಂಬಿ ಕೋಡಿ ಹರಿಯುತ್ತಿದೆ. ಇದರಿಂದ ರೈತರ ಜಮೀನುಗಳಿಗೆ ಅಥವಾ ತಾಕುಗಳಿಗೆ ನೀರು ಹೋಗುವ ಪರಿಸ್ಥಿತಿ ಇದ್ದು, ಅದನ್ನು ಶೀಘ್ರದಲ್ಲಿ ಸರಿಪಡಿಸಿ ಕಾಲುವೆಯನ್ನು ಹಾಗೂ ಸುಸಜ್ಜಿತ ರಸ್ತೆ ಸಂಪರ್ಕ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಕೋಲಾರ ತಾಲೂಕಿನ ತಹಶೀಲ್ದಾರರಾದ ನಾಗರಾಜ್ ಮಾತನಾಡಿ, ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯ ಕ್ರಮವನ್ನು ಈ ಗ್ರಾಮದಲ್ಲಿ ಹಮ್ಮಿಕೊಂಡಿದ್ದು, ನಿಮ್ಮ ಊರಿಗೆ ಅಥವಾ ನಿಮಗೆ ಏನಾದರೂ ಸಮಸ್ಯೆ ಇದ್ದರೆ ಅದನ್ನು ಅಹವಾಲು ನೀಡಿ ಬಗೆಹರಿಸಿಕೊಳ್ಳಿ. ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದಾರೆ ಆದಷ್ಟು ಬೇಗ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಹಮ್ಮಿಕೊಂಡಿದ್ದ ಪೋಷಣ್ ಅಭಿಯಾನ್ ಯೋಜನೆ ಯಡಿ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಹಾಗೂ ಮಕ್ಕಳಿಗೆ ಅನ್ನಪ್ರಾಶನವನ್ನು ನೆರವೇರಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಸೌಲಭ್ಯಗಳ ವಿವರ ನೀಡಿದರು. ಆರೋಗ್ಯ ಇಲಾಖೆಯಿಂದ ಆರೋಗ್ಯ ಕಾರ್ಡ್‌ಗಳನ್ನು ಸ್ಥಳದಲ್ಲೇ ಸಾರ್ವಜನಿಕರಿಗೆ ಮಾಡಿಕೊಟ್ಟರು.
ಕಾರ್ಯಕ್ರಮದಲ್ಲಿ ಐತರಾಸನಹಳ್ಳಿ ಗ್ರಾಪಂ ಅಧ್ಯಕ್ಷರಾದ ಮಂಜುಳಮ್ಮ, ಉಪಾಧ್ಯಕ್ಷರಾದ ರಶ್ಮಿ ಶ್ರೀನಿವಾಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಚನ್ನಬಸಪ್ಪ, ಭೂ ದಾಖಲೆಗಳ ಇಲಾಖೆಯ ಉಪ ನಿರ್ದೇಶಕರಾದ ಭಾಗ್ಯಮ್ಮ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ಶೃತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮುದ್ದಣ್ಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್, ಕೋಲಾರ ತಾಪಂ ಒಪ ಮುನಿಯಪ್ಪ, ತಾಲೂಕು ವೈದ್ಯಾಧಿಕಾರಿ ಎ.ವಿ.ನಾರಾಯಣಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಕನ್ನಯ್ಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.