ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ ಸಹಾಯಧನ ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಜಗದೀಶ ಶೆಟ್ಟರ್ ಭರವಸೆ ನೀಡಿದರು.
ಕೊವಿಡ್-19 ಹಿನ್ನೆಲೆಯಲ್ಲಿ ನಗರದ ಪ್ರವಾಸಿಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಸಕ್ರಿಯವಾಗಿರುವ ಪ್ರಕರಣಗಳಿಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಹೊರ ರಾಜ್ಯದಿಂದ ಬಂದವರನ್ನು ಮಾತ್ರ ನಿಯಮಾವಳಿ ಪ್ರಕಾರ ಕ್ವಾರಂಟೈನ್‌ನಲ್ಲಿ ಇರಿಸಬೇಕು ಎಂದು ಸೂಚಿಸಿದರು.
ಪಾಲಿಕೆಯ ಪರಿಷ್ಕೃತ ತೆರಿಗೆ: ಮಹಾನಗರ ಪಾಲಿಕೆ ವತಿಯಿಂದ ಮಾಡಲಾಗಿರುವ ತೆರಿಗೆ ಪರಿಷ್ಕರಣೆ ಜಾರಿಗೆ ತರುವ ಕುರಿತು ಸರ್ಕಾರದ ಮಟ್ಟದಲ್ಲಿ ಇನ್ನೂ ಚರ್ಚೆ ನಡೆದಿದೆ. ಮುಖ್ಯಮಂತ್ರಿಗಳು ಹಾಗೂ ನಗರಾಭಿವೃದ್ಧಿ ಇಲಾಖೆಯ ಸಚಿವರ ಜೊತೆ ಇನ್ನೊಮ್ಮೆ ಚರ್ಚಿಸಿದ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಶಾಸಕ ಅಭಯ ಪಾಟೀಲ ಮಾತನಾಡಿ, ತೆರಿಗೆ ಹೆಚ್ಚಳದಿಂದ ಬಡವರು ಹಾಗೂ ಮಧ್ಯಮ ವರ್ಗದವರಿಗೆ ತೀವ್ರ ತೊಂದರೆಯಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ತೆರಿಗೆ ಹೆಚ್ಚಳವು ಜನಸಾಮಾನ್ಯರಿಗೆ ಹೊರೆಯಾಗುತ್ತಿದೆ ಎಂಬುದನ್ನು ಸಚಿವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಮಾತನಾಡಿದ ಪಾಲಿಕೆ ಆಯುಕ್ತ ಜಗದೀಶ ಪರಿಷ್ಕೃತ ತೆರಿಗೆಯ ಪ್ರಕಾರ ಇದುವರೆಗೆ 4.5 ಕೋಟಿ ರೂ. ಸಂಗ್ರಹವಾಗಿದೆ ಎಂದು ಮಾಹಿತಿ ನೀಡಿದರು.
ಸಚಿವ ಸುರೇಶ ಅಂಗಡಿ, ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ್ ಕೋರೆ ಮಾತನಾಡಿದರು. ವಿಧಾನ ಪರಿಷತ್ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ವಿಧಾನಸಭಾ ಉಪಸಭಾಪತಿ ಆನಂದ ಮಾಮನಿ, ಶಾಸಕರಾದ ಅನಿಲ್ ಬೆನಕೆ, ದುರ್ಯೋಧನ ಐಹೊಳೆ ಮತ್ತು ಮಹಾಂತೇಶ ಕೌಜಲಗಿ ಅವರು ಕೊರೊನಾದಿಂದ ಎದುರಾಗಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.