ಬೀದರ: ಗ್ರಾಮಗಳ ಅಭಿವೃದ್ಧಿಯಿಂದಲೇ ದೇಶದ ಅಭಿವೃದ್ಧಿ ಎಂಬ ಮಹಾತ್ಮ ಗಾಂಧಿಧೀಜಿಯವರ ಆಶಯವನ್ನು ಸಾಕಾರಗೊಳಿಸಲು ಗ್ರಾಪಂ ಪ್ರತಿನಿಧಿಗಳಿಗೆ ಉತ್ತಮ ಅವಕಾಶವಿರುತ್ತದೆ. ಗ್ರಾಮಗಳನ್ನು ಅಭಿವೃದ್ಧಿಪಡಿಸಲು ಅಧ್ಯಕ್ಷರು ಮತ್ತು ಸದಸ್ಯರು ಪ್ರಯತ್ನಿಸಬೇಕು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಕರೆ ನೀಡಿದರು.
ಔರಾದ ತಾಲೂಕಿನ ಬೋಂತಿ ತಾಂಡಾದಲ್ಲಿ ಗ್ರಾಪಂನ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸುವ ಕುರಿತಂತೆ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ ನಡೆದ ಚಿಂತನ-ಮಂಥನ ಸಭೆಯಲ್ಲಿ ಮಾತನಾಡಿದ ಅವರು, ಔರಾದ ಕ್ಷೇತ್ರವನ್ನು ಗುಡಿಸಲು ಮುಕ್ತವಾಗಿಸುವ ಸಂಕಲ್ಪ ಹೊಂದಿದ್ದು, ಸರ್ವರಿಗೂ ಸ್ವಂತ ಸೂರು ಒದಗಿಸುವ ನಿಟ್ಟಿನಲ್ಲಿ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ 2,750 ಮನೆಗಳನ್ನು ಮಂಜೂರು ಮಾಡಲಾಗಿದೆ. ಗ್ರಾಮ ಸಭೆಗಳನ್ನು ನಡೆಸುವ ಮೂಲಕ ಪಾರದರ್ಶಕವಾಗಿ ಮನೆಗಳನ್ನು ಹಂಚಿಕೆ ಮಾಡಬೇಕು. ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಹೆಚ್ಚಿನ ಮುತುವರ್ಜಿ ವಹಿಸಬೇಕೆಂದು ಮನವಿ ಮಾಡಿದರು.
ಗ್ರಾಮಗಳನ್ನು ಸರ್ವತೋಮುಖವಾಗಿ ಅಭಿವೃದ್ಧಿಪಡಿಸಲು ಗ್ರಾಪಂಗಳಿಗೆ ಸಾಕಷ್ಟು ಅವಕಾಶಗಳಿವೆ. ಗ್ರಾಮಗಳಲ್ಲಿ ಯಾವುದೇ ರೀತಿಯ ಮೂಲ ಸೌಕರ್ಯಗಳಿಗೆ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಆಗಾಗ ಶಾಲಾ-ಕಾಲೇಜುಗಳು ಮತ್ತು ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿರಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕುಡಿಯುವ ನೀರು ಹಾಗೂ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಹಿತದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಜಲ ಜೀವನ ಮಿಷನ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಹಂತ-ಹಂತವಾಗಿ ತಾಲೂಕಿನ ಎಲ್ಲ ಮನೆಗಳಿಗೆ ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಈ ಯೋಜನೆ ನಾಲ್ಕು ಹಂತಗಳಲ್ಲಿ ಕಾರ್ಯರೂಪಕ್ಕೆ ತರಲಾಗುತ್ತಿದ್ದು, ಪಂಚಾಯತ್‌ನ ಪ್ರತಿನಿಧಿಗಳು ಯೋಜನೆ ಸರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.
ಜನತೆಯ ಏಳಿಗೆಗಾಗಿ ಸರ್ಕಾರವು ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈ ಎಲ್ಲ ಯೋಜನೆಗಳ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸಬೇಕು. ಸರ್ಕಾರದ ಯೋಜನೆಗಳು ಅರ್ಹ ವ್ಯಕ್ತಿಗಳಿಗೆ ತಲುಪಿಸಲು ಗ್ರಾಪಂ ಪ್ರತಿನಿಧಿಗಳು ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು.
ಎಪಿಎಂಸಿ ಅಧ್ಯಕ್ಷ ರಂಗರಾವ ಜಾಧವ, ಪ್ರಮುಖರಾದ ಶಿವಾಜಿರಾವ ಕಾಳೆ, ವಸಂತ ಬಿರಾದಾರ, ಕಿರಣ ಪಾಟೀಲ, ಮಾರುತಿ ಚವ್ಹಾಣ, ರಾಮಶೆಟ್ಟಿ ಪನ್ನಾಳೆ, ಧೊಂಡಿಬಾ ನರೋಟೆ, ಗಿರೀಶ ವಡೆಯರ್, ಬಸವರಾಜ ಪಾಟೀಲ, ಕೇರಬಾ ಪವಾರ್ ಸೇರಿದಂತೆ ಗ್ರಾಪಂ ಅಧ್ಯಕ್ಷರು, ಸದಸ್ಯರು ಇದ್ದರು.