ಹಾಸನ: ಕೇಂದ್ರ ಮತ್ತು ರಾಜ್ಯ ಸರ್ಕಾರ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಆರೋಗ್ಯ ಕವಚ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಪ್ರೀತಂ ಜೆ. ಗೌಡ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಹಾಸನ ವೈದ್ಯಕೀಯ ಕಾಲೇಜು ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಪಾಕ್ಷಿಕ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಈ ಯೋಜನೆಯ ಬಗ್ಗೆ ಜನರಿಗೆ ಅರಿವು ಮೂಡಿಸಬೇಕೆಂದರು.
ಬಡ ಜನರ ಆಶಾಕಿರಣ: ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯು ಬಡವರ್ಗದ ಜನರಿಗೆ ಆಶಾಕಿರಣವಾಗಿದ್ದು, ಅತ್ಯಂತ ಕಷ್ಟದ ಸಂದರ್ಭಗಳಲ್ಲಿ ಇಂತಹ ಯೋಜನೆಗಳು ಸಹಕಾರಿಯಾಗಲಿವೆ. ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರಿಗೂ ತಲುಪಿಸಬೇಕು ಎಂದರು. ಆರೋಗ್ಯಪೂರ್ಣ ಸಮಾಜವನ್ನು ಈ ಯೋಜನೆ ಯಡಿಯಲ್ಲಿ ನಿರ್ಮಾಣ ಮಾಡಬೇಕಾಗಿದೆ. ಆರೋಗ್ಯ ಪೂರ್ಣ ಜನರಿದ್ದರೆ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಲು ಸಾಧ್ಯ. ಈ ಯೋಜನೆ ಸಮರ್ಪಕವಾಗಿ ಜನರಿಗೆ ತಲುಪಬೇಕು ಎಂದರು.
ಹಿಮ್ಸ್‌ನ ನಿರ್ದೇಶಕ ಡಾ.ಬಿ.ಸಿ. ರವಿಕುಮಾರ್ ಮಾತನಾಡಿ, ಪ್ರತಿಯೊಬ್ಬರಿಗೂ ಆರೋಗ್ಯ ಬಹು ಮುಖ್ಯವಾಗಿದ್ದು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಯಾವುದೇ ವ್ಯಕ್ತಿ ಆರೋಗ್ಯ ಸೌಲಭ್ಯದಿಂದ ವಂಚಿತ ರಾಗಬಾರದು ಎಂಬ ಮೂಲ ಉದ್ದೇಶ ಈ ಯೋಜನೆಯದ್ದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಕೃಷ್ಣಮೂರ್ತಿ, ಹಿಮ್ಸ್‌ನ ಮುಖ್ಯ ಆಡಳಿತಾಧಿಕಾರಿ ಕಲ್ಪಶ್ರೀ, ತಾಲೂಕು ಆರೋಗ್ಯಾಧಿಕಾರಿ ಡಾ. ವಿಜಯ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಜಾಗೃತಿ ಜಾಥಾ: ಸಭಾ ಕಾರ್ಯಕ್ರಮಕ್ಕೆ ಮೊದಲು ವೈದ್ಯಕೀಯ ಹಾಗೂ ನರ್ಸಿಂಗ್ ಕಾಲೇಜು ವಿದ್ಯಾರ್ಥಿ ಗಳಿಂದ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಪಾಕ್ಷಿಕ ಆಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಯಿತು. ಡೀಸಿ ಕಚೇರಿ ಆವರಣದಲ್ಲಿ ಡೀಸಿ ಆರ್.ಗಿರೀಶ್ ಜಾಥಾಕ್ಕೆ ಚಾಲನೆ ನೀಡಿದರು