ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಕರ್ನಾಟಕ ಪ್ರತಿಧ್ವನಿ ವೇದಿಕೆ ಸದಸ್ಯರು ಶನಿವಾರ ನಗರದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿದರು.
ಶಾಲಾ ಶಿಕ್ಷಕರ ಸಂಘ: ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರು, ರಾಜ್ಯದಲ್ಲಿ 7ನೇ ವೇತನ ಆಯೋಗದ ಶಿಫಾರಸನ್ನು ಜಾರಿಗೊಳಿಸಬೇಕು, ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಮುಂದುವರಿಸಬೇಕು, ಪ್ರಾಥಮಿಕ ಶಿಕ್ಷಣದ ಅಭಿವೃದ್ಧಿಗೆ ಪ್ರಾಥಮಿಕ ಶಿಕ್ಷಣ ಮಂಡಳಿ ಸ್ಥಾಪಿಸಬೇಕು,
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಬೇಕು ಹಾಗೂ ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಪ್ರತಿ ಶಾಲೆಯಲ್ಲಿ ಕನಿಷ್ಠ ಒಬ್ಬ ಶಿಕ್ಷಕ, ಶಿಕ್ಷಕಿ ಹಾಗೂ ಓರ್ವ ಮುಖ್ಯೋಪಾಧ್ಯಾಯರನ್ನು ನಿಯುಕ್ತಿಗೊಳಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಎಚ್.ಬಿ.ಬಸವರಾಜು, ಪ್ರಧಾನ ಕಾರ್ಯದರ್ಶಿ ಕೆ.ಬಿ.ಸೋಮೇಗೌಡ, ಉಪಾಧ್ಯಕ್ಷ ಮಹೇಶ್, ಶಿಕ್ಷಕರಾದ ಮಮತಾ, ರಾಧಾ ಇತರರಿದ್ದರು.
ಪ್ರತಿಧ್ವನಿ ವೇದಿಕೆ: ವಿದ್ಯಾರ್ಥಿಗಳಿಗೆ ಕ್ಷೀರಭಾಗ್ಯ ಯೋಜನೆಯನ್ನು ನೀಡುವ ರಾಜ್ಯ ಸರ್ಕಾರ ಜಾನುವಾರುಗಳಿಗೆ ಕುಡಿಯುವ ನೀರಿನ ಭಾಗ್ಯ ನೀಡಲಿ ಎಂದು ಒತ್ತಾಯಿಸಿ ಕರ್ನಾಟಕ ಪ್ರತಿಧ್ವನಿ ವೇದಿಕೆ ಕಾರ್ಯಕರ್ತರು ಜಾನುವಾರುಗಳೊಂದಿಗೆ ಪ್ರತಿಭಟಿಸಿದರು.
ನಗರದ ಕಾಡಾ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯದಲ್ಲಿ ಎದುರಾಗಿರುವ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಹೀಗಿದ್ದರೂ ರಾಜ್ಯ ಸರ್ಕಾರ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯ ಭರ್ತಿಯಾಗುವ ಮೊದಲೇ ತಮಿಳುನಾಡಿಗೆ ನೀಡು ಬಿಡುಗಡೆ ಮಾಡುತ್ತಿದೆ. ಇದರಿಂದಾಗಿ ಅಚ್ಚುಕಟ್ಟು ಪ್ರದೇಶಗಳಲ್ಲಿನ ಕರೆಕಟ್ಟೆಗಳು ಬರಿದಾಗಿದ್ದು, ವ್ಯವಸಾಯಕ್ಕೆ ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ.
ಹೀಗಾಗಿ ಸರ್ಕಾರ ರಾಜ್ಯದ ರೈತರು, ಜನರು ಹಾಗೂ ಜಾನುವಾರಗಳ ಬಗ್ಗೆ ಕಾಳಜಿ ತೋರುವ ಮೂಲಕ ಕೆರೆಕಟ್ಟೆಗಳಿಗೆ ನೀರು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ವೇದಿಕೆ ರಾಜಾಧ್ಯಕ್ಷ ಪ್ರತಿಧ್ವನಿ ಪ್ರಸಾದ್, ರಾಜ್ಯ ಸಂಚಾಲಕ ಅರ್ಜುನ್, ಮೈಸೂರು ಘಟಕ ಮುಖಂಡ ರಂಜನ್‌ಕುಮಾರ್, ನಂಜನಗೂಡು ಅಧ್ಯಕ್ಷ ತ್ರೀಣೇಶ್, ಗುಂಡ್ಲುಪೇಟೆ ಅಧ್ಯಕ್ಷ ಮಂಜುಕುಮಾರ್ ಇನ್ನಿತರರಿದ್ದರು.