ಬೆಂಗಳೂರು: ಹಾಸನದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದೆ. ಪ್ರಕರಣವನ್ನು ಪ್ರಮುಖ ಅಸ್ತ್ರವಾಗಿ ಮಾಡಿಕೊಂಡಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಮುಗಿಬಿದ್ದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಎಚ್.ಡಿ.ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸುವಂತೆ ಆಗ್ರಹಿಸಿ ಸೋಮವಾರ ಬೆಂಗಳೂರು ಸಹಿತ ರಾಜ್ಯದ ಹಲವೆಡೆ, ಕಾಂಗ್ರೆಸ್ ಮಹಿಳಾ ಘಟಕ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಎದುರು ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲಕಾ ಲಂಬಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತರು, ಮೋದಿ ಜತೆಗಿರುವ ದೇವೇಗೌಡರ ಕುಟುಂಬದ ಫಲಕಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಎದುರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕಾಮುಕ ಪ್ರಜ್ವಲ್ ರೇವಣ್ಣನ ಪೂರ್ವಾಪರ ಗೊತ್ತಿದ್ದೂ ಟಿಕೆಟ್ ನೀಡಿದ್ದಲ್ಲದೆ, ಪ್ರಚಾರ ಮಾಡುವ ಮೂಲಕ ಆತನ ಪರ ಮತ ಯಾಚಿಸಿರುವುದು ಬಿಜೆಪಿ ನಾಯಕರು ಮಹಿಳಾ ವಿರೋಧಿಗಳು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ದೂರಿದರು.
ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಗಳಾದ ಸಂಸದ ಪ್ರಜ್ವಲ್ ಹಾಗೂ ಶಾಸಕ ಎಚ್.ಡಿ.ರೇವಣ್ಣ ವಿರುದ್ಧ ಹೊಳೆನರಸೀಪುರದಲ್ಲಿ ಪ್ರಕರಣ ದಾಖಲಾಗಿದೆ. ಅವರನ್ನು ತತ್‌ಕ್ಷಣವೇ ಬಂಧಿಸಬೇಕು ಹಾಗೂ ಸಂತ್ರಸ್ತ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಪ್ರತಿಭಟನಕಾರರು ಆಗ್ರಹಿಸಿದರು.
ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟ ಅಯೋಜಿಸಿದ್ದ ಪ್ರತಿಭಟನಾ ಮೆರವಣಿಗೆ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರಿಗೆ ಮನವಿ ಸಲ್ಲಿಸಲಾಯಿತು. ಹಾಸನ ಜಿಲ್ಲೆಯ ಹಲವೆಡೆ ಪ್ರತಿಭಟನೆ ತೀವ್ರಗೊಂಡಿದ್ದು, ಹೊಳೆನರಸೀಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಪ್ರಜ್ವಲ್ ಹಾಗೂ ರೇವಣ್ಣ ಭಾವಚಿತ್ರಕ್ಕೆ ಬೆಂಕಿಯಿಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಅದೇ ರೀತಿ, ಹುಬ್ಬಳ್ಳಿಯಲ್ಲೂ ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಬಿಜೆಪಿ ಮತ್ತು ಜೆಡಿಎಸ್ ನಾಯಕರ ಪ್ರತಿಕೃತಿ ಹಾಗೂ ಫೋಟೋಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಈ ವೇಳೆ ಮಾತನಾಡಿದ ನಲಪಾಡ್, ಇದೊಂದು ಹೇಯ ಕೃತ್ಯ. ಈ ದೌರ್ಜನ್ಯಕ್ಕೆ ಕಾರಣವಾಗಿರುವ ವ್ಯಕ್ತಿಗಳನ್ನು ತತ್‌ಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದರು.