ವಿಧಾನಸಭೆ: ಗ್ರಾಮೀಣ ಭಾಗದಲ್ಲಿ ಸಮರ್ಪಕ ಬಸ್ ಸೇವೆ ಒದಗಿಸಲು 3,604 ಹೊಸ ಬಸ್ ಖರೀದಿಗೆ ತೀರ್ಮಾನಿಸಲಾಗಿದೆ ಎಂದು ಇಂಧನ ಸಚಿವ ಸುನಿಲ್‌ಕುಮಾರ್ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನ ತುಕಾರಾಂ ಪ್ರಸ್ತಾಪಕ್ಕೆ ಸಚಿವ ಶ್ರೀರಾಮುಲು ಪರವಾಗಿ ಉತ್ತರಿಸಿ, ಈ ಪೈಕಿ 800 ಬಸ್ ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಿರಿಸಲಾಗುವುದು ಎಂದರು.
ಗ್ರಾಮೀಣ ಭಾಗದಲ್ಲಿ ಬಸ್ ಸೇವೆ ಇಲ್ಲದೆ ಸಮಸ್ಯೆ ಉಂಟಾಗಿರುವ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದೆ. ಆದಷ್ಟು ಶೀಘ್ರ ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಇದಕ್ಕೂ ಮುನ್ನ ತುಕಾರಾಂ ಅವರು, ಕಲ್ಯಾಣ ಕರ್ನಾಟಕ ಭಾಗವನ್ನು ನಿರ್ಲಕ್ಷ್ಯ ಮಾಡಲಾಗಿದೆ. ಬಸ್ ಸೇವೆ ಇಲ್ಲದೆ ವಿದ್ಯಾರ್ಥಿಗಳು ಶಾಲಾ-ಕಾಲೇಜು ಬಿಡುವಂತಾಗಿದೆ ಎಂದು ಹೇಳಿದರು.
ಕಾಂಗ್ರೆಸ್‌ನ ಡಾ.ರಂಗನಾಥ್ ಸಹ ತಮ್ಮ ಕ್ಷೇತ್ರದಲ್ಲಿ ಬಸ್ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದರು. ಇದಕ್ಕೆ ಜೆಡಿಎಸ್ ಹಾಗೂ ಕಾಂಗ್ರೆಸ್‌ನ ಹಲವು ಸದಸ್ಯರು ಧ್ವನಿಗೂಡಿಸಿದರು.
ಸಚಿವ ಸುನಿಲ್‌ಕುಮಾರ್, ಎಲ್ಲ ಶಾಸಕರ ಅಭಿಪ್ರಾಯ ಪಡೆದು ಗ್ರಾಮೀಣ ಭಾಗಕ್ಕೆ ಬಸ್ ಸೇವೆ ಕಲ್ಪಿಸಲಾಗುವುದು. ಸರ್ಕಾರ ಈ ವಿಷಯದಲ್ಲಿ ಗಮನಹರಿಸಲಿದೆ ಎಂದು ಭರವಸೆ ನೀಡಿದರು.