ದಾವಣಗೆರೆ: ಅನುದಾನಿತ ವಿದ್ಯಾಸಂಸ್ಥೆಗಳ ನೌಕರರಿಗೆ ಕಾಲ್ಪನಿಕ ವೇತನ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ನಗರದಲ್ಲಿ ಶನಿವಾರ ರಾಜ್ಯ ಅನುದಾನಿತ ಶಾಲಾ ಶಿಕ್ಷಕರ ಪಿಂಚಣಿ ವಂಚಿತ ನೌಕರರ ಜಿಲ್ಲಾ ಸಂಘದ ಪದಾಧಿಕಾರಿಗಳು ಪ್ರತಿಭಟಿಸಿದರು. ಹೈಸ್ಕೂಲ್ ಮೈದಾನದಲ್ಲಿ ಜಮಾಯಿಸಿದ ಪದಾಧಿಕಾರಿಗಳು, ಪಿ.ಬಿ. ರಸ್ತೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಸಾಂಕೇತಿಕವಾಗಿ ತೆರಳಿ ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪರಿಗೆ ಮನವಿ ಸಲ್ಲಿಸಿದರು.
ಕಾಲ್ಪನಿಕ ವೇತನ ಸೌಲಭ್ಯ ಮತ್ತು ಪಿಂಚಣಿ ಸೌಲಭ್ಯ ದೊರೆಯದೇ ಈಗಾಗಲೇ ಸುಮಾರು 1500ಕ್ಕೂ ಹೆಚ್ಚು ನೌಕರರು ನಿವೃತ್ತರಾಗಿದ್ದಾರೆ. ಅನೇಕರು ಸೇವೆಯಲ್ಲಿ ಇರುವಾಗಲೇ ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ. ಕೆಲವು ನೌಕರರು ವೇತನಾನುದಾನಕ್ಕೆ ಒಳಪಡುವುದಕ್ಕೂ ಮುನ್ನವೇ ಅಕಾಲಿಕವಾಗಿ ಮರಣ ಹೊಂದಿದ್ದಾರೆ. ಅವರ ಕುಟುಂಬಗಳಿಗೆ ಯಾವುದೇ ಆರ್ಥಿಕ ಸೌಲಭ್ಯ ದೊರೆತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ನೌಕರರು ವೇತನಾನುಧಾನಕ್ಕೆ ಒಳಪಡುವುದಕ್ಕೂ ಪೂರ್ವದ ಸೇವೆಯನ್ನು ಸೇರಿದ ದಿನಾಂಕದಿಂದಲೇ ಪರಿಗಣಿಸಿ ವಿವಿಧ ಸೌಲಭ್ಯ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದರೂ ಸಹ ಸರ್ಕಾರ ಮಾತ್ರ ಬೇಡಿಕೆ ಈಡೇರಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಕಾಲ್ಪನಿಕ ವೇತನ ಸೌಲಭ್ಯಕ್ಕೆ ಸಂಬಂಧಿಸಿದಂತೆ ಬಸವರಾಜ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟ ಸದನ ಉಪಸಮಿತಿ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಅನುದಾನಿತ ವಿದ್ಯಾಸಂಸ್ಥೆಗಳ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಎಲ್ಲಾ ವಿಧದ ವೈದ್ಯಕೀಯ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.
ನಮ್ಮೆಲ್ಲಾ ಬೇಡಿಕೆಗಳನ್ನು ಸರ್ಕಾರ ಈಡೇರಿಸದೇ ಇದ್ದಲ್ಲಿ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಅಹೋರಾತ್ರಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಪ್ರತಿಭಟನಾಕಾರು ಎಚ್ಚರಿಸಿದರು. ಸಂಘದ ರಾಜ್ಯ ಸಂಚಾಲಕ ವಿ.ನಾಗೇಂದ್ರಪ್ಪ, ಅಧ್ಯಕ್ಷ ವಿ.ಎಂ. ವಿರೂಪಾಕ್ಷಪ್ಪ, ಕಾರ್ಯದರ್ಶಿ ಪರಶುರಾಮ್ ರೆಡ್ಡಿ, ಖಜಾಂಚಿ ಬಸಲಿಂಗಪ್ಪ ಹುಗ್ಗಿ, ಜಿಲ್ಲಾ ಸಂಚಾಲಕ ಕೆ.ಸಿ. ಧನ್ಯಕುಮಾರ್, ಷಣ್ಮುಖ, ರಾಮನಗೌಡ, ರಹಮತ್‌ವುಲ್ಲಾ, ಅಂಜಿನಪ್ಪ, ಕೆ.ಪಿ. ಪ್ರಕಾಶ್, ಚಂದ್ರಪ್ಪ ಸೇರಿದಂತೆ
ಇತರರು ಪ್ರತಿಭಟನೆಯಲ್ಲಿದ್ದರು.