Advertisement
ನಗರದ ಮುಖ್ಯ ರಸ್ತೆಗಳಲ್ಲಿ ಬೃಹತ್ ಪ್ರತಿಭಟನಾ ನಡೆಸಿದ ಬಳಿಕ ಸ್ಥಳೀಯ ತಾಲೂಕು ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದ ಕಾಲೇಜು ವಿದ್ಯಾರ್ಥಿಗಳು, ಸರ್ಕಾರ ಶೈಕ್ಷಣಿಕ ವರ್ಷ ಆರಂಭವಾಗಿ ತಿಂಗಳು ಸಮೀಪಿಸುತ್ತಿದ್ದರೂ ಉಚಿತ ಬಸ್‌ಪಾಸ್ ವಿತರಣೆಗೆ ಮುಂದಾಗದಿರುವುದನ್ನು ಖಂಡಿಸಿ ಮೈತ್ರಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Related Articles
Advertisement
ಇಂತಹ ದಿನಗಳಲ್ಲಿ ಹೆಚ್ಚಾಗಿ ಬಸ್ ಪಾಸ್ ಪಡೆಯುತ್ತಿರುವ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರೇ ಆಗಿದ್ದು, ರಾಜ್ಯದಲ್ಲಿನ ಎಲ್ಲಾ ವರ್ಗದ, ಎಲ್ಲಾ ಸ್ತರದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿದರು.
ಬೇಡಿಕೆ ಮೂಲೆಗುಂಪು: ಹಳ್ಳಿಗಳಿಂದ ತಾಲೂಕು-ಪಟ್ಟಣಗಳಿಗೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ವಿತರಿಸುವುದರಿಂದ ಶಿಕ್ಷಣಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ. ಕಳೆದ ವರ್ಷವು ಹಣವಿಲ್ಲವೆಂಬ ನೆಪವೊಡ್ಡಿದ ರಾಜ್ಯ ಸರ್ಕಾರ, ಈ ವರ್ಷವು ಕೂಡ ವಿದ್ಯಾರ್ಥಿಗಳ ಬೇಡಿಕೆಯನ್ನು ಮೂಲೆಗುಂಪು ಮಾಡಿದೆ.
ಕೇವಲ ಅಧಿಕಾರ ಉಳಿಸಿಕೊಳ್ಳುವ ಯೋಜನೆಯಲ್ಲಿರುವ ರಾಜ್ಯ ಸರ್ಕಾರಕ್ಕೆ ವಿದ್ಯಾರ್ಥಿಗಳ ಕೂಗು ಕೇಳಿಸಬೇಕು. ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದರು.
ತಾಲೂಕು ಕಚೇರಿ ಎದುರು ಧರಣಿ: ನಗರದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಳಿಕ ವಿದ್ಯಾರ್ಥಿಗಳು ತಾಲೂಕು ಕಚೇರಿ ಎದುರು ಧರಣಿ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ದಂಡಾಧಿಕಾರಿ ಕೆ.ನರಸಿಂಹಮೂರ್ತಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮಾನವ ಸರಪಳಿ ನಿರ್ಮಿಸಿ ರಸ್ತೆತಡೆ: ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಶಾಲಾ, ಕಾಲೇಜುಗಳ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸುವ ಮೂಲಕ ವಾಹನ ಸಂಚಾರಕ್ಕೆ ತಡೆಯೊಡ್ಡಿದ್ದರು.
ಸರ್ಕಾರ ಶಾಲಾ, ಕಾಲೇಜುಗಳ ಆರಂಭವಾಗಿ ತಿಂಗಳು ಸಮೀಪಿಸುತ್ತಿದ್ದರೂ ಬಸ್‌ಪಾಸ್ ವಿತರಣೆಗೆ ಮುಂದಾಗಿಲ್ಲ. ಕಳೆದ ಬಜೆಟ್‌ನಲ್ಲಿ ಘೋಷಣೆ ಮಾಡಿರುವಂತೆ ಎಲ್ಲರಿಗೂ ಉಚಿತ ಬಸ್‌ಪಾಸ್‌ನ್ನು ಈ ವರ್ಷದಿಂದಲೇ ನೀಡಬೇಕೆಂದು ಆಗ್ರಹಿಸಿದರು.