ಬೆಂಗಳೂರು: ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ರ್ಯಾಲಿ ನಡೆಸಿದರು.
ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಆರಂಭಿಸಿ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಇದರ ವಿರುದ್ಧ ಮುಂದಿನ ದಿನಗಳಲ್ಲಿ ಮತ್ತಷ್ಟು ಹೋರಾಟಗಳನ್ನು ರೂಪಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಈ ವೇಳೆ ಮಾತನಾಡಿದ ದಸಂಸ ರಾಜ್ಯ ಸಂಚಾಲಕ ಆರ್.ಮೋಹನ್ ರಾಜ್, ಸಮಿಶ್ರ ಸರ್ಕಾರದಲ್ಲಿ ಶೋಷಿತ ಸಮುದಾಯಗಳಿಗೆ ಅನ್ಯಾಯವಾಗುತ್ತಿದ್ದು ಆದಿವಾಸಿ ಮತ್ತು ಬಡುಕಟ್ಟು ಜನಾಂಗದವರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ದೂರಿದರು. ಆರ್ಥಿಕ ಮತ್ತು ಸಾಮಾಜಿಕವಾಗಿ ತೀರಾ ಹಿಂದುಳಿದಿರುವ ಎಸ್ಸಿ, ಎಸ್ಟಿ ಸಮುದಾಯಕ್ಕೆ ಸಿಗಬೇಕಾದ ಸರ್ಕಾರ ಸೌಲಭ್ಯಗಳು ಸಿಗುತ್ತಿಲ್ಲ.
ರಾಜ್ಯದ ಹಲವು ಪ್ರದೇಶಗಳಲ್ಲಿ ವಾಸಿಸುತ್ತಿರುವ ಬಡಕಟ್ಟು ಮತ್ತು ಆದಿವಾಸಿ ಜನಾಂಗದವರಿಗೆ ಸೂರಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಸೂರಿಲ್ಲದವರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಹೆಜ್ಜೆ ಇರಿಸಬೇಕು ಎಂದು ಆಗ್ರಹಿಸಿದರು.
ಸಂಘಟನೆ ಸಂಚಾಲಕ ಡಿ.ಸಿದ್ದರಾಜು ಮಾತನಾಡಿ , ಸರ್ಕಾರ 2006-2008ರ ಅರಣ್ಯ ಹಕ್ಕು ಕಾಯ್ದೆಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಪರಿಶಿಷ್ಠ ಜಾತಿ ಮತ್ತು ವರ್ಗಕ್ಕೆ ಸೇರಿದ ಕೈಗಾರಿಕೋದ್ಯಮಿಗಳಿಗೆ ಸರ್ಕಾರ ಶೇ.90ರಷ್ಟು ಮೂಲ ಬಂಡವಾಳವನ್ನು ಬಡ್ಡಿರಹಿತವಾಗಿ ನೀಡಬೇಕು ಎಂದು ಒತ್ತಾಯಿಸಿದರು.