ಮೈಸೂರು: ಪದವಿ ಕಾಲೇಜುಗಳ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಎಐಡಿವೈಒ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಪದವಿ ಕಾಲೇಜುಗಳು ಪ್ರಾರಂಭವಾಗಿ ತಿಂಗಳಾದರೂ ಉಪನ್ಯಾಸಕರನ್ನು ನೇಮಿಸಿಲ್ಲ ಎಂದು ಎಐಡಿವೈಒ ಸದಸ್ಯರು ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರು ಪ್ರತಿಭಟನೆ ನಡೆಸಿದರು.
ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರನ್ನು ನೇಮಿಸದ ಕಾರಣ ಕಾಲೇಜು ಆರಂಭವಾಗಿ ತಿಂಗಳು ಕಳೆದರೂ ತರಗತಿಗಳು ನಡೆಯುತ್ತಿಲ್ಲ. ಜತೆಗೆ ಮಹಾರಾಜ ಹಾಗೂ ಯುವರಾಜ ಕಾಲೇಜುಗಳಲ್ಲಿ ಮೂಲಸೌಕರ್ಯದ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟವರು ಇತ್ತ ಗಮನವಹಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಐಡಿವೈಒ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಮೇಟಿ, ಕಾರ್ಯಕರ್ತರಾದ ಸುನೀಲ್, ಹರೀಶ್, ಸುಮ, ಸಿದ್ದಾರ್ಥ್ ಸೇರಿದಂತೆ ಮಹಾರಾಜ ಕಾಲೇಜಿನ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಾಗವಹಿಸಿದ್ದರು.
ಜನಲೋಕಪಾಲ್ ಜಾರಿಯಾಗಲಿ: ಕೇಂದ್ರ ಸರ್ಕಾರ ಜನಲೋಕಪಾಲ ಮಸೂದೆ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪಡುವಾರಹಳ್ಳಿಯ ಶ್ರೀಗಂಧ ಯುವಕರ ಸಂಘದ ಸದಸ್ಯರು ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಮುಂಭಾಗ ಪ್ರತಿಭಟನೆ ನಡೆಸಿದರು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳಾದರೂ ಈ ಬಗ್ಗೆ ದನಿ ಎತ್ತುತ್ತಿಲ್ಲ.
ಹೀಗಾಗಿ ಕೇಂದ್ರ ಸರ್ಕಾರ ತನ್ನ ಭರವಸೆಯಂತೆ ದೇಶದ ಪ್ರಗತಿ, ಜನರ ಹಿತಾಸಕ್ತಿ ಹಾಗೂ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಕೂಡಲೇ ಜನಲೋಕಪಾಲ ಮಸೂದೆ ಜಾರಿಗೆ ತರಬೇಕೆಂದು ಒತ್ತಾಯಿಸಿದರು. ಈ ವೇಳೆ ಸಂಘದ ಅಧ್ಯಕ್ಷ ಪಡುವಾರಹಳ್ಳಿ ಎಂ. ರಾಮಕೃಷ್ಣ ಇತರರಿದ್ದರು.