Advertisement

ವಿದ್ಯಾರ್ಥಿಗಳ ಬೇಡಿಕೆ ಸರ್ಕಾರದ ಗಮನಕ್ಕೆ: ಸುಧಾಕರ್‌

09:16 PM Feb 29, 2020 | Team Udayavani |

ಚಿಕ್ಕಬಳ್ಳಾಪುರ: ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ದ್ವಿತೀಯ ಹಾಗೂ ತೃತೀಯ ಪದವಿ ವಿದ್ಯಾರ್ಥಿಗಳಿಗೂ ಸರ್ಕಾರ ಉಚಿತವಾಗಿ ಲ್ಯಾಪ್‌ಟಾಪ್‌ ವಿತರಿಸುವ ಬಗ್ಗೆ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರು ಬಜೆಟ್‌ನಲ್ಲಿ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

Advertisement

ನಗರದ ಸರ್ಕಾರಿ ಮಹಿಳಾ ಹಾಗೂ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಶನಿವಾರ ಪ್ರತ್ಯೇಕವಾಗಿ ಆಯೋಜಿಸಲಾಗಿದ್ದ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಜ್ಞಾನ ದೀಪ್ತಿ ಯೋಜನೆಯಡಿ ಸರ್ಕಾರ ನೀಡುತ್ತಿರುವ ಉಚಿತ ಲ್ಯಾಪ್‌ಟಾಪ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಸದ್ಬಳಕೆಗೆ ಸಲಹೆ: ವಿಜ್ಞಾನ-ತಂತ್ರಜ್ಞಾನ ಬೆಳವಣಿಗೆಯಾಗುತ್ತಿರುವ ಈ ದಿನಗಳಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನದತ್ತ ಮುನ್ನುಗಲು ಲ್ಯಾಪ್‌ಟಾಪ್‌ ಬಳಕೆಯು ಮುಖ್ಯ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಲ್ಯಾಟ್‌ಟಾಪ್‌ಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಅಧ್ಯಯನಕ್ಕಾಗಿ ಬೇಕಾದ ಸಂಶೋಧನೆಗೆ ಪೂರಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಣೆ ಮಾಡುತ್ತಿರುವ ರಾಜ್ಯ ಸರ್ಕಾರದ ಪರಿಕಲ್ಪನೆ ಉತ್ತಮವಾಗಿದೆ. ಆದರೆ ಪದವಿ ವಿದ್ಯಾರ್ಥಿಗಳಿಗೆ ಎಲ್ಲರಿಗೂ ವಿತರಣೆ ಮಾಡಬೇಕಿದೆ ಎಂದರು.

ಶಿಕ್ಷಣ ಮುಖ್ಯ: ತಂತ್ರಜ್ಞಾನಕ್ಕೆ ಒತ್ತು ನೀಡುತ್ತಿರುವುದರಿಂದ ಲ್ಯಾಪ್‌ಟಾಪ್‌ಗಳು ಪ್ರತಿಯೊಂದು ಹಂತದ ವಿದ್ಯಾರ್ಥಿಗಳಿಗೆ ಅತಿ ಮುಖ್ಯ. ಸಮಾಜವು ಸುಸ್ಥಿರವಾಗಿ ಬೆಳವಣಿಗೆಯಾಗಬೇಕಾದರೆ ಶಿಕ್ಷಣ ಮುಖ್ಯ. ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗೂ ಅಂಬೇಡ್ಕರ್‌ ವಿಶೇಷವಾಗಿ ಸಾವಿತ್ರಿಭಾಯಿಪುಲೆ ಅವರು ಕೂಡ ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಒತ್ತು ನೀಡಿದ್ದಾರೆ ಎಂದರು.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರ್ವ ಶಿಕ್ಷಣ ಅಭಿಯಾನವನ್ನು ಆಯೋಜಿಸಿದೆ. ಇದರಿಂದ ಪ್ರತಿಯೊಬ್ಬರು ಪ್ರಾಥಮಿಕ ಹಂತದ ಶಿಕ್ಷಣ ಕಡ್ಡಾಯವಾಗಿ ಪಡೆಯಬೇಕೆಂಬ ಆಶಯವನ್ನು ಹೊಂದಿದೆ ಎಂದರು.

Advertisement

ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ತಾಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಪಂ ಸದಸ್ಯ ವೆಂಕಟೇಶ್‌, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಟಿ.ನಾಗರಾಜಯ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಚಂದ್ರಪ್ಪ, ಉಪನ್ಯಾಸಕರಾದ ಬಿ.ಎನ್‌.ನರಸಿಂಹಮೂರ್ತಿ, ಮುಖಂಡರಾದ ಮರಳುಕುಂಟೆ ಕೃಷ್ಣಮೂರ್ತಿ, ನಗರಸಭಾ ಸದಸ್ಯರಾದ ಗಜೇಂದ್ರ, ಮಂಜುನಾಥಚಾರಿ, ಭಾರತಮ್ಮ, ಮಾಜಿ ಸದಸ್ಯರಾದ ಮುನಿಕೃಷ್ಣಪ್ಪ, ಕೇಶವಕುಮಾರ್‌, ಪ್ರಸಾದ್‌, ದ್ಯಾವಣ್ಣ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು.

677 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಣೆ: ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್‌ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ 238 ವಿದ್ಯಾರ್ಥಿಗಳಿಗೆ ಹಾಗೂ ಪ್ರಥಮ ದರ್ಜೆ ಕಾಲೇಜಿನಲ್ಲಿ 439 ವಿದ್ಯಾರ್ಥಿಗಳಿಗೆ ಸೇರಿ ಒಟ್ಟು 677 ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಜ್ಞಾನ ದೀಪ್ತಿ ಯೋಜನೆಯಡಿ ಉಚಿತವಾಗಿ ಲ್ಯಾಪ್‌ಟಾಪ್‌ಗಳನ್ನು ವಿತರಿಸಿದರು.

ಕಾಂಗ್ರೆಸ್‌ಗೆ ಕರೆದರೆ ನೋಡೋಣ: ನಮಗೆ ಅಧಿಕಾರದ ಆಸೆ ಇಲ್ಲ ಎಂದು ಇತ್ತೀಚೆಗೆ ಹೇಳಿಕೆ ನೀಡಿರುವ ಮಾಜಿ ಪ್ರಧಾನ ಹೆಚ್‌.ಡಿ.ದೇವೇಗೌಡರ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡದ ಸಚಿವ ಸುಧಾಕರ್‌, ಅವರೆಲ್ಲಾ ದೊಡ್ಡವರು ಎಂದರು. ಮಾಜಿ ಕೇಂದ್ರ ಸಚಿವೆ ಮಾರ್ಗರೆಟ್‌ ಅಳ್ವಾ ಬಿಜೆಪಿಗೆ ಹೋಗಿರುವ ಶಾಸಕರನ್ನು ಮರಳಿ ಕಾಂಗ್ರೆಸ್‌ ಕರೆತರುವಂತೆ ಸಿದ್ದರಾಮಯ್ಯಗೆ ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ, ಕಾಂಗ್ರೆಸ್‌ ಕರೆಯಲಿ ನೋಡೋಣ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next