Advertisement

Dengue case 15 ದಿನಗಳಲ್ಲಿ ಸಾವಿರ ದಾಟಿದ ಡೆಂಗ್ಯೂ ಪ್ರಕರಣ: ಸಾಗರದ ವ್ಯಕ್ತಿ ಸಾವು?

08:58 AM Jun 19, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪ್ರವೇಶಿಸುತ್ತಿದ್ದಂತೆ ಸಾಂಕ್ರಾಮಿಕ ರೋಗಗಳ ಜತೆಗೆ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಕಳೆದ 15 ದಿನಗಳಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಒಟ್ಟು 1,000 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಓರ್ವ ವ್ಯಕ್ತಿ ಡೆಂಗ್ಯೂನಿಂದ ಮೃತಪಟ್ಟಿದ್ದು ಆರೋಗ್ಯ ಇಲಾಖೆ ದೃಢಪಡಿಸಬೇಕಿದೆ.

Advertisement

ಕಳೆದ ವರ್ಷ ಇದೇ ಅವಧಿಯಲ್ಲಿ ಜನವರಿಯಿಂದ ಜೂ.16ರ ವರೆಗೆ 2 ಸಾವಿರ ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದವು. ಆದರೆ ಪ್ರಸಕ್ತ ಸಾಲಿನಲ್ಲಿ 4,885 ಮಂದಿಯಲ್ಲಿ ಡೆಂಗ್ಯೂ ಪಾಸಿಟಿವ್‌ ವರದಿಯಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಈ ಬಾರಿ ದುಪ್ಪಟ್ಟು ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆಯ ಅಂಕಿ ಅಂಶಗಳು ಹೇಳುತ್ತವೆ.

ಡೆಂಗ್ಯೂ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ನಿಯಂತ್ರಣ ಕ್ರಮಗಳನ್ನು ತೀವ್ರಗೊಳಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಇದಕ್ಕಾಗಿ ಇಲಾಖೆಯು ಎನ್‌ಎಚ್‌ಎಂನ ಮಿಷನ್‌ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು (ಡಿಎಚ್‌ಒ) ಮತ್ತು ರೋಗ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆ ನಡೆಸುವುದರ ಜತೆಗೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.

ಆರೋಗ್ಯ ಸಿಬಂದಿ ಮತ್ತು ಆಶಾ ಕಾರ್ಯಕರ್ತೆಯರು ಪ್ರತಿನಿತ್ಯ ಮನೆ-ಮನೆಗೆ ಭೇಟಿ ನೀಡುವುದು, ಜಿಲ್ಲಾ ಆಸ್ಪತ್ರೆಗಳಲ್ಲಿ ದೃಢಪಟ್ಟ ಡೆಂಗ್ಯೂ ಪ್ರಕರಣಗಳ ಮೇಲ್ವಿಚಾರಣೆ, ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಜಾಗೃತಿ ಅಭಿಯಾನಗಳು ಮತ್ತು ಪರೀಕ್ಷಾ ಕಿಟ್‌ಗಳು ಮತ್ತು ಚಿಕಿತ್ಸಾ ಔಷಧಗಳ ಲಭ್ಯತೆಯನ್ನು ಪರೀಶೀಲನೆ ನಡೆಸಲಾಗುತ್ತಿದೆ.

ಎಲ್ಲಿ ಅಧಿಕ ಪ್ರಕರಣ
ಜಿಲ್ಲಾವಾರು ಪಟ್ಟಿಯಲ್ಲಿ ಮೈಸೂರು ಮೊದಲ ಸ್ಥಾನದಲ್ಲಿದೆ. ಇಲ್ಲಿ 377 ಪ್ರಕರಣಗಳು ವರದಿಯಾಗಿವೆ. ಚಿಕ್ಕಮಗಳೂರು 346, ಹಾವೇರಿ 272, ಶಿವಮೊಗ್ಗ 236, ಚಿತ್ರದುರ್ಗ 229, ದ.ಕ. ಜಿಲ್ಲೆಯಲ್ಲಿ 211 ಪ್ರಕರಣ ವರದಿಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next