ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ನಾಲ್ಕು ವಾರಗಳ ಮಧ್ಯಂತರ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧದ ಪ್ರಕರಣ ಹಾಗೂ ಆ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದು ಕೋರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯು ನ್ಯಾ. ಪಿ.ಎಸ್. ದಿನೇಶ್‌ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ನಾಲ್ಕು ವಾರಗಳ ಮಧ್ಯಂತರ ತಡೆ ನೀಡಿತು. ಅಲ್ಲದೇ ದೂರುದಾರ ಎನ್. ಗಂಗರಾಜು ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಮೈಸೂರಿನ ವಿಜಯನಗರ 2ಮೇ ಹಂತದ ಬಡಾವಣೆ ನಿರ್ಮಾಣಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಸ್ವಾಧೀನಪಡಿಸಿಕೊಂಡಿದ್ದ 535 ಎಕರೆ ಜಮೀನಿನಲ್ಲಿ 30 ಗುಂಟೆ ಜಮೀನು ಡಿನೋಟಿಫೈ ಮಾಡಲಾದ ಪ್ರಕರಣದಲ್ಲಿ ಸಿದ್ದರಾಮಯ್ಯ ಆರೋಪ ಎದುರಿಸುತ್ತಿದ್ದಾರೆ.
ಡಿನೋಟಿಫೈ ಮಾಡಲಾದ 30 ಗುಂಟೆ ಜಮೀನು ಪೈಕಿ 10 ಗುಂಟೆ ಖರೀದಿಸಿ ಸಿದ್ದರಾಮಯ್ಯ ಅಲ್ಲಿ ಮನೆ ನಿರ್ಮಾಣ ಮಾಡಿ, ಬಳಿಕ ಆ ಮನೆಯನ್ನು ಮಾರಾಟ ಮಾಡಿದ್ದಾರೆ. ಈ ರೀತಿ ನೋಟಿಫೈ ಮಾಡಿದ ಜಾಗವನ್ನು ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಗಂಗರಾಜು ಎಂಬುವರು ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದರು.
ತನಿಖೆ ನಡೆಸಿದ್ದ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿ ದೂರುದಾರ ಗಂಗರಾಜು ಕೋರ್ಟ್ ಮೊರೆ ಹೋಗಿದ್ದರು. ಬಿ ರಿಪೋರ್ಟ್ ರದ್ದುಗೊಳಿಸಿ, ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯನವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಈಗ ಪ್ರಕರಣ ವಿಚಾರಣೆ ಹಾಗೂ ಸಮನ್ಸ್ ರದ್ದು ಕೋರಿ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.