Advertisement

ಡಿನೋಟಿಫಿಕೇಷನ್‌: ನೋಟಿಸ್‌

06:46 AM Mar 13, 2019 | Team Udayavani |

ಬೆಂಗಳೂರು: “ಐಟಿ ಕಾರಿಡಾರ್‌’ಗೆ ಮಾರತ್ತಹಳ್ಳಿ ಬಳಿಯ ದೇವರಬೀಸನಹಳ್ಳಿಯಲ್ಲಿ ಕೆಐಎಡಿಬಿ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಫಿಕೇಷನ್‌ ಮಾಡಿರುವ ಆರೋಪ ಪ್ರಕರಣದ ಸಂಬಂಧ ತಮ್ಮ ವಿರುದ್ಧದ ಖಾಸಗಿ ದೂರು ಹಾಗೂ ಎಫ್ಐಆರ್‌ ರದ್ದುಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಲ್ಲಿಸಿದ ಅರ್ಜಿ ವಿಚಾರವಾಗಿ ಹೈಕೋರ್ಟ್‌ ಮಂಗಳವಾರ ಲೋಕಾಯುಕ್ತ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿದೆ.

Advertisement

ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಹಾಗೂ ದೂರುದಾರ ವಾಸುದೇವ ರೆಡ್ಡಿಗೆ ನೋಟಿಸ್‌ ಜಾರಿಗೆ ಆದೇಶಿಸಿ ವಿಚಾರಣೆ ಮಾ. 20ಕ್ಕೆ ಮುಂದೂಡಿತು.

ಡಿ-ನೋಟಿಫಿಕೇಷನ್‌ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ ಖಾಸಗಿ ದೂರು ರದ್ದುಗೊಳಿಸಬೇಕು ಹಾಗೂ ಅರ್ಜಿ ಇತ್ಯರ್ಥಗೊಳ್ಳುವವರೆಗೆ ಇದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ನಗರದ ವೈಟ್‌ಫೀಲ್ಡ್‌ ಮತ್ತು ಎಲೆಕ್ಟ್ರಾನಿಕ್‌ ಸಿಟಿಯ ಜಾಗವನ್ನು “ಐಟಿ ಕಾರಿಡಾರ್‌’ ಎಂದು ರಾಜ್ಯ ಸರ್ಕಾರ 2000-2001ರಲ್ಲಿ ಘೋಷಿಸಿತ್ತು. ಅದರಂತೆ ಮಾರತಹಳ್ಳಿ, ಬೆಳ್ಳಂದೂರು, ಸರ್ಜಾಪುರ, ದೇವರಬೀಸನಹಳ್ಳಿ, ಕಾಡುಬೀಸನಹಳ್ಳಿ, ಕರಿಯಮ್ಮನ ಅಗ್ರಹಾರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿನ 434 ಎಕರೆ ಪ್ರದೇಶವನ್ನು ಸ್ವಾಧೀನಕ್ಕೆ ಕೆಐಎಡಿಬಿ ಅಧಿಸೂಚನೆ ಹೊರಡಿಸಿತ್ತು. 

ಆದರೆ, ಬಿ.ಎಸ್‌.ಯಡಿಯೂರಪ್ಪ  ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ಕೆಐಎಡಿಬಿ ವಶಪಡಿಸಿಕೊಂಡಿದ್ದ ದೇವರಬೀಸನಹಳ್ಳಿಯ ಸರ್ವೇ ನಂ 49ರ 4.30 ಎಕರೆ, ಬೆಳ್ಳಂದೂರು ಗ್ರಾಮದ ಸರ್ವೇ ನಂ 46/1ರ 1.17 ಎಕರೆ, ಸರ್ವೇ ನಂ 18ರ 1.10 ಎಕರೆ, ಸರ್ವೇ ನಂ 10ರ 33 ಗುಂಟೆ ಜಾಗವನ್ನು ಡಿನೋಟಿಫಿಕೇಷನ್‌ ಮಾಡಿದ್ದಾರೆ ಎಂದು ಆರೋಪಿಸಿ ವಾಸುದೇವ ರೆಡ್ಡಿ ಎಂಬುವರು 2013ರ ಜುಲೈ 10ರಂದು ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದರು.

Advertisement

ಅದರಂತೆ ಪೊಲೀಸರು 2015ರ ಫೆ.21ರಂದು ಎಫ್ಐಆರ್‌ ದಾಖಲಿಸಿ, ಯಡಿಯೂರಪ್ಪ ಅವರನ್ನು ಎರಡನೇ ಆರೋಪಿಯನ್ನಾಗಿ ಮಾಡಲಾಗಿತ್ತು. ಖಾಸಗಿ ದೂರು ಹಾಗೂ ಎಫ್ಐಆರ್‌ ರದ್ದುಗೊಳಿಸುವಂತೆ ಕೋರಿ ಬಿಎಸ್‌ವೈ ಹೈಕೋರ್ಟ್‌ ಮೆಟ್ಟಿಲಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next