ಹೊಸದಿಲ್ಲಿ: ದೇಶದ ವಿವಿಧ ಕಾರಾಗೃಹಗಳಲ್ಲಿ ಇರುವ 60 ವರ್ಷಕ್ಕಿಂತ ಮೇಲ್ಪಟ್ಟ ಮಹಿಳಾ ಮತ್ತು ತೃತೀಯಲಿಂಗಿ ಕೈದಿಗಳಿಗೆ ಸಂತಸದ ಸುದ್ದಿ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡುವ ಬಗ್ಗೆ ಕೇಂದ್ರ ಸರಕಾರ ಚಿಂತನೆ ನಡೆಸಿದೆ.
ಅವರ ವರ್ತನೆಯನ್ನು ಆಧರಿಸಿ ಮೂರು ಹಂತಗಳಲ್ಲಿ ಬಿಡುಗಡೆ ಮಾಡುವ ಬಗ್ಗೆ ಕೇಂದ್ರ ಗೃಹ ಸಚಿವಾಲಯವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ರವಾನಿಸಿದೆ.
ಈಗಾಗಲೇ ಜೈಲು ಶಿಕ್ಷೆಯ ಅವಧಿ ಪೂರ್ಣಗೊಂಡು ದಂಡದ ಮೊತ್ತ ಪಾವತಿಸಲು ವಿಫಲರಾದವರನ್ನೂ ಕೂಡ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಅವರ ದಂಡದ ಮೊತ್ತವನ್ನು ಮನ್ನಾ ಮಾಡಲು ಕ್ರಮ ಕೈಗೊಳ್ಳಲಾಗಿದೆ. 50 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಮತ್ತು ತೃತೀಯಲಿಂಗಿ ಕೈದಿಗಳನ್ನು ಬಿಡುಗಡೆ ಮಾಡುವ ಬಗ್ಗೆ ರಾಜ್ಯಗಳಿಗೆ ಕೇಂದ್ರ ಸರಕಾರದಿಂದ ಸೂಚನೆ ರವಾನೆಯಾಗಿದೆ.
8ರಿಂದ 21 ವರ್ಷ ವಯಸ್ಸಿನ ಕೈದಿಗಳನ್ನು ಬಿಡುಗಡೆ ಮಾಡಲು ಆದ್ಯತೆ ನೀಡಲು ಉದ್ದೇಶಿಸಲಾಗಿದೆ. ಕೈದಿಗಳ ಬಿಡುಗಡೆಗಾಗಿ ರಾಜ್ಯಗಳ ಮಟ್ಟದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಮಿತಿ ರಚಿಸಲು ಕೂಡ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರಕಾರಗಳಿಗೆ ಸೂಚನೆ ನೀಡಿದೆ.
ಯಾರಿಗೆ ಅನ್ವಯ ಇಲ್ಲ?
ಗಲ್ಲು ಶಿಕ್ಷೆಗೆ, ಜೀವಾವಧಿ ಶಿಕ್ಷೆಗೆ ಗುರಿಯಾದವರು, ಅತ್ಯಾಚಾರ ಮತ್ತು ಭಯೋತ್ಪಾದನೆ ಕೇಸುಗಳಲ್ಲಿ ಆರೋಪ ಸಾಬೀತಾಗಿ ಶಿಕ್ಷೆ ಅನುಭವಿಸುವವರಿಗೆ ಇದು ಅನ್ವಯವಾಗುವುದಿಲ್ಲ.