ಬೆಂಗಳೂರು: ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿನ ಶುಲ್ಕದ ವಿವರವನ್ನು ಪ್ರದರ್ಶಿಸದಿದ್ದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳ ಶುಲ್ಕವನ್ನು ನಿಗದಿ ಪಡಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿನ ಸೌಲಭ್ಯಗಳಿಗೆ ಅನುಗುಣವಾಗಿ ಶುಲ್ಕವನ್ನು ನಿಗದಿ ಮಾಡುತ್ತವೆ. ಆದರೆ ಆ ಶುಲ್ಕದ ವಿವರವನ್ನು ಪ್ರದರ್ಶನ ಮಾಡುವುದು ಕಡ್ಡಾಯ ಎಂದು ಸಚಿವರು ತಿಳಿಸಿದರು.
ಭ್ರೂಣ ಹತ್ಯೆಯ ಪ್ರಕರಣಗಳು ಕಂಡು ಬಂದರೆ ಅಂತಹ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳುವ ಅಧಿಕಾರ ಜಿಲ್ಲಾಧಿಕಾರಿಗಳಿಗಿದೆ. ಯಾವುದೇ ಆಸ್ಪತ್ರೆ ಭ್ರೂಣ ಹತ್ಯೆಯಂತಹ ಅಕ್ರಮ ಕೈಗೊಂಡರೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಕೋವಿಡ್ ಅವಧಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿರುವ ಆಯೋಗಕ್ಕೆ ನಮ್ಮ ಇಲಾಖೆಯ ವತಿಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆ. ಈಗಾಗಲೇ ಸಂಬಂಧಪಟ್ಟ ದಾಖಲೆಗಳನ್ನು ಹಸ್ತಾಂತರಿಸಿದ್ದೇವೆ ಎಂದು ಹೇಳಿದರು.