ಗಜೇಂದ್ರಗಡ (ಗದಗ): ಪೌರತ್ವ ಕಾಯ್ದೆ ತಿದ್ದುಪಡಿ ಮತ್ತು ರಾಷ್ಟ್ರೀಯ ಪೌರತ್ವ ದಾಖಲಾತಿ (ಎನ್ಆರ್ ಸಿ) ಯನ್ನು ವಿರೋಧಿಸಿ ಗಜೇಂದ್ರಗಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿರಿಯ ರಂಗಕರ್ಮಿ ಪ್ರಸನ್ನ ಸೇರದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.
ಸಿಪಿಐ (ಎಂ), ಕನ್ನಡ ಪರ, ದಲಿತ ಪರ ಸಂಘಟನೆಗಳ ಮುಖಂಡರು ಬಾಯಿಗೆ ಬಟ್ಟೆ ಕಟ್ಟಿಕೊಂಡು ಗಜೇಂದ್ರಗಡದಲ್ಲಿ ಪ್ರತಿಭಟನೆಗೆ ಮುಂದಾಗಿದ್ದರು.
ಆದರೆ ರಾಜ್ಯಾದ್ಯಾಂತ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಸಿಪಿಐ ಸುನೀಲ ಸವದಿ ಪ್ರತಿಭಟನಾಕಾರರನ್ನು ಮನವೊಲಿಸಲು ಮುಂದಾದರು.
ಇದಕ್ಕೊಪ್ಪದ ಪ್ರತಿಭಟನಾಕಾರರು ಸಿಪಿಐ (ಎಂ) ಕಚೇರಿಯಿಂದ ಶ್ರೀ ಕಾಲಕಾಲೇಶ್ವರ ವೃತ್ತಕ್ಕೆ ತೆರಳುವ ಸಂದರ್ಭದಲ್ಲಿ ಹಿರಿಯ ರಂಗಕರ್ಮಿ ಪ್ರಸನ್ನ ಸೇರಿದಂತೆ 15ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.