ಬೆಂಗಳೂರು: ಬಂಜಾರ (ಲಂಬಾಣಿ) ಸಮುದಾಯವನ್ನು ಪರಿಶಿಷ್ಠ ಜಾತಿಯಿಂದ ಹಿಂದುಳಿದ ವರ್ಗಗಳಿಗೆ ಸೇರಿಸಲು ಕೇಂದ್ರ ಸರ್ಕಾರ ನಡೆಸಿರುವ ಪ್ರಯತ್ನವನ್ನು ಕೈ ಬಿಡಬೇಕೆಂದು ಬಂಜಾರ ಸಮಾಜದ ಮುಖಂಡರ ದುಂಡು ಮೇಜಿನ ಸಭೆಯಲ್ಲಿ ನಿರ್ಣಯಿಸಲಾಗಿದೆ.
ಭಾನುವಾರ ಬೆಂಗಳೂರಿನ ಶಾಸಕರ ಭವನದಲ್ಲಿ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಭೀಮಾ ನಾಯ್ಕ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕೇಂದ್ರ ಸರ್ಕಾರ ಬಂಜಾರ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸಲು ಕ್ರಮ ಕೈಗೊಂಡಿರುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದಿರುವುದರಿಂದ ಈ ಬಗ್ಗೆ ಸೋಮವಾರ ಸಿಎಂ ಕುಮಾರಸ್ವಾಮಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ಭೇಟಿ ಮಾಡಿ, ಬಂಜಾರ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸದಂತೆ ಕೇಂದ್ರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಲು ಬಂಜಾರ ಮಹಾಸಭಾ ತೀರ್ಮಾನಿಸಿದೆ.
ಸಭೆಯಲ್ಲಿ ಮಾತನಾಡಿದ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಭೀಮಾ ನಾಯ್ಕ, ಸಮಾಜದ ಪರವಾದ ಈ ಹೋರಾಟದಲ್ಲಿ ಎಲ್ಲರೂ ಪಕ್ಷ ಭೇದ ಮರೆತು ಹೋರಾಟ ನಡೆಸಬೇಕು. ಯಾವುದೇ ಪಕ್ಷದ ನಾಯಕರ ವಿರುದ್ಧ ಅನಗತ್ಯ ಹೇಳಿಕೆಗಳನ್ನು ನೀಡಿ, ಹೋರಾಟ ದಾರಿ ತಪ್ಪಿಸುವ ಕೆಲಸ ಮಾಡಬಾರದೆಂದು ಮನವಿ ಮಾಡಿದ್ದಾರೆ.
ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯ್ಕ ಮಾತನಾಡಿ, ರಾಜ್ಯದಲ್ಲಿ ಬಂಜಾರ ಸಮುದಾಯ ಈಗಲೂ ಸಾಕಷ್ಟು ಹಿಂದುಳಿದಿದೆ. ಶೈಕ್ಷಣಿಕ, ಆರ್ಥಿಕ, ರಾಜಕೀಯ ಹಾಗೂ ಸಾಮಾಜಿಕವಾಗಿಯೂ ಹಿಂದುಳಿದಿದೆ, ಕೇಂದ್ರ ಸರ್ಕಾರ ಏಕಾಏಕಿ ನಿರ್ಧಾರ ಕೈಗೊಳ್ಳಬಾರದು. ಒಂದು ವೇಳೆ ರಾಜ್ಯ ಸರ್ಕಾರ ಶಿಫಾರಸು ಮಾಡಿದ್ದರೆ, ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮನವಿ ಮಾಡಬೇಕೆಂದು ಸಲಹೆ ನೀಡಿದರು.
ಸಭೆಯಲ್ಲಿ ಶಾಸಕರಾದ ಅಶೋಕ್ ನಾಯ್ಕ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಕೆ.ಶಿವಮೂರ್ತಿ ನಾಯ್ಕ, ವಕೀಲರಾದ ಅನಂತ ನಾಯ್ಕ, ಜಯದೇವ ನಾಯ್ಕ, ಎಲ್.ಆರ್.ನಾಯ್ಕ, ಹೀರಾ ನಾಯ್ಕ ಸೇರಿ ಬಂಜಾರ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.