Advertisement

ನಾಡಪ್ರಭು ಕೆಂಪೇಗೌಡರ ವಿಚಾರಧಾರೆಗಳ ಹಾದಿಯಲ್ಲಿ ನಡೆಯುವ ಸಂಕಲ್ಪ: ಮುಖ್ಯಮಂತ್ರಿ ಬೊಮ್ಮಾಯಿ

03:03 PM Nov 11, 2022 | Team Udayavani |

ಬೆಂಗಳೂರು: ಕೆಂಪೇಗೌಡರ ಚಿಂತನೆ ಹಾಗೂ ವಿಚಾರಧಾರೆಗಳ ಹಾದಿಯಲ್ಲಿ ನಡೆದು ಕರ್ನಾಟಕವನ್ನು ಅಭಿವೃದ್ಧಿಗೊಳಿಸುವ ಸಂಕಲ್ಪವನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಅವರು ಇಂದು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರಗತಿ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಭಾಗವಹಿಸಿ ಮಾತನಾಡಿದರು.

ಪ್ರಧಾನಮಂತ್ರಿಗಳು ರಾಜ್ಯಕ್ಕೆ ಎರಡು ಕೊಡುಗೆಗಳನ್ನು ಕೊಟ್ಟಿದ್ದಾರೆ. ವಂದೇ ಭಾರತ ರೈಲು ಮತ್ತು ವಿಮಾಣ ನಿಲ್ದಾಣದ 2ನೇ ಟರ್ಮಿನಲ್, ಸಬ್ ಅರ್ಬನ್ ರೈಲು. ಕರಾವಳಿಯಲ್ಲಿ ಬಂದರು ನಿರ್ಮಾಣ ಸೇರಿದಂತೆ ಕರ್ನಾಟಕದ ಅಭಿವೃದ್ಧಿಗೆ ದೊಡ್ಡ ಕೊಡುಗೆಯನ್ನು ನೀಡುತ್ತಿರುವ ಪ್ರಧಾನಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕೆಂಪೇಗೌಡರ ವಿಚಾರಧಾರೆಯ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಲಾಗಿದೆ ಎಂದರು.

ಕರ್ನಾಟಕದ ಅಭಿವೃದ್ಧಿ ಪಥದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿರುವ ದಿನ:

ಇಂದು ಕರ್ನಾಟಕದ ಅಭಿವೃದ್ಧಿ ಪಥದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿರುವ ದಿನವಾಗಿದೆ.  ನಾಡಿಗೆ ಶ್ರೇಷ್ಟ ಸಂತರಾದ ಕನಕದಾಸರ ಜಯಂತಿ, ಮಹರ್ಷಿ ವಾಲ್ಮೀಕಿಯವರಿಗೆ ಹಾಗೂ ನಾಡಿನ ಸಂರಕ್ಷಣೆಗೆ ಜೀವತೆತ್ತ ವೀರ ವನಿತೆ ಒನಕೆ ಓಬವ್ವ ಪುಷ್ಪಾರ್ಚನೆ ಮಾಡುವ ಮೂಲಕ ನಾಡಿನ ಜನರ ಭಾವನೆಗಳಿಗೆ ಗೌರವ ಸಲ್ಲಿಸಿದ್ದಾರೆ. ಬೆಂಗಳೂರು, ಮೈಸೂರು ಚೆನ್ನೈಯನ್ನು ಸಂಪರ್ಕಿಸುವ ವಂದೇ ಭಾರತ ರೈಲಿಗೆ ಹಸಿರು ನಿಶಾನೆ ತೋರಿಸಲಾಗಿದೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾಣ ನಿಲ್ದಾಣದ ಟರ್ಮಿನಲ್ 2 ಕ್ಕೆ ಚಾಲನೆ ನೀಡಲಾಗಿದ್ದು, ಇದು ದೇಶದ ಎರಡನೇ ಅತಿ ದೊಡ್ಡ ವಿಮಾನ ನಿಲ್ದಾಣವಾಗಿದೆ. ಇದಕ್ಕಾಗಿ ಸಮಸ್ತ ಕನ್ನಡ ನಾಡಿನ ಜನತೆಯ ಪರವಾಗಿ ಪ್ರಧಾನಿ ಮೋದಿಯವರಿಗೆ ವಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

Advertisement

ಬೆಂಗಳೂರು ಇಂದು ಅಂತರರಾಷ್ಟ್ರೀಯ ನಗರವಾಗಿ ಬೆಳೆದಿದೆ :

ನಾಡಪ್ರಭು ಕೆಂಪೇಗೌಡರು, ವಿಜಯನಗರ ಸಾಮ್ರಾಜ್ಯದ ಸುವರ್ಣ ಯುಗದ ದರ್ಶನವನ್ನು ಬೆಂಗಳೂರಿನ ಸುತ್ತಮುತ್ತಲಿನ ಗ್ರಾಮಗಳಿಗೆ ಮಾಡಿಸಿದ್ದಾರೆ. ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ಇಂದು ಅಂತರರಾಷ್ಟ್ರೀಯ ನಗರವಾಗಿ ಬೆಳೆದಿದೆ. ಯೋಜನಾ ಬದ್ಧ ನಗರ ನಿರ್ಮಿಸಿ, ಹಲವು ಕೆರೆಕಟ್ಟೆಗಳು, ಪೇಟೆಗಳನ್ನು ನಿರ್ಮಿಸುವ ಮೂಲಕ ಜನ ನೆಮ್ಮದಿಯ ಜೀವನ ಬದುಕುವಂತೆ ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರಿಗೆ ಗೌರವ ಸಲ್ಲಿಸುವ ಮುಖಾಂತರ ನಾಡಿನ ಸಂಸ್ಕೃತಿ, ಇತಿಹಾಸ ಪರಂಪರೆ, ಪ್ರಗತಿಪರ ಚಿಂತನೆಗೆ ಗೌರವ ಸಲ್ಲಿಸಿದಂತಾಗಿದೆ. ಗುಜರಾತಿನಲ್ಲಿ ಏಕತೆಯ ಪ್ರತಿಮೆಯಿದ್ದರೆ, ರಾಜ್ಯದ ಸರದಾರ ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಉದ್ಘಾಟಿಸಲಾಗಿದೆ ಎಂದರು.

ಪ್ರಧಾನಿ ಮೋದಿ ಆಧುನಿಕ ಭಾರತದ ವಿಕಾಸ ಪುರುಷ :

ಪ್ರಧಾನಿ ನರೇಂದ್ರ ಮೋದಿಯವರು ಆಧುನಿಕ ಭಾರತದ ವಿಕಾಸ ಪುರುಷರು. ದೇಶದ ಹತ್ತು ಹಲವಾರು ಸವಾಲುಗಳನ್ನು ಬಗೆಹರಿಸಿ ಬಲಿಷ್ಟ ಭಾರತವನ್ನು ಕಟ್ಟಿ, ಆತ್ಮನಿರ್ಭರ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ಅಭಿವೃದ್ಧಿಯಲ್ಲಿ ಎಲ್ಲರಿಗೂ ಅವಕಾಶ ಕೊಟ್ಟು, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಬಹಳ ಎತ್ತರಕ್ಕೆ ಕೊಂಡೊಯ್ದಿದ್ದದಾರೆ.  ಇಡೀ ವಿಶ್ವದಲ್ಲಿ ಆರ್ಥಿಕ ಹಿಂಜರಿತವಿದ್ದ ಸಂದರ್ಭದಲ್ಲಿ ಭಾರತ ಆರ್ಥಿಕವಾಗಿ ಬಲಿಷ್ಟಗೊಳ್ಳುತ್ತಿದ್ದರೆ ಅದಕ್ಕೆ ಪ್ರಧಾನಿ ಮೋದಿಯವರ ಯೋಜನೆಗಳೇ ಕಾರಣ. ಒಬ್ಬ ವಿಕಾಸ ಪುರುಷ ದಾರಿಯಲ್ಲಿ ನವಭಾರತ ನಿರ್ಮಾಣ ಮಾಡುತ್ತಿರುವವರ ಕೈಯಿಂದ ಕೇಂಪೇಗೌಡರ ಮೂರ್ತಿ ಅನಾವರಣ ಮಾಡಿರುವುದು ದೈವೇಚ್ಛೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ, ಸಚಿವರಾದ ಆರ್. ಅಶೋಕ, ಡಾ.ಸಿ ಎನ್. ಅಶ್ವತ್ಥ ನಾರಾಯಣ, ಡಾ.ಕೆ. ಸುಧಾಕರ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next