ದೇವದುರ್ಗ: ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಹಶೀಲ್ದಾರ್ ಮಧುರಾಜ ಯಾಳಗಿ ಅಧ್ಯಕ್ಷತೆಯಲ್ಲಿ ಎಸ್‌ಎಸ್ ಎಲ್‌ಸಿ ಪರೀಕ್ಷೆ ಪೂರ್ವ ಸಿದ್ದತೆ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಯಾಳಗಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಬ್ಯಾರಿಕೇಡ್ ಹಾಕಬೇಕು. ಪರೀಕ್ಷಾ ಕೇಂದ್ರಕ್ಕೆ ನಿಯೋಜನೆಯಾದ ಅಧಿಕಾರಿಗಳು ಮತ್ತು ಸಿಬ್ಬಂದಿ ಬಿಟ್ಟರೇ ಬೇರೆಯವರಿಗೆ ಅವಕಾಶ ನೀಡಬಾರದು. ಪರೀಕ್ಷಾ ನಡೆಯುವ ಕೇಂದ್ರ ಸುತ್ತಲೂ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ. ಕೇಂದ್ರದ ಒಳಗಡೆ ಮೊಬೈಲ್ ಫೋನ್ ನಿಷೇಧಿಸಲಾಗಿದೆ. ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯವಾಗಿ ಬಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕೇಂದ್ರಕ್ಕೆ ನಿಯೋಜನೆಯಾದ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಗ್ಗೆ 7:00ಕ್ಕೆ ಕಡ್ಡಾಯವಾಗಿ ಕೇಂದ್ರದಲ್ಲಿ ಹಾಜರಾಗಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬರಲು ಶಾಲೆ ಮುಖ್ಯಶಿಕ್ಷಕರು ಮತ್ತು ಮಾರ್ಗಧಿಕಾರಿಗಳನ್ನು ನೇಮಿಸಬೇಕು ಎಂದು ಸೂಚಿಸಿದರು. ಈಗಾಗಲೇ ಪಿಯು ಇಂಗ್ಲಿಷ್ ವಿಷಯ ಪರೀಕ್ಷೆ ಯಾವುದೇ ತೊಂದರೆ ಇಲ್ಲದಂತೆ ಮುಕ್ತಾಯವಾಗಿದೆ. ಅದರಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯೂ ನಡೆಯಬೇಕು. ಈ ಬಗ್ಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೆಚ್ಚಿನ ನಿಗಾವಹಿಸಬೇಕು ಎಂದು ಹೇಳಿದರು.
ಸರಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ತಾಲೂಕು ಮಟ್ಟದ ಅಧಿಕಾರಿಗಳು ಯಾವುದೇ ತಪ್ಪು ನಡೆಯದಂತೆ ಎಚ್ಚರದಿಂದ ಹೆಜ್ಜೆ ಇಡಬೇಕು. ತಾಲೂಕಿನಲ್ಲಿ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾದ್ದರಿಂದ ವಿದ್ಯಾರ್ಥಿಗಳು ಮತ್ತು ಪಾಲಕರಲ್ಲಿ ವಿದ್ಯಾರ್ಥಿಗಳಲ್ಲಿ ಆತಂಕ ಇರುತ್ತದೆ. ಶಿಕ್ಷಣ ಇಲಾಖೆ ಸೂಚನೆಯಂತೆ ಸುರಕ್ಷಿತವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.
ಪರೀಕ್ಷಾ ಕೇಂದ್ರಗಳ ಸುತ್ತಲೂ ಒಬ್ಬರೂ ಬಾರದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಬೇಕು ಎಂದು ಸಿಪಿಐ ಆರ್.ಎಂ. ನದಾಫ್ ಅವರಿಗೆ ಸೂಚನೆ ನೀಡಿದರು. ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದಲ್ಲಿ ಪ್ರತ್ಯೇಕ ಕೋಣೆಯಲ್ಲಿ ಪರೀಕ್ಷೆ ಬರಿಸಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಬನದೇಶ್ವರ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಇಂದಿರಾ, ಸಮನ್ವಯ ಅಧಿಕಾರಿ ಶಿವರಾಜ ಬಿರಾದಾರ, ಸಾರಿಗೆ ಘಟಕ ವ್ಯವಸ್ಥಾಪಕ ಹಸನ್ ಅಲಿ, ಶಿಕ್ಷಣ ಸಂಯೋಜಕ ಸುರೇಶ ಪಾಟೀಲ ಇದ್ದರು