ಮೈಸೂರು: ಚಾಮುಂಡಿ ಬೆಟ್ಟದ ಪಾವಿತ್ರ್ಯತೆಗೆ ಧಕ್ಕೆ ಬಾರದ ರೀತಿಯಲ್ಲಿ ಆಕರ್ಷಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ್ ಸೋಮವಾರ ಹೇಳಿಕೆ ನೀಡಿದ್ದಾರೆ.
ಮೈಸೂರು ಅರಮನೆ ಆಡಳಿತ ಮಂಡಳಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚಾಮುಂಡಿ ಬೆಟ್ಟವನ್ನು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುವುದು.ಪ್ರವಾಸಿಗರಿಗೆ ಆಕರ್ಷಣೀಯವಾಗುವಂತೆ, ಭಕ್ತರಿಗೆ ನೆಮ್ಮದಿ ಸಿಗುವವಂತೆ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಮಾಡಲಾಗುವುದು.ಈ ಸಂಬಂಧ ತಜ್ಣರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ. ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣಕ್ಕೆ ಅನುವು ಮಾಡಿಕೊಟ್ಟ ಬಳಿಕ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಾಗದಂತೆ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಚಾಮುಂಡಿ ಬೆಟ್ಟದ ಪ್ರಾಧಿಕಾರ ರಚನೆ ಘೋಷಣೆ ಮಾಡಿದ್ದಾರೆ. ಹೀಗಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಎಕರೆ ವಿಸ್ತೀರ್ಣ ಹೊಂದಿರುವ ಮೈಸೂರು ವಸ್ತು ಪ್ರದರ್ಶನ ಆವರಣವನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ.ಈ ಸಂಬಂಧ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೂವರು ಅಧಿಕಾರಿಗಳನ್ನೊಳಗೊಂಡ ತಂಡ ರಚನೆ ಮಾಡಲಾಗಿದೆ. ಈ ತಂಡ ಅಧ್ಯಯನ ಮಾಡಿ ಮುಂದಿನ ಹದಿನೈದು ದಿನಗಳಲ್ಲಿ ವರದಿ ನೀಡಲಿದೆ.ವರದಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳನ್ನು ರಕ್ಷಣೆ ಮಾಡಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಸರ್ಕಾರ ಹೆಚ್ಚಿನ ಒತ್ತು ನೀಡಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಮೈಸೂರಿಗೆ ಬರುವ ಪ್ರವಾಸಿಗರಿಗೆ ಕ್ಯು ಆರ್ ಕಾರ್ಡ್ ವಿತರಣೆಗೆ ಚಿಂತಿಸಲಾಗಿದೆ. ಆ ಮೂಲಕ ಪ್ರವಾಸಿಗರು ಒಂದು ಕಡೆ ಟಿಕೆಟ್ ಖರೀದಿಸಿ ಇಡೀ ಮೈಸೂರಿನ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಅನುಕೂಲವಾಗಲಿದೆ ಎಂದರು.
ನಯಾ ಪೈಸೆ ಬಿಡುಗಡೆ ಮಾಡಿಲ್ಲ
ಮೈಸೂರು ವಸ್ತು ಪ್ರದರ್ಶನದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಸ್ವದೇಶಿ ದರ್ಶನ್ ಯೀಜನೆಯಡಿ 80 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿ, ”ಈ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ.ಈ ಸಂಬಂಧ ಪ್ರತಾಪ್ ಸಿಂಹ ಸಭೆ ನಡೆಸಿರುವ ವಿಚಾರವು ನನ್ನ ಗಮನಕ್ಕೆ ಬಂದಿಲ್ಲ.ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನಯಾ ಪೈಸೆ ಬಿಡುಗಡೆ ಮಾಡಿಲ್ಲ.ಕಳೆದ ಐದು ವರ್ಷ ಕಾಲದಿಂದ ಕೇಂದ್ರ ಸರ್ಕಾರ ರಾಜ್ಯಕ್ಕೆ ನಯಾ ಪೈಸೆ ಬಿಡುಗಡೆ ಮಾಡಿಲ್ಲ” ಎಂದರು.