Advertisement

ಧಾರವಾಡ: ಹಡಪದ ಅಪ್ಪಣ್ಣ ಸಮಾಜದ ಏಳ್ಗೆಗೆ ಶ್ರಮಿಸಿದ ಮಹಾಶರಣ

03:55 PM Jul 04, 2023 | Team Udayavani |

ಧಾರವಾಡ: ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿ ಮಹಾನ್‌ ಶರಣರಾಗಿದ್ದಾರೆ ಎಂದು ಮಾಜಿ ಮೇಯರ್‌ ಈರೇಶ ಅಂಚಟಗೇರಿ ಹೇಳಿದರು.

Advertisement

ಚನ್ನಬಸವೇಶ್ವರ ನಗರದ ಲಿಂಗಾಯತ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಮಟ್ಟದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಡಪದ ಅಪ್ಪಣ್ಣ ಅವರ ವಚನಗಳು ಬಸವಣ್ಣನವರ ಮೇಲಿನ ಗೌರವ ಭಕ್ತಿಯನ್ನು ವ್ಯಕ್ತಪಡಿಸುತ್ತವೆ. ತನು-ಮನ-ಧನ ಎಲ್ಲವನ್ನು ಸಮಾಜಕ್ಕಾಗಿ ಅರ್ಪಣೆ ಮಾಡಿ ಸಾಮಾಜಿಕ ಅಸಮಾನತೆ, ಅಸ್ಪಶ್ಯತೆ, ಜಾತಿ ವ್ಯವಸ್ಥೆ, ಕಂದಾಚಾರ, ಮೂಢನಂಬಿಕೆ ವಿರುದ್ಧ ಹೋರಾಡಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ತಮ್ಮ ವಚನಗಳ ಮೂಲಕ ಶ್ರಮಿಸಿದ್ದಾರೆ ಎಂದರು.

ಜನಪದ ತಜ್ಞ ಡಾ| ಸಿ.ಕೆ. ನಾವಲಗಿ ಮಾತನಾಡಿ, ಹಡಪದ ಅಪ್ಪಣ್ಣನವರು ಸಮಾಜದ ಏಳ್ಗೆಗಾಗಿ ಶ್ರಮಿಸಿದ ಮಹಾನ್‌ ಶರಣ. ಅನುಭವ ಮಂಟಪದ ಪ್ರಮುಖ ರೂವಾರಿಯಾಗಿದ್ದ ಅಪ್ಪಣ್ಣನವರು ಬಸವಣ್ಣನವರ ಕಾರ್ಯಗಳಿಗೆ ಬೆನ್ನೆಲುಬಾಗಿ ನಿಂತಿದ್ದರು. ಅನುಭವ ಮಂಟಪವನ್ನು ಅತ್ಯುತ್ತಮ ರೀತಿಯಲ್ಲಿ ನಿರ್ವಹಿಸುವ ಮೂಲಕ ಮಾದರಿಯಾಗಿದ್ದಾರೆ. ವೃತ್ತಿ ಕಾಯಕದೊಂದಿಗೆ ವಚನ ರಚನೆ ಹಾಗೂ ಸಮಾಜ ಸೇವೆಯ ಪ್ರವೃತ್ತಿಯನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ ಎಂದು ಹೇಳಿದರು.

ಮೂಢನಂಬಿಕೆ ಮತ್ತು ಕಂದಾಚಾರಗಳ ವಿರುದ್ಧ ಹೋರಾಡಿದ ಹಡಪದ ಅಪ್ಪಣ್ಣನವರ ಧರ್ಮಪತ್ನಿ ಲಿಂಗಮ್ಮನವರೂ ವಚನಗಾರ್ತಿಯಾಗಿದ್ದರು. ಅವರು ವಚನಗಳನ್ನು ಅಪ್ಪಣ್ಣ ಪ್ರಿಯ ಚನ್ನಬಸವಣ್ಣ ಎಂಬ ಅಂಕಿತನಾಮದಿಂದ ರಚಿಸಿದ್ದಾರೆ.

Advertisement

ಬಸವಣ್ಣನವರಿಗೆ ಅಪ್ಪಣ್ಣನವರು ಪ್ರಾಣವೇ ಆಗಿದ್ದರೆಂಬುದಕ್ಕೆ ಕಲ್ಯಾಣ ಕ್ರಾಂತಿಯ ಕೊನೆಯ ದಿನಗಳನ್ನು ತಿಳಿದುಕೊಂಡರೆ ಗೊತ್ತಾಗುತ್ತದೆ ಎಂದರು. 2022-23ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಹಡಪದ ಸಮುದಾಯದ ವಿದ್ಯಾರ್ಥಿಗಳಿಗೆ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಡಪದ ಸಮುದಾಯದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮನಗುಂಡಿಯ ಗುರು ಬಸವ ಮಹಾಮನೆಯ ಶ್ರೀ ಬಸವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಈರಣ್ಣ ಚಿಕ್ಕಬೆಳ್ಳಿಕಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಸಮಾಜದ ಪ್ರಮುಖರಾದ ನಿಂಗರಾಜ ಹಡಪದ, ಫಕ್ಕಿರೇಶ ಹಡಪದ ಇನ್ನಿತರರು ಪಾಲ್ಗೊಂಡಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಜಯಲಕ್ಷ್ಮೀ ಎಂ. ನಿರೂಪಿಸಿ, ವಂದಿಸಿದರು.

ಇದಕ್ಕೂ ಮುನ್ನ ಶಿವಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರದ ಭವ್ಯ ಮೆರವಣಿಗೆಯು ಬೆಳಗ್ಗೆ ಕಲಾಭವನದಿಂದ ಪ್ರಾರಂಭಗೊಂಡು ಕೆಸಿಡಿ ವೃತ್ತ, ಸಪ್ತಾಪುರಬಾವಿ, ಜಯನಗರ ಮೂಲಕ ಲಿಂಗಾಯತ ಭವನಕ್ಕೆ ಬಂದು ತಲುಪಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next