ವಿಧಾನಸಭೆ: ಖಾಸಗಿ ಹಾಗು ಸಾರ್ವಜನಿಕ ಸಹಭಾಗಿತ್ವದೊಂದಿಗೆ ರಾಜ್ಯದ ಎಲ್ಲಾ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಘಟಕ ಸ್ಥಾಪನೆ ಮಾಡಲಾಗುತ್ತಿದೆ ಎಂದು ಆರೋಗ್ಯ ಮತ್ತ ಕುಟುಂಬ ಕಲ್ಯಾಣ ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ.
ಜೆಡಿಎಸ್ ಶಾಸಕ ಎನ್.ಎಚ್. ಕೋನರೆಡ್ಡಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು, 20 ಜಿಲ್ಲಾ ಆಸ್ಪತ್ರೆ ಹಾಗೂ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಯುನಿಟ್ ಸ್ಥಾಪನೆ ಮಾಡಲು ಈಗಾಗಲೇ ಟೆಂಡರ್ ಕರೆದು ಸ್ಥಾಪನೆ ಪ್ರಕ್ರಿಯೆ ಆರಂಭವಾಗಿದೆ. ಪ್ರತಿ ಆಸ್ಪತ್ರೆಯಲ್ಲಿ ಎರಡು ಘಟಕಗಳನ್ನು ತೆರೆಯಲು ತೀರ್ಮಾನಿಸಲಾಗಿದೆ. ಸರ್ಕಾರದಿಂದಲೇ ಡಯಾಲಿಸಿಸ್ ಕೇಂದ್ರ ನಿರ್ವಹಣೆ ಕಷ್ಟವಾಗುವುದರಿಂದ ಖಾಸಗಿ ಸಹಭಾಗಿತ್ವ ಪಡೆಯಲಾಗುತ್ತಿದೆ. ಸರ್ಕಾರ ಕಂಪನಿಗೆ ಎಲ್ಲ ಹಣವನ್ನು ಭರಿಸಲಿದ್ದು, ಸಾರ್ವಜನಿಕರಿಗೆ ಉಚಿತ ಸೇವೆ ನೀಡಲಾಗುವುದು ಎಂದು ಅವರು ಹೇಳಿದರು.
ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ದಢಾರ ಮತ್ತು ರುಬೆಲ್ಲಾ ಲಸಿಕೆ ಹಾಕುವ ಸರಕಾರದ ಕಾರ್ಯಕ್ರಮಕ್ಕೆ ಸಹಕಾರ ನೀಡದೇ ಇರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ. ಬಿಜೆಪಿಯ ಸುನಿಲ್‌ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ಯೋಜನೆಗಳನ್ನು ಜಾರಿಗೊಳಿಸಲು ಹಿಂದೇಟು ಹಾಕುವವರು ಯಾರೇ ಇದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಲಸಿಕೆ ವಿರುದ್ಧ ಸಾಮಾಜಿಕ ಜಾಲ ತಾಣಗಳಲ್ಲಿ ತಪ್ಪು ಸಂದೇಶ ರವಾನೆ ಮಾಡಿರುವವರ ವಿರುದ್ಧ ಸಹ ಸೈಬರ್ ಕ್ರೈಮ್ ವಿಭಾಗದಲ್ಲಿ ದೂರು ದಾಖಲಿಸಲಾಗಿದೆ ಎಂದು ಹೇಳಿದರು.
ವೆನ್‌ಲಾಕ್ ಆಸ್ಪತ್ರೆ ಮೇಲ್ದರ್ಜೆಗೆ: ಮಂಗಳೂರಿನ ವೆನ್‌ಲಾಕ್ ಜಿಲ್ಲಾಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇ ರಿಸಲಾಗುವುದು ಎಂದು ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಸದಸ್ಯ ಜೆ. ಆರ್. ಲೋಬೋ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು, ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಬ್ಲಾಕ್ ನಿರ್ಮಿಸಲು 15.16 ಕೋಟಿ ವೆಚ್ಚದಲ್ಲಿ ಕಟ್ಟದ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಈಗಾಗಲೇ ಆರೋಗ್ಯ ಸುರಕ್ಷಾ ಸಮಿತಿಯಿಂದ 5.10 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ವೆನ್‌ಲಾಕ್ ಆಸ್ಪತ್ರೆಗೆ ಮಂಗಳೂರು,ಉಡುಪಿ ಜಿಲ್ಲೆಗಳಿಂದ ಅಷ್ಟೇ ಅಲ್ಲದೇ ಸುಮಾರು ಏಳೆಂಟು ಜಿಲ್ಲೆಗಳ ರೋಗಿಗಳು ಬರುತ್ತಾರೆ ಅಲ್ಲದೇ ಕೇರಳದಿಂದಲೂ ರೋಗಿಗಳು ಬರುವುದರಿಂದ ಈ ಆಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಅವರು ಹೇಳಿದರು.