ಬೆಂಗಳೂರು: ಮತದಾರರ ಪಟ್ಟಿ ವಿವಾದಕ್ಕೆ ಸಂಬಂಧಪಟ್ಟ ಟ್ವೀಟ್ ನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂತಾರ ಚಿತ್ರದ ಗುಳಿಗ – ಪಂಜುರ್ಲಿಯನ್ನು ಎಳೆದು ತಂದಿರುವುದು ಹೊಸ ವಿವಾದ ಹುಟ್ಟು ಹಾಕುವ ಸಾಧ್ಯತೆಯಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ” ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು.” ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರನ್ನು ಉದ್ದೇಶಿಸಿ ಕುಹಕವಾಡಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿದ್ದೀರಿ ಸರಿ, ಆದರೆ ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು? ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ? ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ? ಎಂದು ಪ್ರಶ್ನಿಸಿದ್ದಾರೆ.
ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅದರ ಮಾಲೀಕರು ಯಾರು? ಹಣಕಾಸು ಸಾಮರ್ಥ್ಯ ಏನು? ಉದ್ಯೋಗಿಗಳ ಸಂಖ್ಯೆ ಎಷ್ಟು? ಅದರ ಹಣಕಾಸಿನ ಮೂಲ ಯಾವುದು? ಈ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.
ಆದರೆ ಟೀಕೆಯ ಬರದಲ್ಲಿ ತುಳುನಾಡಿನ ಗುಳಿಗ- ಪಂಜುರ್ಲಿ ದೈವಗಳನ್ನು ವಿನಾ ಕಾರಣ ಎಳೆದು ತಂದಿದ್ದಾರೆ ಎಂಬ ಮಾತು ಕೇಳಿ ಬಂದಿದೆ.