Advertisement

ಪಟ್ಟು ಬಿಡದ ರೈತರು-ಗಡಿಯಲ್ಲಿ ಮುಂದುವರಿದ ಹೋರಾಟ: ಅಮಿತ್ ಶಾ, ಟೋಮರ್ ಮಾತುಕತೆ ಅಂತ್ಯ

02:47 PM Nov 30, 2020 | Nagendra Trasi |

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿದ ಕೃಷಿ ಸಂಬಂಧಿ ಕಾನೂನನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ದೆಹಲಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿರುವುದಾಗಿ ವರದಿ ತಿಳಿಸಿದೆ.

Advertisement

ಷರತ್ತುಬದ್ಧ ಮಾತುಕತೆಯನ್ನು ರೈತರು ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿರುವುದಾಗಿ ವರದಿ ವಿವರಿಸಿದೆ. ರಾಜಧಾನಿ ಗಡಿಪ್ರದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿರುವ ರೈತರು ದೆಹಲಿಯ ಬುರಾರಿ ಮೈದಾನಕ್ಕೆ ತೆರಳಲು ನಿರಾಕರಿಸಿದ್ದರು.

ದೆಹಲಿಯ ಹೃದಯಭಾಗವಾಗಿರುವ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡುವವರೆಗೂ ಗಡಿಪ್ರದೇಶ ಬಿಟ್ಟು ಕದಲುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ರೈತರಿಂದ ನಾವು ಈವರೆಗೂ ಯಾವುದೇ ಸಂದೇಶವನ್ನು ಸ್ವೀಕರಿಸಿಲ್ಲ. ಆದರೆ ನಾವು ಮುಂಜಾಗ್ರತಾ ಕ್ರಮವಾಗಿ ಸಿಂಘು ಮತ್ತು ಟಿಖ್ರಿ ಗಡಿಪ್ರದೇಶದಲ್ಲಿ ಮುಂಜಾಗ್ರತಾ ಕ್ರಮದ ಸಿದ್ಧತೆ ಮಾಡಿಕೊಳ್ಳುತ್ತಿರುವುದಾಗಿ ಡಿಸಿಪಿ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ:ದೆಹಲಿ ನಾಯಕರ ಮುಂದೆ ರಾಜ್ಯದ ನಾಯಕತ್ವ ಬದಲಾವಣೆ ವಿಚಾರವೇ ಇಲ್ಲ: ಅಶೋಕ್

ಕಳೆದ ಮೂರು ದಿನಗಳಿಂದ ಗಡಿಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್, ಹರ್ಯಾಣ ರೈತರಿಗೆ ಷರತ್ತಿನ ಮಾತುಕತೆಗೆ ಗೃಹ ಸಚಿವ ಅಮಿತ್ ಶಾ ಅವರು ನೀಡಿದ್ದ ಆಹ್ವಾನವನ್ನು ತಿರಸ್ಕರಿಸಿದ್ದರಿಂದ ಕೇಂದ್ರ ಹಾಗೂ ರೈತರ ನಡುವಿನ ಬಿಕ್ಕಟ್ಟು ಮುಂದುವರಿದಂತಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next