ಬೆಂಗಳೂರು: ಪಕ್ಷದ ಶಾಸಕರು ರಾಜೀನಾಮೆ ನೀಡುತ್ತಿರುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿದೇಶ ಪ್ರವಾಸಕ್ಕೆ ತೆರಳಿರುವುದು ಕಾಂಗ್ರೆಸ್‌ನಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ಮೈತ್ರಿ ಸರ್ಕಾರದ ಬಗ್ಗೆ ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡು ರಾಜೀನಾಮೆ ನೀಡುತ್ತಿದ್ದು, ಪಕ್ಷದ ರಾಜ್ಯಾಧ್ಯಕ್ಷರಾಗಿ ಅವರೊಂದಿಗೆ ಮಾತುಕತೆ ನಡೆಸಿ ಸಮಾಧಾನ ಪಡಿಸುವ ಬದಲು ವಿದೇಶ ಪ್ರವಾಸ ಕೈಗೊಂಡಿರುವುದು ಎಷ್ಟು ಸರಿ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ.
ಕೆಲವು ಹಿರಿಯ ಶಾಸಕರೂ ದಿನೇಶ್ ಅವರ ಈ ನಡೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಯಾರೇ ಶಾಸಕರು ಈ ಸಂದರ್ಭದಲ್ಲಿ ಅಸಮಾಧಾನ ಹೊರ ಹಾಕಿದರೆ, ಪಕ್ಷದ ಜವಾಬ್ದಾರಿ ಸ್ಥಾನದಲ್ಲಿರುವ ಅಧ್ಯಕ್ಷರು ಅವರನ್ನು ಕರೆದು ಮಾತನಾಡಿ, ಸರ್ಕಾರದಲ್ಲಿರುವವರಿಗೆ ಸಲಹೆ ಸೂಚನೆ ನೀಡಬೇಕು. ಪಕ್ಷದ ಶಾಸಕರ ಹಿತ ಕಾಯುವುದು ಅಧ್ಯಕ್ಷರ ಜವಾಬ್ದಾರಿಯಾಗಿರುತ್ತದೆ.
ಇಂತಹ ಕಠಿಣ ಸಂದರ್ಭದಲ್ಲಿಯೇ ಪಕ್ಷದ ಅಧ್ಯಕ್ಷರಾಗಿ ಜವಾಬ್ದಾರಿಯಿಂದ ಜಾರಿಕೊಂಡರೆ, ಪಕ್ಷದ ಸಂಘಟನೆ ಮಾಡಲು ಹೇಗೆ ಸಾಧ್ಯ ಎಂಬ ಮಾತುಗಳು ಕೇಳಿ ಬರುತ್ತಿವೆ. ಈಗಾಗಲೇ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದು, ಇನ್ನೂ ಹಲವರು ರಾಜೀನಾಮೆ ನೀಡುತ್ತಾರೆ ಎಂಬ ಮಾತುಗಳಿವೆ. ಅಂತವರನ್ನು ಕರೆದು ಸಮಾಧಾನ ಪಡಿಸುವ ಕೆಲಸವನ್ನು ರಾಜ್ಯಾಧ್ಯಕರು ಮಾಡಬೇಕು.
ಅಲ್ಲದೇ ಸರ್ಕಾರದಲ್ಲಿ ಶಾಸಕರ ಕೆಲಸಗಳು ಆಗುವಂತೆ ನೋಡಿಕೊಳ್ಳಲು ಉಪ ಮುಖ್ಯಮಂತ್ರಿಗೆ ಸೂಚನೆ ನೀಡಿ, ಶಾಸಕರ ಹಿತ ಕಾಯಬೇಕು. ಅದರ ಬದಲು ಸಂದಿಗ್ಧ ಪರಿಸ್ಥಿತಿಯಲ್ಲಿ ವಿದೇಶ ಪ್ರವಾಸ ಕೈಗೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ.
ವೇಣುಗೋಪಾಲ್ ಆಗಮನ?: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಬುಧವಾರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ. ಇಬ್ಬರು ಶಾಸಕರು ರಾಜೀನಾಮೆ ನೀಡಿರುವುದರಿಂದ ಪಕ್ಷದಲ್ಲಿ ಆಗುತ್ತಿರುವ ಬೆಳವಣಿಗೆ ಹಾಗೂ ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಸಕರು ರಾಜೀನಾಮೆ ನೀಡಲು ಮುಂದಾದರೆ,
ತೆಗೆದುಕೊಳ್ಳಬೇಕಾದ ತೀರ್ಮಾನಗಳ ಬಗ್ಗೆ ರಾಜ್ಯ ನಾಯಕರ ಜೊತೆ ಚರ್ಚಿಸಲು ವೇಣುಗೋಪಾಲ್ ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಬುಧವಾರ ಬೆಂಗಳೂರಿಗೆ ಆಗಮಿಸುವ ಬಗ್ಗೆ ಅಧಿಕೃತ ಪ್ರವಾಸ ನಿಗದಿಯಾಗಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.