Advertisement

ಕಾಶ್ಮೀರ ವಿದ್ಯಾರ್ಥಿಗಳ ಮೇಲೆ ನಿಗಾವಹಿಸಲು ನಿರ್ದೇಶನ

10:47 PM Oct 01, 2019 | Team Udayavani |

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿರುವ ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸಲು ರಾಜ್ಯ ಸರ್ಕಾರ ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜು ಆಡಳಿತ ಮಂಡಳಿಗೆ ಲಿಖಿತ ನಿರ್ದೇಶನ ನೀಡಿದೆ. ಕೇಂದ್ರ ಸರ್ಕಾರವು ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಕಾಶ್ಮೀರದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಲು ಕಾಲೇಜುಗಳಿಗೆ ಈ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಮೂಲಗಳು ಖಚಿತಪಡಿಸಿವೆ.

Advertisement

ವಿಶ್ವವಿದ್ಯಾಲಯಗಳಲ್ಲಿ ಅಥವಾ ಕಾಲೇಜುಗಳಲ್ಲಿರುವ ಜಮ್ಮು ಕಾಶ್ಮೀರದ ವಿದ್ಯಾರ್ಥಿ ಸಮುದಾಯದೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಅವರಲ್ಲಿರುವ ಭಯ ಹಾಗೂ ಬೆದರಿಕೆಯ ಗ್ರಹಿಕೆ ಹೋಗಲಾಡಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳಿಂದ ಯಾವುದೇ ರೀತಿಯ ಪ್ರಚೋದನೆ ಉಂಟಾಗದಂತೆ ಮತ್ತು ಇತರೆ ವಿದ್ಯಾರ್ಥಿ ಸಮೂಹದಿಂದ ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳು ಪ್ರಚೋದಿಸಲ್ಪಡದಿರುವುದನ್ನು ಖಚಿತಪಡಿಸಿಕೊಳ್ಳಲು ಆಡಳಿತ ಮಂಡಳಿಗೆ ಸೂಚಿಸಲಾಗಿದೆ ಎಂದು ಇಲಾಖೆಯ ಉನ್ನತಾಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಜಮ್ಮು ಕಾಶ್ಮೀರದ ವಿದ್ಯಾರ್ಥಿ ಸಮೂಹಗಳ ಸಂಘ ಅಥವಾ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರಲ್ಲಿ ವಿಶ್ವಾಸ ಹೆಚ್ಚಿಸುವ ಕ್ರಮ ತೆಗೆದುಕೊಳ್ಳಬೇಕು. ವಿದ್ಯಾರ್ಥಿ ಚಲನವಲನವನ್ನು ಸೂಕ್ಷ್ಮವಾಗಿ ಪರಿಶೀಲನೆ ಮಾಡುತ್ತಿರಬೇಕೆಂದು ನಿರ್ದೇಶಿಸಲಾಗಿದೆ.

ಸಹಾಯವಾಣಿ ತೆಗೆಯಲು ಅವಕಾಶ: ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳು ಯಾವುದೇ ಮೂಲಗಳಿಂದ ಬೆದರಿಕೆ ಇದೆ ಅಥವಾ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಭಾವಿಸಿದಲ್ಲಿ, ಜಿಲ್ಲಾಡಳಿತ ಮತ್ತು ವಿಶ್ವವಿದ್ಯಾಲಯವು ಅವರಿಗಾಗಿ ಸಹಾಯವಾಣಿ ಕೇಂದ್ರವನ್ನು ಆರಂಭಿಸಬೇಕು. ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಮುಖ್ಯಸ್ಥರು ಜಿಲ್ಲಾಡಳಿತದೊಂದಿಗೆ ಚರ್ಚಿಸಿ ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ಸಹಾಯವಾಣಿ ತೆರೆದು, ಅವರಿಗಿರುವ ಭಯ ಹೋಗಲಾಡಿಸಲು ಕ್ರಮ ಕೈಗೊಳ್ಳಬೇಕೆಂದು ವಿಶ್ವವಿದ್ಯಾಲಯಗಳಿಗೆ ಸೂಚಿಸಲಾಗಿದೆ.

ಜಿಲ್ಲಾ ಪ್ರಾಧಿಕಾರದಿಂದ ಭದ್ರತೆ: ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಜಮ್ಮು ಕಾಶ್ಮೀರದ ಎಲ್ಲ ವಿದ್ಯಾರ್ಥಿಗಳಿಗೂ ಸೂಕ್ತ ಭದ್ರತೆ ನೀಡುವುದು ಮತ್ತು ಆ ವಿದ್ಯಾರ್ಥಿಗಳಿಂದ ಯಾವುದೇ ರೀತಿಯ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳುವುದು ವಿಶ್ವವಿದ್ಯಾಲಯ ಅಥವಾ ಕಾಲೇಜು ಮಂಡಳಿಗಳ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಭದ್ರತೆ ಅಗತ್ಯವಿದ್ದಲ್ಲಿ ಜಿಲ್ಲಾ ಪ್ರಾಧಿಕಾರಗಳೊಂದಿಗೆ ಚರ್ಚಿಸಿ, ತುರ್ತು ಕ್ರಮ ತೆಗೆದುಕೊಳ್ಳಲು ಸರ್ಕಾರವು ವಿಶ್ವವಿದ್ಯಾಲಯಗಳಿಗೆ ಲಿಖಿತವಾಗಿ ನಿರ್ದೇಶಿಸಿದೆ.

Advertisement

ಕುಲಸಚಿವರಿಗೆ ಸೂಚನೆ: ರಾಜ್ಯದ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳು, ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಎಂಜಿನಿಯರಿಂಗ್‌ ಹಾಗೂ ಡಿಪ್ಲೊಮಾ ಕಾಲೇಜುಗಳ ಮುಖ್ಯಸ್ಥರಿಗೆ ಮತ್ತು ಬೆಂಗಳೂರು, ಮಂಗಳೂರು, ಮೈಸೂರು, ದಾವಣಗೆರೆ, ಮಹಿಳಾ ವಿವಿ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೇರಿ ಎಲ್ಲ ವಿಶ್ವವಿದ್ಯಾಲಯಗಳ ಕುಲ ಸಚಿವರಿಗೆ ಸರ್ಕಾರದ ಅಧೀನ ಕಾರ್ಯದರ್ಶಿಯಿಂದ ಕಾಶ್ಮೀರ ವಿದ್ಯಾರ್ಥಿಗಳ ಭದ್ರತೆ ಅಥವಾ ಅವರಿಂದ ಯಾವುದೇ ರೀತಿಯ ಅಹಿತಕರ ಘಟನೆ ಆಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ.

ಎಂಜಿನಿಯರಿಂಗ್‌ ಕಾಲೇಜುಗಳಲ್ಲೇ ಹೆಚ್ಚು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳಿಗೆ ವಿಶೇಷ ಕೋಟಾದಡಿ ರಾಜ್ಯದ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸೀಟು ಪಡೆಯಲು ಕಳೆದ ಅನೇಕ ವರ್ಷಗಳಿಂದ ಅವಕಾಶವಿದೆ. ಹೀಗಾಗಿ, ಪ್ರತಿ ವರ್ಷವೂ ಈ ಕೋಟಾದಡಿ ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಾರೆ. ಬೇರೆ ಪದವಿ ಅಥವಾ ಇನ್ನಿತರ ಕೋರ್ಸ್‌ಗಳಿಗೆ ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳು ಅಷ್ಟೊಂದು ಸಂಖ್ಯೆಯಲ್ಲಿ ದಾಖಲಾಗಿಲ್ಲ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

* ರಾಜು ಖಾರ್ವಿ ಕೊಡೇರಿ

Advertisement

Udayavani is now on Telegram. Click here to join our channel and stay updated with the latest news.

Next