Advertisement

ತ್ಯಾಜ್ಯ ವಿಂಗಡಿಸದಿದ್ದರೆ ದುಷ್ಪರಿಣಾಮ

10:07 PM Jul 19, 2019 | Lakshmi GovindaRaj |

ಚಿಕ್ಕಬಳ್ಳಾಪುರ: ವೈಜ್ಞಾನಿಕವಾಗಿ ತ್ಯಾಜ್ಯ ವಿಂಗಡಣೆ ಆಗದೇ ಇರುವುದರಿಂದ ಈಗಾಗಲೇ ಸಾಕಷ್ಟು ನೈಸರ್ಗಿಕ ಸಂಪನ್ಮೂಲಗಳ ಮೇಲೆ ದುಷ್ಪರಿಣಾಮ ಪರಿಣಾಮ ಬೀರುತ್ತಿದೆ. ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ಮನೆಯಲ್ಲಿ ಸಂಗ್ರಹವಾಗುವ ತ್ಯಾಜ್ಯದಲ್ಲಿ ಹಸಿ ಮತ್ತು ಒಣ ಕಸವನ್ನು ವಿಂಗಡಿಸಿ ನೀಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿರುತ್ತದೆಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ತಿಳಿಸಿದರು.

Advertisement

ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಸ್ಥಳೀಯ ನಗರಸಭೆ ಹಾಗೂ ಹಸಿರು ದಳ ಬೆಂಗಳೂರು ರವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಶಾಲಾ ಶಿಕ್ಷಕರುಗಳಿಗೆ ತ್ಯಾಜ್ಯ ನಿರ್ವಹಣೆ ಕುರಿತಾದ ಕಾರ್ಯಕ್ರಮದಲ್ಲಿ ಸಸಿಗೆ ನೀರು ಉಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ತ್ಯಾಜ್ಯ ಸಮಸ್ಯೆ ಮನುಕುಲದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದು, ಈಗಾಗಲೇ ನೈಸರ್ಗಿಕ ಸಂಪನ್ಮೂಲಗಳು ಹಾನಿಯಾಗಿದೆ. ಮುಂದಿನ ಪೀಳಿಗೆಯ ಭವಿಷ್ಯದ ಹಿತ ದೃಷ್ಟಿಯಿಂದಾದರೂ ತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಿ, ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸಲು ಸಾರ್ವಜನಿಕರು ಸಹಕರಿಸಬೇಕು ಎಂದರು. ಮನೆಗಳಲ್ಲಿ ದೊರೆಯುವ ಹಸಿ ಮತ್ತು ಒಣ ಕಸವನ್ನು ಮೂಲದಲ್ಲೇ ಬೇರ್ಪಡಿಸಿ ಕಸ ಸಂಗ್ರಹ ವಾಹನಗಳಿಗೆ ನೀಡುವುದರ ಮೂಲಕ ನಗರಸಭೆಗೆ ಸಹಕರಿಸಬೇಕು. ಇದರಿಂದ ಇಲ್ಲಿನ ಉತ್ತಮ ಪರಿಸರ ಮತ್ತು ಆರೋಗ್ಯಕರ ನಗರ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಯುವಪೀಳಿಗೆಯ ಭವಿಷ್ಯ ಎಲ್ಲರ ಕೈಯಲ್ಲಿದೆ. ತ್ಯಾಜ್ಯ ವಿಂಗಡಣೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಲು ಶಿಕ್ಷಕರು ಮುಂದಾಗಬೇಕು. ಮಕ್ಕಳಿಗೆ ಚಿಕ್ಕವಯಸ್ಸಿನಿಂದಲೇ ತ್ಯಾಜ್ಯ ವಿಂಗಡಣೆ ಬಗ್ಗೆ ಅರಿವು ಮೂಡಿಸಿದಾಗ ಮುಂದೆ ಎದುರಾಗುವಂತಹ ಸಮಸ್ಯೆಯನ್ನು ತಡೆಯಬಹುದು. ತ್ಯಾಜ್ಯ ವಿಂಗಡಣೆಯಲ್ಲಿ ಮಕ್ಕಳು ಹಾಗೂ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಹಾಗಾಗಿ, ಶಿಕ್ಷಕರು ಈ ಕಾರ್ಯಗಾರದ ಸದಪಯೋಗ ಪಡೆದುಕೊಂಡು ತ್ಯಾಜ್ಯ ವಿಂಗಡಣೆ ಮತ್ತು ನಿರ್ವಹಣೆ ಕುರಿತು ಅರಿವು ಮೂಡಿಸಲು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಪ್ರತಿಯೊಬ್ಬರು ಮನೆಗಳಲ್ಲಿ ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣವಾಗಿ ಬಳಸದಂತೆ ಪಣತೊಡಬೇಕಾಗಿದೆ. ಮನೆಯಿಂದ ಮೊದಲು ಪ್ಲಾಸ್ಟಿಕ್‌ ಬಳಕೆ ನಿಂತರೆ ಮಾತ್ರ ಉತ್ತಮ ಪರಿಸರ ನಿರ್ಮಾಣವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಸ್ಥಳೀಯ ನಗರ ಸಂಸ್ಥೆಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇದ ಬಗ್ಗೆ ಸಾಕಷ್ಟು ಅರಿವು ಮೂಡಿಸಿದರೂ ಕೆಲವರು ಕದ್ದುಮುಚ್ಚಿ ಪ್ಲಾಸ್ಟಿಕ್‌ ಬಳಕೆ ಹಾಗೂ ಮಾರಾಟ ಮುಂದುವರಿಸಿದ್ದು, ಸ್ವಯಂ ಪ್ರೇರಣೆಯಿಂದ ಸಾರ್ವಜನಿಕರು ಪ್ಲಾಸ್ಟಿಕ್‌ ಬಳಕೆ ತ್ಯಜಿಸುವ ಮೂಲಕ ಪರಿಸರ ರಕ್ಷಣೆ ಮಾಡಬೇಕಿದೆ ಎಂದು ಹೇಳಿದರು.

Advertisement

ಇಂದು ಪ್ಲಾಸ್ಟಿಕ್‌ ಬಳಕೆಯಿಂದ ಪರಿಸರ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವಿನ ಕೊರತೆ ಇದೆ. ಈ ಬಗ್ಗೆ ಸ್ಥಳೀಯ ಸಂಸ್ಥೆಗಳು ಅರಿವು ಮೂಡಿಸುವ ಕೆಲಸ ಇನ್ನಷ್ಟು ಆಗಬೇಕು. ಶಾಲಾ ಶಿಕ್ಷಕರಲ್ಲಿ ಅರಿವು ಮೂಡಿಸಿದರೆ ಮಕ್ಕಳ ಮೂಲಕ ಬದಲಾವಣೆ ತರಬಹುದೆಂಬ ಆಶಯದಿಂದ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ನಗರ ಪ್ರದೇಶಗಳು ಕಸದ ಡಪಿಂಗ್‌ ಯಾರ್ಡ್‌ಗಳಾದರೆ ಜನ ಅನೈರ್ಮಲ್ಯಕ್ಕೆ ತುತ್ತಾಗಿ ಅನೇಕ ರೋಗ, ರುಜನಗಳಿಗೆ ತುತ್ತಾಗಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ತಿಳಿಸಿದರು.

ನಗರಸಭೆ ಆಯುಕ್ತ ಉಮಾಕಾಂತ್‌ ಕಾರ್ಯಗಾರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶಾದ ಯೋಜನಾ ನಿರ್ದೇಶಕಿ ರೇಣುಕಾ, ಚಿಂತಾಮಣಿ ನಗರಸಭೆ ಆಯುಕ್ತ ಹರೀಶ್‌, ಬೆಂಗಳೂರಿನ ಹಸಿರುದಳದ ಅಧಿಕಾರಿಗಳಾದ ಅಶ್ವಿ‌ನಿ ಕಶ್ಯಪ್‌, ಸ್ಪಾತಿ ಸೇರಿದಂತೆ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು ಮತ್ತು ಮುಖ್ಯಾಧಿಕಾರಿಗಳು, ಪರಿಸರ ಅಭಿಯಂತರರು. ಆರೋಗ್ಯ ನಿರೀಕ್ಷಕರು ಹಾಗೂ ಪೌರಕಾರ್ಮಿಕರು , ಶಾಲಾ ಶಿಕ್ಷಕರುಗಳು ಉಪಸ್ಥಿತರಿದ್ದರು.

ಭವಿಷ್ಯದ ಪೀಳಿಗೆಗೆ ಮಾರಕ: ನಮ್ಮ ಸ್ವಾರ್ಥಕ್ಕಾಗಿ ಅಪಾಯಕಾರಿ ಪ್ಲಾಸ್ಟಿಕ್‌ ವಸ್ತುಗಳನ್ನು ಬಳಕೆ ಮಾಡಿ ಬಿಸಾಡುತ್ತಿವೆ. ಇದರಿಂದ ಮುಂದಿನ ದಿನಗಳಲ್ಲಿ ಆಗುವ ಅಪಾಯದ ಬಗ್ಗೆ ಯಾರು ಗಂಭೀರವಾಗಿ ಗಮನ ಹರಿಸುತ್ತಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ರೈತರ ತಿಪ್ಪೆಗುಂಡಿಗಳಲ್ಲಿ ಪ್ಲಾಸ್ಟಿಕ್‌ ಹೆಚ್ಚಾಗಿ ಕಾಣಿಸುತ್ತಿವೆ. ಜತೆಗೆ ಜಾನುವಾರಗಳ ಹೊಟ್ಟೆಗೂ ಪ್ಲಾಸ್ಟಿಕ್‌ ಸೇರಿ ಮರಣ ಹೊಂದುತ್ತಿವೆ. ನಮ್ಮ ದೇಹಕ್ಕೂ ಸೇರುತ್ತಿದೆ. ಪ್ಲಾಸ್ಟಿಕ್‌ನಿಂದಲೇ ಗಾಳಿ, ನೀರು, ಮಣ್ಣು ಮತ್ತು ವಾತಾವರಣ ಕಲುಷಿತಗೊಂಡು ಸಾಂಕ್ರಾಮಿಕ ರೋಗಗಳು ಹರಡುತ್ತಿವೆ. ಮಳೆ ಪ್ರಮಾಣ ಕಡಿಮೆಯಾಗಿದೆ. ಇದು ಹೀಗೆ ಮುಂದುವರೆದರೆ ಮುಂದಿನ ಭವಿಷ್ಯದ ಪೀಳಿಗೆಗೆ ಗಂಭೀರ ಪರಿಣಾಮ ಎದುರಾಗಲಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧರ್‌ ಶ್ರವಣ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next