ಯಾದಗಿರಿ: ವಿಧಾನಸಭಾ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ಆಯಾ ಇಲಾಖೆಗೆ ವಹಿಸಿರುವ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಇಲ್ಲದಿದ್ದರೆ ನಿರ್ಲಕ್ಷ್ಯವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಧಾನಸಭಾ ಚುನಾವಣೆ ನಿಮಿತ್ತ ಕರೆದಿದ್ದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿನ ಪ್ರತಿಯೊಂದು ಮತ ಗಟ್ಟೆಗಳಲ್ಲಿ ಸಕಲ ಮೂಲಭೂತ ಸೌಲಭ್ಯ ಕಲ್ಪಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ 1127 ಮತಗಟ್ಟೆಗಳು ಇದ್ದು, ಅವುಗಳ ಪೈಕಿ ಕೆಲವು ಮತಗಟ್ಟೆಗಳಿಗೆ ವಿದ್ಯುತ್, ಕುಡಿಯುವ ನೀರು, ಶೌಚಾಲಯ, ರ್‍ಯಾಂಪ್ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳು ಕೊರತೆ ಇವೆ. ಮತದಾರರ ಹಿತದೃಷ್ಟಿಯಿಂದ ಎಲ್ಲಾ ಸೌಕರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಪ್ರತಿಯೊಂದು ಮತಗಟ್ಟೆಯ ವ್ಯಾಪ್ತಿಯಲ್ಲಿ ಬರುವ ಅಂಗವಿಕಲ ಮತದಾರರ ವರದಿ ಪಡೆದು ಅವರಿಗೆ ಮತದಾನ ಮಾಡಲು ಸೂಕ್ತ ಅನುಕೂಲ ಮಾಡಬೇಕು. ಅವರಿಗಾಗಿ ಪ್ರತಿ ಮತಗಟ್ಟೆಯಲ್ಲಿ ರ್‍ಯಾಂಪ್ ನಿರ್ಮಿಸಬೇಕು. 18 ವರ್ಷ ಮೇಲ್ಪಟ್ಟು ವಯಸ್ಸಿನ ವಿಕಲಚೇತನರನ್ನು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿದೆಯೋ ಇಲ್ಲವೋ ಎಂಬುದರ ಬಗ್ಗೆ ಪರಿಶೀಲಿಸಿ, ಹೆಸರು ನೋಂದಣಿ ಮಾಡದಿದ್ದರೆ, ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮತದಾರರಿಗೆ ತಿಳಿಯುವಂತೆ ಬಹುತೇಕ ಮತಗಟ್ಟೆಗಳ ವಿಳಾಸವನ್ನು ಸ್ಪಷ್ಟವಾಗಿ ನಮೂದಿಸಬೇಕು. ಮತಗಟ್ಟೆಗಳಲ್ಲಿ ನೆಟ್‌ವರ್ಕ್, ಇಂಟರ್‌ನೆಟ್ ಇನ್ನಿತರೆ ಸೌಲಭ್ಯಗಳ ಕುರಿತು ಮಾಹಿತಿ ತಿಳಿದುಕೊಂಡು ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಸಹಾಯಕ ಆಯುಕ್ತ ಮಂಜುನಾಥ ಸ್ವಾಮಿ ಹಾಗೂ ಇತರೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.