Advertisement

ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಚರ್ಚೆ

12:30 AM Jan 29, 2019 | Team Udayavani |

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನವನ್ನು 5 ಸಾವಿರ ರೂ.ಗಳಿಗೆ ಹೆಚ್ಚಳ ಮಾಡುವ ಸಂಬಂಧ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

Advertisement

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಸುಮಾರು 12 ಸಾವಿರ ಅತಿಥಿ ಉಪನ್ಯಾಸಕ ರಿದ್ದಾರೆ. ಹಲವು ದಿನಗಳಿಂದ ವೇತನ ಹೆಚ್ಚಳದ ಸಂಬಂಧ ಹೋರಾಟ, ಧರಣಿ ಮಾಡಿಕೊಂಡು ಬರುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಮತ್ತು ಹಣಕಾಸು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಮುಖ್ಯಮಂತ್ರಿಗಳು ಇದಕ್ಕೆ ಸಮ್ಮತಿ ಸೂಚಿಸಿದ್ದಾರೆ’ ಎಂದರು.

ಹುದ್ದೆ ಭರ್ತಿ: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಉಪನ್ಯಾಸಕರ ಮತ್ತು ಪ್ರಾಚಾರ್ಯರ ಕೊರತೆಯಿದ್ದು ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಉಪನ್ಯಾಸಕರ ಮತ್ತು ಪ್ರಾಚಾರ್ಯರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಜತಗೆ ಬೆಂಗಳೂರು ವಿವಿ ಸೇರಿ ರಾಜ್ಯದ ಹಲವು ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ಉಪನ್ಯಾಸಕರ ಮತ್ತು ಸಿಬ್ಬಂದಿಗಳ ಕೊರತೆಯಿದ್ದು, ಈ ಹುದ್ದೆಗಳ ನೇಮಕಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಶಿಕ್ಷಣಕ್ಕೆ ಆದ್ಯತೆ ನೀಡಿ: ಪ್ರಾಥಮಿಕ ಶಾಲೆಗಳ ಅಭಿವೃದ್ಧಿ ಬಗ್ಗೆಯೂ ಬಜೆಟ್‌ನಲ್ಲಿ ಹಣ ಮೀಸಲಿಡುವಂತೆ ಮುಖ್ಯಮಂತ್ರಿಗಳಲ್ಲಿ ವಿನಂತಿ ಮಾಡಲಾಗಿದೆ. ಪ್ರಾಥಮಿಕ ಶಾಲೆಗಳಲ್ಲಿ ದುರಸ್ಥಿಗೊಂಡಿರುವ ಶಾಲಾ ಕಟ್ಟಡ ಮತ್ತು ಶೌಚಾಲಯಗಳ ನಿರ್ಮಾಣದ ಬಗ್ಗೆ ಸಮಾಲೋಚಿಸಿದ್ದು, ಶೈಕ್ಷಣಿಕ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಮೊದಲ ಆದ್ಯತೆ ನೀಡುವಂತೆ ಮನವಿ ಮಾಡಲಾಗಿದೆ ಎಂದರು.

Advertisement

ವರ್ಗಾವಣೆಗೆ ರಾಜಕೀಯ ಒತ್ತಡ: ರಾಜ್ಯದ ಹಲವು ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರನ್ನು ವಿವಿಧ ಕಡೆಗಳಲ್ಲಿ ಪ್ರಭಾರ ನಿಯೋಜನೆ ಮಾಡಲಾಗಿದೆ. ಹೀಗಾಗಿ, ಬೋಧಕರಿಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ವರ್ಗಾವಣೆ ಸಂಬಂಧ ಈ ಹಿಂದೆ 456 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ ಸರ್ಕಾರಿ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ ದಂಪತಿಗಳಿಗೆ ಆದ್ಯತೆ ನೀಡಲಾಗಿದ್ದು, 150 ಮಂದಿ ಬೋಧಕರನ್ನು ಮಾತ್ರ ವರ್ಗಾವಣೆ ಮಾಡಲಾಗಿದೆ. ಒಂದು ಕಡೆ ಇದ್ದವರು ಮತ್ತೂಂದು ಕಡೆ ಹೋಗಲು ಸಿದ್ಧರಿಲ್ಲ. ವರ್ಗಾವಣೆ ಸಂಬಂಧ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಒತ್ತಡ ತರುತ್ತಾರೆ. ಹೀಗಾಗಿಯೇ, ಹಲವು ವರ್ಷಗಳಿಂದ ವರ್ಗಾವಣೆ ಪ್ರಕ್ರಿಯೆ ನಡೆದಿಲ್ಲ ಎಂದು ತಿಳಿಸಿದರು

Advertisement

Udayavani is now on Telegram. Click here to join our channel and stay updated with the latest news.

Next