ಬೆಂಗಳೂರು: ನಗರದ ಆದಾಯ ತೆರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದ ಸಾರ್ಜಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಎ.ಮಲ್ಲಿಕಾರ್ಜುನ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ನಡೆಸಿತು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ. ಇದು ಕೆಲವು ವ್ಯಕ್ತಿಗಳ ವಿರುದ್ಧವಾಗಿದೆ. ಇದನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ತಿಳಿಸಿ ಅರ್ಜಿ ವಜಾಗೊಳಿಸಿತು. ಇದೇ ವೇಳೆ, ಅರ್ಜಿದಾರರು ಕಾನೂನಿನಲ್ಲಿ ಲಭ್ಯವಿರುವ ಇತರ ಅವಕಾಶಗಳಡಿ ಪ್ರಕರಣ ಸಂಬಂಧ ಪರಿಹಾರ ಕಂಡುಕೊಳ್ಳಬಹುದು ಎಂದು ಸಲಹೆ ನೀಡಿತು.
ರಾಜ್ಯದ ವಿವಿಧೆಡೆ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ಮನೆಗಳ ಮೇಲಿನ ಐಟಿ ದಾಳಿ ಖಂಡಿಸಿ ಮಾ.28ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಇತರ ನಾಯಕರು ಆದಾಯ ತೆರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಅವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.