Advertisement

ಇಲಾಖೆ‌ಗಳ ಸ್ಥಳಾಂತರ; ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ

06:00 AM Sep 07, 2018 | |

ಬೆಂಗಳೂರು: ಉತ್ತರ ಕರ್ನಾಟಕ ವಿರೋಧಿ ಎಂಬ ಆರೋಪದಿಂದ ಮುಕ್ತವಾಗಲು ಸಮ್ಮಿಶ್ರ ಸರ್ಕಾರ ಇದೀಗ ಒಂಬತ್ತು ಪ್ರಮುಖ ವಿಭಾಗಗಳನ್ನು ಆ ಭಾಗಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆಗೆ ಚಾಲನೆ ನೀಡಿದೆ. 

Advertisement

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಸೂಚನೆಯಂತೆ 9 ಕಚೇರಿಗಳನ್ನು ಸ್ಥಳಾಂತರಿಸುವ ಬಗ್ಗೆ ಮುಖ್ಯಕಾರ್ಯದರ್ಶಿಯವರು ಸಲ್ಲಿಸಿರುವ ವರದಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕವಾಗಿ ಒಪ್ಪಿಗೆ ನೀಡಲಾಗಿದೆ. ಯಾವ ಕಚೇರಿಯನ್ನು ಎಲ್ಲಿಗೆ ಸ್ಥಳಾಂತರಿಸಬೇಕು ಎಂಬುದನ್ನು ನಿರ್ಧರಿಸಲು ಸಂಪುಟ ಉಪಸಮಿತಿ ರಚಿಸಲು ತೀರ್ಮಾನಿಸಲಾಗಿದೆ.

2006ರಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಯಲ್ಲಿ ಸುವರ್ಣ ಸೌಧಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸುವರ್ಣ ಸೌಧ ನಿರ್ಮಾಣವಾದ ಬಳಿಕ ಕೆಲವು ಇಲಾಖೆಗಳ ಕಚೇರಿಗಳನ್ನು ಅಲ್ಲಿಗೆ ಸ್ಥಳಾಂತರಿಸುವ ಬಗ್ಗೆ ಹೇಳಿದ್ದರು. ಅಲ್ಲದೇ, ಮುಖ್ಯಮಂತ್ರಿಯಾದ ಬಳಿಕ ಬಜೆಟ್‌ ಮಂಡನೆ ಮತ್ತು ಸಂಪುಟ ವಿಸ್ತರಣೆ ವೇಳೆ ಸರ್ಕಾರ ಉತ್ತರ ಕರ್ನಾಟಕ ವಿರೋಧಿ ಎಂಬ ಆರೋಪ ಆ ಭಾಗದಿಂದ ಕೇಳಿಬಂದಿತ್ತು. ಈ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದ್ದ ಮುಖ್ಯಮಂತ್ರಿಗಳು, ಉತ್ತರ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಪರಿಕಲ್ಪನೆಯೊಂದಿಗೆ ಈ ಸರ್ಕಾರ ಕೆಲಸ ಮಾಡುತ್ತಿದೆ. ಆ ನಿಟ್ಟಿನಲ್ಲಿ ಕೆಲವು ಇಲಾಖೆಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಅದರಂತೆ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ, ಉತ್ತರ ಕರ್ನಾಟಕಕ್ಕೂ ಆದ್ಯತೆ ನೀಡುವ ಉದ್ದೇಶದಿಂದ ಕೆಲವು ಸರ್ಕಾರಿ ಕಚೇರಿಗಳನ್ನು ಆ ಭಾಗಕ್ಕೆ ಸ್ಥಳಾಂತರಿಸುವುದಾಗಿ ಘೋಷಿಸಿದ್ದ ಮುಖ್ಯಮಂತ್ರಿಗಳು, ಈ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದರು. ಅದರಂತೆ ಅವರು ಅಧಿಕಾರಿಗಳ ಮಟ್ಟದಲ್ಲಿ ಸಮಾಲೋಚನೆ ನಡೆಸಿ ಕೆಲವು ಕಚೇರಿಗಳನ್ನು ಉತ್ತರ ಕರ್ನಾಟಕ್ಕೆ ಸ್ಥಳಾಂತರಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದರು ಎಂದರು.

ಈ ಪ್ರಸ್ತಾವನೆ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ‌ವಾಗಿ ಚರ್ಚಿಸಿ ಮುಖ್ಯ ಕಾರ್ಯದರ್ಶಿಗಳ ವರದಿಯಲ್ಲಿರುವಂತೆ ಇಲಾಖೆಗಳನ್ನು ಸ್ಥಳಾಂತರಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಲಾಗಿದೆ. ಆದರೆ, ಯಾವ್ಯಾವ ಕಚೇರಿಗಳನ್ನು ಯಾವ್ಯಾವ ಭಾಗಕ್ಕೆ ಸ್ಥಳಾಂತರಿಸಬೇಕು ಎಂಬುದನ್ನು ನಿರ್ಧರಿಸಲು ಸಚಿವ ಸಂಪುಟ ಉಪಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿಗಳು ಸಂಪುಟ ಉಪಸಮಿತಿ ರಚಿಸಲಿದ್ದು, ಈ ಸಮಿತಿ ವರದಿ ನೀಡಿದ ಬಳಿಕ ಇಲಾಖೆಗಳನ್ನು ಸ್ಥಳಾಂತರಿಸುವ ಕೆಲಸ ಆರಂಭವಾಗಲಿದೆ ಎಂದರು.

Advertisement

ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಕೆಲವು ಕಚೇರಿಗಳನ್ನು ಸ್ಥಳಾಂತರಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಈ ಹಿಂದೆ ನೀಡಿದ್ದ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬೆಳಗಾವಿ ಸೇರಿದಂತೆ ಹೊಸಪೇಟೆ, ವಿಜಯಪುರ, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಿಗೆ ಕಚೇರಿಗಳನ್ನು ಸ್ಥಳಾಂತರಿಸುವ ಬಗ್ಗೆ ಪ್ರಸ್ತಾವನೆಯಲ್ಲಿದೆ. ಆದರೆ, ಎಲ್ಲಿಗೆ ಸ್ಥಳಾಂತರಿಸಬೇಕು ಎಂಬುದನ್ನು ಸಂಪುಟ ಉಪಸಮಿತಿಯೇ ನಿರ್ಧರಿಸಲಿದೆ ಎಂದರು.

ಉತ್ತರ ಕರ್ನಾಟಕಕ್ಕೆ ಸ್ಥಳಾಂತರಗೊಳ್ಳಲಿರುವ ಕಚೇರಿಗಳು
– ಕೃಷ್ಣಾ ಭಾಗ್ಯ ಜಲನಿಗಮದ ಕೇಂದ್ರ ಮತ್ತು ನೋಂದಾಯಿತ ಕಚೇರಿ
– ಕರ್ನಾಟಕ ನೀರಾವರಿ ನಿಗಮದ ಕೇಂದ್ರ ಮತ್ತು ನೋಂದಾಯಿತ ಕಚೇರಿ
– ಸಕ್ಕರೆ ಅಭಿವೃದ್ಧಿ ನಿರ್ದೇಶನಾಲಯ
– ಕಬ್ಬು ಅಭಿವೃದ್ಧಿ ಆಯುಕ್ತರು
– ಕರ್ನಾಟಕ ವಿದ್ಯುತ್‌ ಮಗ್ಗ ನಿಗಮ
– ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯನ್ನು ವಿಭಜಿಸಿ ಉತ್ತರ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ರಚನೆ ಮಾಡಿ ಅದನ್ನು ಉತ್ತರ ಕರ್ನಾಟಕದಲ್ಲಿ ಸ್ಥಾಪಿಸುವುದು
– ರಾಜ್ಯ ಮಾನವ ಹಕ್ಕುಗಳ ಆಯೋಗದ ನಾಲ್ಕು ಸದಸ್ಯರ ಪೈಕಿ ಒಬ್ಬ ಸದಸ್ಯರ ಕಚೇರಿ
– ನಾಲ್ವರು ಮಾಹಿತಿ ಹಕ್ಕು ಆಯುಕ್ತರ ಕಚೇರಿಗಳ ಪೈಕಿ ಎರಡು ಮಾಹಿತಿ ಹಕ್ಕು ಆಯುಕ್ತರ ಕಚೇರಿ
– ಪ್ರಾಚ್ಯವಸ್ತು ಸಂಗ್ರಹಾಲಯ ನಿರ್ದೇಶನಾಲಯ

ಬಡ್ತಿ ಮೀಸಲು ಉಳಿಸಿಕೊಳ್ಳುವ ಕಾಯ್ದೆ ಜಾರಿಗೆ ಮುಂದಾದ ಸರ್ಕಾರ
ಬೆಂಗಳೂರು:
ಸುಪ್ರೀಂ ಕೋರ್ಟ್‌ನಲ್ಲಿ ಬಡ್ತಿ ಮೀಸಲು ವಿವಾದ ಸದ್ಯಕ್ಕೆ ಇತ್ಯರ್ಥಗೊಳ್ಳುವ ಲಕ್ಷಣ ಕಂಡುಬಾರದ ಹಿನ್ನೆಲೆಯಲ್ಲಿ ಮೀಸಲು ಬಡ್ತಿ ಉಳಿಸಿಕೊಳ್ಳುವ “ಮೀಸಲಾತಿ ಆಧಾರದಲ್ಲಿ ಬಡ್ತಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ತತ್ಪರಿಣಾಮವಾದ ಜ್ಯೇಷ್ಠತೆ ವಿಸ್ತರಿಸುವ ಕಾಯ್ದೆ’ಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಅದಕ್ಕಾಗಿ ಸೆ. 12ರಂದು ಈ ಕುರಿತ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರುವ ವೇಳೆ ಕೋರ್ಟ್‌ನ ಅಂತಿಮ ಆದೇಶಕ್ಕೆ ಒಳಪಟ್ಟು “ಮೀಸಲಾತಿ ಆಧಾರದಲ್ಲಿ ಬಡ್ತಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ತತ್ಪರಿಣಾಮವಾದ ಜೇಷ್ಠತೆ ವಿಸ್ತರಿಸುವ ಕಾಯ್ದೆ’ಯನ್ನು ತಕ್ಷಣದಿಂದಲೇ ಜಾರಿಗೊಳಿಸಲು ಅವಕಾಶ ಕೋರಿ ಪ್ರಮಾಣಪತ್ರ ಸಲ್ಲಿಸಲು ಮತ್ತು ಈ ಕುರಿತು ಬಲವಾದ ವಾದ ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಈ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ, ಮೀಸಲು ಬಡ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಂಪುಟ ಸಭೆಯಲ್ಲಿ ಔಪಚಾರಿಕ ಚರ್ಚೆ ನಡೆದಿದೆ. ಸುಪ್ರೀಂ ಕೋರ್ಟ್‌ ಪ್ರಕರಣದ ವಿಚಾರಣೆಯನ್ನು ಸೆ. 12ಕ್ಕೆ ಮುಂದೂಡಿದ್ದು, ಅಂದು ವಿಚಾರಣೆ ಸಂದರ್ಭದಲ್ಲಿ ಅಂತಿಮ ತೀರ್ಪಿಗೆ ಒಳಪಟ್ಟು “ಮೀಸಲಾತಿ ಆಧಾರದಲ್ಲಿ ಬಡ್ತಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ತತ್ಪರಿಣಾಮವಾದ ಜೇಷ್ಠತೆ ವಿಸ್ತರಿಸುವ ಕಾಯ್ದೆ’ಯನ್ನು ಜಾರಿಗೆ ತರಲು ಅವಕಾಶ ಕೋರಿ ಪ್ರಮಾಣಪತ್ರ ಸಲ್ಲಿಸುವುದರೊಂದಿಗೆ ಪ್ರಬಲ ವಾದ ಮಂಡಿಸಲು ವಕೀಲರಿಗೆ ತಿಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next