ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದ್ದರೆ, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಹೇಳಿದ್ದಾರೆ. ವಿಧಾನಸೌಧದಲ್ಲಿ ತಮ್ಮ ನೂತನ ಕಚೇರಿ ಉದ್ಘಾಟಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.
ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರವಾಗಿತ್ತು ಎಂಬ ಮಾಹಿತಿ ಇದೆ. ಈ ಬಗ್ಗೆ ಪರಿಶೀಲಿಸಿ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಯೋಜನೆ ಅತ್ಯಂತ ಉಪಯುಕ್ತವಾಗಿದ್ದು, ಇದರಲ್ಲಿ ಯಾವುದೇ ಲೋಪವಾದರೂ ಸರಿಪಡಿಸಿ ಜನರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ 58 ನಗರ ಸಭೆ, 113 ಪುರಸಭೆ ಹಾಗೂ 90 ಪಟ್ಟಣ ಪಂಚಾಯತಿಗಳು ಬರುತ್ತವೆ. ಪ್ರತಿ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಗಳಲ್ಲೂ ಎಲ್ಲರಿಗೂ ಶೌಚಾಲಯ ಸಿಗಬೇಕು. ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತ ಮಾಡುವುದು ನನ್ನ ಗುರಿ. ರಾಜ್ಯದಲ್ಲಿ ಅಮೃತ್ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಹಾಗೂ ತಜ್ಞರಿಂದ ಸೂಕ್ತ ಸಲಹೆ ಪಡೆಯಲಾಗುವುದು ಎಂದು ಹೇಳಿದರು.
ಸರ್ಕಾರ ಐದು ವರ್ಷ ಇರುತ್ತದೆ: ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಕಾಂಗ್ರೆಸ್‌ನ ಯಾವ ಶಾಸಕರೂ ಪಕ್ಷ ಬಿಟ್ಟು ಹೋಗುವುದಿಲ್ಲ. ಈಗ ರಾಜೀನಾಮೆ ಕೊಡಲು ಜನರಿಗೆ ಸೂಕ್ತ ಕಾರಣ ಹೇಳಬೇಕು. ಪಕ್ಷ ತೊರೆಯಲು ಯಾವುದೇ ಕಾರಣ ಇಲ್ಲ. ಪಕ್ಷ ತೊರೆದರೂ ಮತ್ತೆ ಚುನಾವಣೆ ಎದುರಿಸುವುದು ಹುಡುಗಾಟಿಕೆಯಲ್ಲ ಎಂದು ಹೇಳಿದರು.
ಸದ್ಯ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿರುವುದರಿಂದ ನಾವು ಬಯಸಿರುವುದು ಸಿಗುವುದಿಲ್ಲ. ಆದರೂ, ಹೈ ಕಮಾಂಡ್ ನಮ್ಮನ್ನು ಗುರುತಿಸಿ ಸ್ಥಾನ ನೀಡಿದೆ. ಸಚಿವ ಸ್ಥಾನ ಸಿಗದವರಿಗೆ ಅಸಮಾಧಾನ ಇರುವುದು ಸಹಜ. ಅದನ್ನು ಪಕ್ಷದ ನಾಯಕರು ಶಮನಗೊಳಿಸುವ ಕೆಲಸ ಮಾಡುತ್ತಾರೆ ಎಂದು ಹೇಳಿದರು.
ಮಹದಾಯಿ ಅಧಿಸೂಚನೆಗೆ ಕೇಂದ್ರಕ್ಕೆ ನಿಯೋಗ: ಮಹದಾಯಿ ಯೋಜನೆ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಶೀಘ್ರವೇ ಅಧಿಸೂಚನೆ ಹೊರಡಿಸಬೇಕು. ಇಲ್ಲದಿದ್ದರೆ, ರಾಜ್ಯದಿಂದ ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗಿ ಕೇಂದ್ರ ಸರ್ಕಾರ ಮೇಲೆ ಒತ್ತಡ ಹೇರಲಾಗುವುದು ಎಂದು ಹೇಳಿದರು. ಈಗಾಗಲೇ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೀರು ಬಳಕೆ ಮಾಡಿಕೊಳ್ಳುವಂತೆ ಆದೇಶ ನೀಡಿದೆ.
ಸುಪ್ರೀಂ ಕೋರ್ಟ್ ಆದೇಶದಂತೆ ನೀರು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಇದರಿಂದ ಹುಬ್ಬಳ್ಳಿ ಧಾರವಾಡ ಸೇರಿದಂತೆ ಅನೇಕ ನಗರಗಳಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ. ಆದರೆ, ಕೇಂದ್ರ ಸರ್ಕಾರ ಅನಗತ್ಯ ವಿಳಂಬ ಮಾಡುತ್ತಿದೆ. ಹೀಗಾಗಿ ಶೀಘ್ರವೇ ಸರ್ವ ಪಕ್ಷ ನಿಯೋಗ ತೆಗೆದುಕೊಂಡು ಹೋಗಲು ನಾವು ಸಿದ್ಧರಿದ್ದೇವೆ ಎಂದು ಹೇಳಿದರು.