ಬೆಂಗಳೂರು: ಜೆಡಿಎಸ್ ಬಂಡಾಯ ಶಾಸಕರನ್ನು ಅನರ್ಹಗೊಳಿಸುವ ಪ್ರಕರಣದಲ್ಲಿ ಮೇ 7ರೊಳಗೆ ತೀರ್ಪು
ನೀಡುವಂತೆ ನಿರ್ದೇಶಿಸಿದ್ದ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ವಿಧಾನಸಭಾಧ್ಯಕ್ಷ ಕೆ.ಬಿ ಕೋಳಿವಾಡ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ವಿಧಾನಸಭಾಧ್ಯಕ್ಷರು ಮಾತ್ರವಲ್ಲದೆ, ಬಂಡಾಯ ಶಾಸಕರಾದ ಜಮೀರ್ ಅಹಮದ್, ರಮೇಶ್ ಬಂಡಿಸಿದ್ದೇಗೌಡ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಹಾಗೂ ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆಯನ್ನು ಮೇ 4ಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಶಾಸಕರ ಕುರಿತಾದ ದೂರುಗಳ ಬಗ್ಗೆ ತೀರ್ಪು ನೀಡುವುದು ಸ್ಪೀಕರ್ ಅವರ ಪರಮೋತ್ಛ ಅಧಿಕಾರ. ಹೀಗಾಗಿ, ನಿಗದಿತ ಗಡುವಿನೊಳಗೆ ತೀರ್ಪು ನೀಡುವಂತೆ ಸ್ಪೀಕರ್‌ಗೆ ನಿರ್ದೇಶನ ನೀಡುವ ಅಧಿಕಾರ ಹೈಕೋರ್ಟ್‌ಗೆ ಇಲ್ಲ ಎಂದು ಹೇಳಿದರು.
ಈ ಕುರಿತು, ಸುಪ್ರೀಂಕೋರ್ಟ್‌ನ ಕೆಲವು ತೀರ್ಪುಗಳನ್ನು ಉಲ್ಲೇಖೀಸಿದರು. ರಾಜ್ಯ ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಸ್ಪೀಕರ್ ವೈಯಕ್ತಿಕವಾಗಿ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ. ಈ ವಿಚಾರದಲ್ಲಿ ಸರ್ಕಾರಕ್ಕೆ ಯಾವುದೇ ಸಂಬಂಧವಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆ ಮುಂದೂಡಿತು.