ಮಡಿಕೇರಿ: ಸರಕಾರಿ ಶಾಲೆಗಳ ಉಳಿವಿಗಾಗಿ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೊಡಗು ಘಟಕ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ನಗರದ ಗಾಂಧಿ ಮೈದಾನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡ ಶಿಕ್ಷಕರು ಇತ್ತೀಚಿನ ವರ್ಷಗಳಲ್ಲಿ ಸರಕಾರ ಮತ್ತು ಇಲಾಖೆಯ ಅಧಿಕಾರಿಗಳು ಪ್ರಾಥಮಿಕ ಶಾಲಾ ಶಿಕ್ಷಕರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದರು. ಶಿಕ್ಷಕರ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.
ಸರಕಾರಿ ಶಾಲೆಗಳಲ್ಲಿನ ಮಕ್ಕಳ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಮತ್ತು ಸರಕಾರಿ ಶಾಲೆಗಳನ್ನು ಉಳಿಸುವ ದಿಸೆಯಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲೂ ಎಲ್ಕೆಜಿ ಮತ್ತು ಯುಕೆಜಿಯನ್ನು ಆರಂಭಿಸಬೇಕು. ಆ ಮೂಲಕ ಸಮಾಜದ ಬಡವರ್ಗದ ಮಕ್ಕಳು ಕೂಡ ಇಂಗ್ಲೀಷ್ ಮಾಧ್ಯಮದಲ್ಲಿ ಕಲಿಯಲು ಅವಕಾಶ ಮಾಡಿಕೊಡಬೇಕು. ಇದು ಜಾರಿಗೆ ಬಂದಲ್ಲಿ ಮುಂದಿನ ವರ್ಷಗಳಲ್ಲಿ ರಾಜ್ಯದಲ್ಲಿ ಖಾಸಗಿ ಶಾಲೆಗಳೇ ಇಲ್ಲದಂತಾಗಲಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.
ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಕೆ.ಕುಮಾರ್ ಅವರು ಮಾತನಾಡಿ, ಸರ್ಕಾರದ ಕಾಲ ಕಾಲದ ಬದಲಾವಣೆಗೆ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಹೊಣೆಗಾರಿಕೆ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಇತ್ತೀಚಿಗೆ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದ್ದು, ಮಕ್ಕಳನ್ನು ಶಾಲೆಗೆ ಸೇರಿಸಬೇಕಾದರೆ ಶಾಲೆಯ ವಾತವರಣ ಉತ್ತಮವಾಗಿರಬೇಕು ಎಂದು ಅಭಿಪ್ರಾಯಪಟ್ಟರು. ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಪಿ.ಕರುಂಬಯ್ಯ, ಸಂಘದ ವೀರಾಜಪೇಟೆ ತಾಲೂಕು ಅಧ್ಯಕ್ಷ ಸುರೇಂದ್ರ, ಸೋಮವಾರಪೆೇಟೆ ತಾಲೂಕು ಅಧ್ಯಕ್ಷ ಹೆಚ್.ಎನ್.ಮಂಜುನಾಥ್, ಮಡಿಕೇರಿ ತಾಲೂಕು ಅಧ್ಯಕ್ಷೆ ಹಾಗೂ ರಾಜ್ಯ ಸಮಿತಿ ಕಾರ್ಯದರ್ಶಿ ಪುದಿಯನೆರವನ ರೇವತಿ ರಮೇಶ್, ಜಿಲ್ಲಾ ಉಪಾಧ್ಯಕ್ಷೆ ಡಿ.ಕೆ. ರೇಖಾ ಕುಮಾರಿ, ಸಂಘಟನಾ ಕಾರ್ಯದರ್ಶಿ ಮತ್ತು ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಎ.ವಿ.ಮಂಜುನಾಥ್ ಸೇರಿದಂತೆ ನೂರಾರು ಶಿಕ್ಷಕ-ಶಿಕ್ಷಕಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.