Advertisement

ನಿಗದಿತ ಸ್ಥಳಗಳಲ್ಲೇ ಗಣೇಶ ವಿಸರ್ಜನೆ ಮಾಡಿ

09:57 PM Aug 28, 2019 | Team Udayavani |

ಚಾಮರಾಜನಗರ: ಜಿಲ್ಲೆಯ ಪಟ್ಟಣ, ಗ್ರಾಮಾಂತರ ಪ್ರದೇಶಗಳ ವಿವಿಧ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲಾಗುವ ಗಣೇಶ ಮೂರ್ತಿಗಳನ್ನು ನಿಗದಿ ಪಡಿಸಲಾಗುವ ಸ್ಥಳಗಳಲ್ಲಿ ವಿಸರ್ಜನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೌರಿ-ಗಣೇಶ ಹಬ್ಬದ ಅಂಗವಾಗಿ, ಗೌರಿ ಗಣೇಶ ವಿಗ್ರಹಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂಬಂಧ ವಹಿಸಬೇಕಿರುವ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಧಿಕಾರಿಗಳು ಅರಿವು ಮೂಡಿಸಿ: ಜಿಲ್ಲೆಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ವಿಸರ್ಜನೆಗೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಗದಿ ಪಡಿಸಲಾಗುವ ಸ್ಥಳದಲ್ಲಿ ವಿಸರ್ಜನೆ ಮಾಡಬೇಕು ಅಥವಾ ವಿಸರ್ಜನೆಗಾಗಿಯೇ ವಿನ್ಯಾಸಗೊಳಿಸಿದ ಸಂಚಾರಿ ನೀರಿನ ಟ್ಯಾಂಕರ್‌ಗಳನ್ನು ಬಳಸಲು ಸಾರ್ವಜನಿಕರಲ್ಲಿ ಅಧಿಕಾರಿಗಳು ಅರಿವು ಮೂಡಿಸಬೇಕು ಎಂದು ಅವರು ಸೂಚಿಸಿದರು.

ಗೊಂದಲಕ್ಕೆ ಅವಕಾಶ ನೀಡಬೇಡಿ: ಎಲ್ಲಾ ಭಾಗಗಳಲ್ಲಿಯೂ ಗಣಪತಿ ವಿಸರ್ಜನೆಗೆ ಅಗತ್ಯ ಸಂಚಾರಿ ನೀರಿನ ಟ್ಯಾಂಕರ್‌ಗಳನ್ನು ವ್ಯವಸ್ಥೆ ಮಾಡಬೇಕು, ಈ ಬಗ್ಗೆ ಮುಂಚಿತವಾಗಿಯೇ ಜನರಿಗೆ ಮಾಹಿತಿ ನೀಡಬೇಕು. ಯಾವುದೇ ಗೊಂದಲಕ್ಕೆ ಅವಕಾಶವಾಗಬಾರದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ಲಾಸ್ಟರ್‌ ಆಫ್ ಪ್ಯಾರಿಸ್‌ ಗಣೇಶ ಮಾರಾಟ ನಿಷೇಧ: ಪ್ಲಾಸ್ಟರ್‌ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣಪತಿ ಮಾರಾಟಕ್ಕೆ ಅವಕಾಶವಿರುವುದಿಲ್ಲ. ಹೊರ ರಾಜ್ಯ, ಜಿಲ್ಲೆಗಳಿಂದ ತರಲಾದ ಪ್ಲಾಸ್ಟರ್‌ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣಪತಿ ಮೂರ್ತಿಯನ್ನು ಮಾರಾಟಮಾಡುವಂತಿಲ್ಲ. ನಗರ ಸ್ಥಳೀಯ ಸಂಸ್ಥೆ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

Advertisement

ಶಾಂತಿಯುತವಾಗಿ ಹಬ್ಬ ಆಚರಿಸಿ: ಗಣಪತಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತಾಗಬೇಕು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಳ್ಳುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವವರು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ಪಡೆದುಕೊಳ್ಳಬೇಕಿದೆ ಎಂದು ಕಾವೇರಿ ತಿಳಿಸಿದರು.

ಅಗತ್ಯ ನಿಯಮಗಳನ್ನು ಪಾಲಿಸಿ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ. ಆನಂದ್‌ ಕುಮಾರ್‌ ಮಾತನಾಡಿ, ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪಿಸಿ ಕಾರ್ಯಕ್ರಮಗಳನ್ನು ಆಯೋಜಿಸುವವರು ಅನುಮತಿ ಪಡೆದುಕೊಳ್ಳಬೇಕು. ಆಯಾ ಪೊಲೀಸ್‌ ಠಾಣೆಗೂ ಮಾಹಿತಿ ನೀಡಿ ಅಗತ್ಯ ನಿಯಮಗಳನ್ನು ಪಾಲಿಸಬೇಕು.

ಆಯಾ ಭಾಗದಲ್ಲಿ ಸಭೆ ನಡೆಸಿ ಕಾರ್ಯಕ್ರಮ ಸಂಬಂಧ ಪಾಲನೆ ಮಾಡಬೇಕಿರುವ ವಿಷಯಗಳ ಕುರಿತು ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು ಎಂದು ತಿಳಿಸಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೆ.ಸುರೇಶ್‌, ತಾಲೂಕುಗಳ ತಹಶೀಲ್ದಾರರು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next