ರಾಯಚೂರು: ಸರ್ಕಾರ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ಮೊಟ್ಟೆ ವಿತರಣೆ ಆರಂಭಿಸಿದ್ದು, ಈ ಯೋಜನೆಯನ್ನು ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ (ಗ್ರಾಕೂಸ್) ಸದಸ್ಯರು ಪ್ರತಿಭಟನೆ ನಡೆಸಿದರು.
ನಗರದ ಡಿಸಿ ಕಚೇರಿ ಎದುರಿನ ಉದ್ಯಾನದಲ್ಲಿ ಪತ್ರಿಭಟನೆ ನಡೆಸಿ ಬಳಿಕ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಮಕ್ಕಳಲ್ಲಿನ ಅಪೌಷ್ಟಿಕತೆ ಸಮಸ್ಯೆ ನಿವಾರಣೆ ದೃಷ್ಟಿಯಿಂದ ಸರ್ಕಾರ ಈ ಯೋಜನೆ ಆರಂಭಿಸಿರುವುದು ಸ್ವಾಗತಾರ್ಹ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪ್ರಾಥಮಿಕ ಶಾಲೆಗಳಲ್ಲಿ ಸರ್ಕಾರ ಮಕ್ಕಳಿಗೆ ಮೊಟ್ಟೆ ನೀಡುತ್ತಿರುವುದು ಉತ್ತಮ ನಡೆಯಾಗಿದೆ. ಮೊಟ್ಟೆ ಉತ್ತಮ ಆಹಾರವಾಗಿದ್ದು, ಮಕ್ಕಳ ಪೌಷ್ಟಿಕತೆ ವೃದ್ಧಿಗೆ ಸಹಕರಿಸುತ್ತಿದೆ. ಹೀಗಾಗಿ ವಾರದಲ್ಲಿ ಮೂರು ದಿನಗಳ ಬದಲಿಗೆ ಆರು ದಿನ ಮೊಟ್ಟೆ ವಿತರಿಸಬೇಕು ಎಂದು ಒತ್ತಾಯಿಸಿದರು.
ನಮ್ಮ ಸಂಘಟನೆ ಕಾರ್ಯಕರ್ತರು ರಾಜ್ಯದ 21 ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಸಂಘಟನೆ ಸದಸ್ಯರ ಬಹುತೇಕ ಮಕ್ಕಳು ಸರ್ಕಾರಿ ಶಾಲೆಗಳಲ್ಲೇ ಓದುತ್ತಿದ್ದಾರೆ. ಸರ್ಕಾರದ ಮೊಟ್ಟೆ ವಿತರಣೆ ಯೋಜನೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಆರಂಭಿಸಿ, ವಾರಕ್ಕೆ ಆರು ದಿನ ನೀಡುವಂತಾಗಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಗ್ರಾಕೂಸ್ ಸಂಚಾಲಕಿ ವಿದ್ಯಾ ಪಾಟೀಲ್, ಗುರುರಾಜ, ಮಾರೆಮ್ಮ, ಈರಮ್ಮ, ಮಲ್ಲಮ್ಮ, ದೇವಮಣಿ, ಬಸವರಾಜ ಇದ್ದರು.