Advertisement

District Collector CT Shilpanag: ದೌರ್ಜನ್ಯ ಪ್ರಕರಣ ಶೀಘ್ರ ವಿಲೇವಾರಿ ಮಾಡಿ

04:55 PM Sep 05, 2023 | Team Udayavani |

ಚಾಮರಾಜನಗರ: ಜಿಲ್ಲೆಯಲ್ಲಿ ಬಾಕಿ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಿ ಅಗತ್ಯ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್‌ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ಪ್ರತಿಬಂಧ ಕಾಯ್ದೆ-1995 ಸೆಕ್ಷನ್‌ 4(2) ರಡಿ ದಾಖಲಿಸಲ್ಪಟ್ಟ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳ ವಿಲೇವಾರಿ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಕ್ಷ್ಯಾಧಾರ ಒದಗಿಸಿ: ಜಿಲ್ಲಾದ್ಯಂತ 2015ರಿಂದ 2023ರವರೆಗೆ ಒಟ್ಟು 114 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣ ಬಾಕಿಯಾಗಿದ್ದು ಆದ್ಯತೆ ಮೇರೆಗೆ ವಿಲೇವಾರಿಗೆ ಅಧಿಕಾರಿಗಳು ಮುಂದಾಗಬೇಕು. ಪ್ರತಿ ತಾಲೂಕಿನಲ್ಲಿ ಬಾಕಿ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪ್ರಕರಣ ಗುರುತಿಸಿ ಸರಿಯಾದ ಸಾಕ್ಷ್ಯಾಧಾರ ಒದಗಿಸಿ ಪ್ರಕರಣ ಇತ್ಯರ್ಥಕ್ಕೆ ಹೆಚ್ಚು ಒತ್ತು ನೀಡಬೇಕು ಎಂದರು.

ಪ್ರಾಮುಖ್ಯತೆ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ದೌರ್ಜನ್ಯ ಪ್ರಕರಣಗಳ ವಿಲೇವಾರಿಗೆ ವರದಿ ಸಿದ್ಧಪಡಿಸಿ ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ಪೊಲೀಸ್‌ ಕಚೇರಿಯಲ್ಲಿ ಕ್ರೆçಂ ಮಾನಿಟರಿಂಗ್‌ ಸೆಲ್‌ ಸ್ಥಾಪಿಸಿ ಪ್ರತಿ ತಿಂಗಳೂ ಪ್ರಕರಣವಾರು ಸವಿವರವಾಗಿ ಪರಿಶೀಲನೆ ನಡೆಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣ ವಿಲೇವಾರಿಗೆ ಪ್ರಾಮುಖ್ಯತೆ ನೀಡಲಾಗುವುದು ಎಂದರು.

ಅನುಮತಿ ಬೇಕು: ಜಿಲ್ಲಾ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ರಘು ಮಾತನಾಡಿ, ದೌರ್ಜನ್ಯ ಪ್ರಕರಣಗಳನ್ನು ಇತ್ಯರ್ಥಪಡಿಸಲು ಅಧಿಕಾರಿಗಳ ಸಹಕಾರ ಉತ್ತಮವಾಗಿದೆ. ಜಿಲ್ಲೆಯಲ್ಲಿರುವ ಒಂದೇ ನ್ಯಾಯಾಲಯಕ್ಕೆ ಎಲ್ಲಾ ಬಗೆಯ ಪ್ರಕರಣ ದಾಖಲಾಗುತ್ತಿರುವುದರಿಂದ ಪ್ರಕರಣ ಶೀಘ್ರ ವಿಲೇವಾರಿಗೆ ವಿಳಂಬವಾಗುತ್ತಿದೆ. ಬೇರೆ ನ್ಯಾಯಾಲಯದಲ್ಲಿ ಸದರಿ ಪ್ರಕರಣ ಇತ್ಯರ್ಥಗೊಳಿಸಲು ಉತ್ಛನ್ಯಾಯಾಲಯದ ಅನುಮತಿ ಬೇಕಾಗಿದೆ ಎಂದರು.

Advertisement

ಇದಕ್ಕೆ ಪ್ರತಿಕ್ರಿಯಿಸಿದ್ದ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು, ಈ ಸಂಬಂಧ ಸೂಕ್ತ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಕಾನೂನು ಇಲಾಖೆಯಿಂದ ಅಗತ್ಯ ಅನುಮತಿ ಪಡೆಯಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ಎಂ.ಶ್ರೀಧರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್‌, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಚಾಮರಾಜನಗರ ಡಿವೈಎಸ್‌ಪಿ ಲಕ್ಷ್ಮಯ್ಯ, ಕೊಳ್ಳೇಗಾಲ ಡಿವೈಎಸ್‌ಪಿ ಸೋಮಣ್ಣಯ್ಯ ಇದ್ದರು.

ಬಳಿಕ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್‌ ಅವರು ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ 2023-24ನೇ ಸಾಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ 2023ರ ಜುಲೈ ತಿಂಗಳ ಅಂತ್ಯದವರೆಗೆ ಸಾಧಿಸಿರುವ ಪ್ರಗತಿ ವಿವರ ಪರಿಶೀಲಿಸಿದರು.

ಸಂಬಂಧಪಟ್ಟ ಅಧಿಕಾರಿಗಳು ಸಾಕ್ಷ್ಯ ಒದಗಿಸಲಿ: ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರಕರಣಗಳನ್ನು ಪೂರ್ಣ ಪ್ರಮಾಣದಲ್ಲಿ ಅರಿತು ಸಾಕ್ಷ್ಯ ಒದಗಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆಯಡಿ ಜನರಿಗೆ ನ್ಯಾಯ ನೀಡುವ ನಿಟ್ಟಿನಲ್ಲಿ ಯಾರೂ ವಂಚಿತವಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಮಿತಿಯ ಎಲ್ಲರೂ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳ ಇತ್ಯರ್ಥವಾದ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್‌ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next