ಮೈಸೂರು: ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಪೂರೈಕೆ, ಮೇವು ಲಭ್ಯತೆ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ತಮ್ಮ ಕಚೇರಿ ಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ವರ್ಚುವಲ್ ಸಭೆಯಲ್ಲಿ ಮಾತನಾಡಿದರು.
ಜಂಟಿಯಾಗಿ ಪರಿಶೀಲಿಸಿ: ಕುಡಿಯುವ ನೀರು ಪೂರೈಕೆ ಹಾಗೂ ಮೇವು ಪೂರೈಕೆ ಸಂಬಂಧ ತಾಲೂಕು ಮಟ್ಟದಲ್ಲಿ ಪ್ರತಿ ಶನಿವಾರ ಟಾಸ್ಕ್ಫೋರ್ಸ್ ಸಮಿತಿ ಸಭೆಯನ್ನು ನಡೆಸಬೇಕು. ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳ ಕುರಿತು ತಹಸೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿ ಯರ್‌ಗಳು ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿರಬೇಕು. ಮಳೆಯಿಂದ ಮನೆಗಳ ಹಾನಿ ಕುರಿತು ಪರಿಹಾರ ವಿತರಣೆ ಸಂಬಂಧ ಗ್ರಾಮ ಆಡಳಿತಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಎಂಜಿನಿಯರ್‌ಗಳು ಜಂಟಿಯಾಗಿ ಪರಿಶೀಲಿಸಿ ಛಾಯಾಚಿತ್ರದೊಂದಿಗೆ ವರದಿ ನೀಡಬೇಕು ಎಂದರು.
ನೀರಿನ ಕಟ್ಟೆ ನಿರ್ಮಾಣಕ್ಕೆ ಕ್ರಮಕೈಗೊಳ್ಳಿ: ಜಿಪಂ ಸಿಇಒ ಕೆ.ಎಂ ಗಾಯತ್ರಿ ಮಾತನಾಡಿ, ಬೋರ್ವೆಲ್‌ಗಳ ದುರಸ್ತಿ, ಕಲುಷಿತ ನೀರು ಪೂರೈಕೆಯಾಗದಂತೆ ಹಾಗೂ ಜಾನುವಾರುಗಳ ಕುಡಿಯುವ ನೀರಿನ ಕಟ್ಟೆ ನಿರ್ಮಾಣ ಮಾಡಲು ಕ್ರಮ ವಹಿಸಬೇಕೆಂದು ತಿಳಿಸಿದರು.
ಅಧಿಕಾರಿಗಳು ಸಂಪೂರ್ಣ ಮಾಹಿತಿ ಪಡೆಯಿರಿ: ಬದಲಿ ಮೋಟಾರ್ ವ್ಯವಸ್ಥೆ, ಹೊಸ ಬೋರ್ವೆಲ್ ವಿಫಲವಾದಲ್ಲಿ ಭೂ ವಿಜ್ಞಾನಿ ಗಳಿಂದ ತಪಾಸಣೆ ನಡೆಸಿ ಹೊಸ ಬೋರ್ವೆಲ್ ಕೊರೆಯಲು ಕ್ರಮ ಕೈಗೊಳ್ಳಬೇಕು. ಶಾಲೆ, ಅಂಗನವಾಡಿ, ಹಾಸ್ಟೆಲ್‌ಗಳಲ್ಲಿ ಸಮರ್ಪಕ ಕುಡಿಯುವ ನೀರು ಲಭ್ಯತೆ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಖಾಸಗಿ ಬೋರ್ವೆಲ್‌ಗಳನ್ನು ಬಾಡಿಗೆಗೆ ಪಡೆಯುವ ಸಂಬಂಧ ಖಾಸಗಿ ಬೋರ್ವೆಲ್‌ಗಳ ಲಭ್ಯತೆ ಬಗ್ಗೆ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಂಪೂರ್ಣ ಮಾಹಿತಿಯನ್ನು ಪಡೆಯಬೇಕು ಎಂದರು.
ನೀರಿನ ಗುಣಮಟ್ಟದ ಬಗ್ಗೆ ಪರಿಶೀಲಿಸಿ: ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿ ಯರ್ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ನಿರಂತರವಾಗಿ ಪರಿಶೀಲಿಸಬೇಕು. ನೀರಿನ ಮೂಲಗಳ ಬಗ್ಗೆ ಅವರಲ್ಲಿ ಮಾಹಿತಿ ಇರಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಿದರೆ ಇದರ ಬಗ್ಗೆ ಪ್ರತಿ ದಿನ ಜಿಲ್ಲಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಬೇಕು. ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ಸಂಬಂಧ ಮುಂದಿನ ಒಂದು ತಿಂಗಳಿಗೆ ಕ್ರಿಯಾ ಯೋಜನೆ ತಯಾರಿಸಿ ಸಲ್ಲಿಸುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ತಿಳಿಸಲಾಯಿತು.