ದಾವಣಗೆರೆ: ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳ ಅನುಷ್ಟಾನ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ತೋರುತ್ತಿರುವ ನಿರ್ಲಕ್ಷ್ಯದಿಂದ ಆ ಯೋಜನೆಯ ಸಾಧನೆ ಕುಂಠಿತವಾಗಿದ್ದು, ಕೂಡಲೇ ಅಧಿಕಾರಿಗಳು ನಿಗಿದಿತ ಕ್ರಮ ಕೈಗೊಳ್ಳದಿದ್ದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ
ಡಾ| ಬಗಾದಿ ಗೌತಮ್ ಎಚ್ಚರಿಸಿದ್ದಾರೆ.
ಶುಕ್ರವಾರ, ತಮ್ಮ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ, ಗಿರಿಜನ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲವು ಇಲಾಖೆಗಳು ನಿಗದಿತ ಗುರಿ ಸೊನ್ನೆ ಎಂದು ಬರೆದಿದ್ದೀರಿ. ಯಾವುದೇ ಇಲಾಖೆಯಲ್ಲಿ ನಿಗದಿ ಸೊನ್ನೆ ಇರುವುದಿಲ್ಲ. ಇಲಾಖೆಯ ಗುರಿಯಲ್ಲಿ ಮರು ಹಂಚಿಕೆ ಮಾಡಿಕೊಳ್ಳಬೇಕಾಗುತ್ತದೆ. ಮತ್ತೆ ಹಲವು ಇಲಾಖೆಗಳಲ್ಲಿ ಸಾಧನೆ ಕಡಿಮೆ ಇದೆ ಎಂದು ಇಲಾಖಾವಾರು ಕಾರಣ ಕೇಳಿ, ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚಿಸಿದರು.
ಎಸ್‌ಸಿಪಿ, ಟಿಎಸ್‌ಪಿ ಯೋಜನೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಇದು ಸರಿಯಲ್ಲ. ಈ ಯೋಜನೆ ಕುರಿತು ಅಧಿಕಾರಿಗಳು ಸಂಪೂರ್ಣವಾಗಿ ತಿಳಿದುಕೊಂಡು ಪ್ರಗತಿಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಸಭೆಗಳಿಗೆ ನೀಡುವ ವರದಿಗಳನ್ನು ಸರಿಯಾಗಿ ಪರಿಶೀಲಿಸಿ ಸಹಿ ಮಾಡಿ ಕಳುಹಿಸಿಕೊಡಬೇಕು ಎಂದು ತಿಳಿಸಿದರು.
ಸಭೆಗೆ ಹಾಜರಾಗದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಬಗ್ಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶಿವಾನಂದ ಎಂ. ಕುಂಬಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.