ಧಾರವಾಡ: ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಅತಿವೃಷ್ಟಿ ಸಂಭವಿಸಿದರೆ ಪರಿಸ್ಥಿತಿ ನಿರ್ವಹಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಸನ್ನದ್ಧರಾಗಿರಬೇಕು ಎಂದು ಜಿಲ್ಲಾ ಧಿಕಾರಿ ನಿತೇಶ್ ಪಾಟೀಲ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2019ರ ಆಗಸ್ಟ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಯ ಪ್ರಮಾಣ ಮತ್ತು ಪರಿಹಾರ ಕಾರ್ಯಗಳ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಮನೆಗಳ ಪುನರ್‌ನಿರ್ಮಾಣ, ನೆರೆ ಬಾಧಿತ ಸಂತ್ರಸ್ತರಿಗೆ ಆಹಾರ ಕಿಟ್ ಪೂರೈಕೆ, ಮಾನವ ಜೀವಹಾನಿ ಹಾಗೂ ಜಾನುವಾರು ಹಾನಿ ವಿವರಗಳನ್ನು ಪಡೆದರು. ಪ್ರಸಕ್ತ ವರ್ಷವೂ ಅತಿವೃಷ್ಟಿ ಸಂಭವಿಸಿದರೆ ಬೆಣ್ಣೆಹಳ್ಳ ಮತ್ತು ತುಪ್ಪರಿಹಳ್ಳ ಪ್ರವಾಹ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಲು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.
ಹಳ್ಳದ ನಾಲೆಗಳ ಹೂಳು ತೆಗೆಯಲು ಸಣ್ಣ ನೀರಾವರಿ ಇಲಾಖೆ ಹಾಗೂ ಜಿಪಂ ಮೂಲಕ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲು ಸೂಚಿಸಿದರು. ಅತಿವೃಷ್ಟಿಯಿಂದ ಹಾನಿಯಾದ ಪ್ರದೇಶಗಳಲ್ಲಿ ರಸ್ತೆಗಳ ಪುನರ್ ನಿರ್ಮಾಣಕ್ಕೆ 3.9 ಕೋಟಿ ರೂ. ಅನುದಾನ ಲಭ್ಯವಿದೆ. ಈ ಹಣ ಬಳಸಿಕೊಂಡು ಕೂಡಲೇ ದುರಸ್ತಿಗೆ ಅಗತ್ಯವಿರುವ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಬೇಕು. ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗದಿಂದ ಚೆಕ್ ಡ್ಯಾಂಗಳ ನಿರ್ಮಾಣ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು.
ಜಿಪಂ ಸಿಇಒ ಡಾ| ಬಿ.ಸಿ. ಸತೀಶ್ ಮಾತನಾಡಿ, ಮಳೆಗಾಲ ಪ್ರಾರಂಭವಾಗಿರುವುದರಿಂದ ಡೆಂಘೀ, ಚಿಕೂನ್‌ಗುನ್ಯಾ ಮತ್ತಿತರ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆಗಳಿರುತ್ತವೆ. ಸೊಳ್ಳೆ ಹಾಗೂ ಲಾರ್ವಾಗಳ ನಿರ್ಮೂಲನೆಗೆ ರಾಸಾಯನಿಕಗಳನ್ನು ಸಿಂಪಡಿಸಬೇಕು. ಜನಜಾಗೃತಿ ಮೂಡಿಸಬೇಕು. ಚಿಕಿತ್ಸೆಗೆ ಸಾಕಷ್ಟು ಔಷ ಧ ದಾಸ್ತಾನು ಹೊಂದಿರಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮಾತನಾಡಿ, ಪ್ರವಾಹ ಪರಿಸ್ಥಿತಿನಿರ್ವಹಣೆಗೆ 25 ಲಕ್ಷ ರೂ. ಮೌಲ್ಯದ ಜೀವರಕ್ಷಕ ಸಾಮಗ್ರಿಗಳನ್ನು ಖರೀದಿಸಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದರು. ಎಸ್ಪಿ ವರ್ತಿಕಾ ಕಟಿಯಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ಯಶವಂತ ಮದೀನಕರ, ಜಂಟಿ ಕೃಷಿ ನಿರ್ದೇಶಕ ಬಸವರಾಜ ಐ.ಬಿ., ಮತ್ತಿತರರು ಸಭೆಯಲ್ಲಿದ್ದರು.