ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಜಲಮೂಲಗಳ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, ಅಂತರ್ಜಲ ಸಂರಕ್ಷಣೆಗಾಗಿ ಅಂತರ್ಜಲ ಚೇತನ ಎಂಬ ನೂತನ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದ್ದು, ಪ್ರಾರಂಭಿಕವಾಗಿ ಚಿಕ್ಕಬಳ್ಳಾಪುರ ಸೇರಿ ಒಂಭತ್ತು ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಜಿಲ್ಲೆಗೆ ಸೋಮವಾರ ಆಗಮಿಸಿದ್ದ ಅವರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಜಿಪಂ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಪ್ರಸ್ತುತ ದಿನಗಳಲ್ಲಿ ಅಂತರ್ಜಲ ಕುಸಿತದಿಂದಾಗಿ ನೀರಿನ ಅಭಾವವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಲ ಪುನಶ್ಚೇತನಕ್ಕೆ ಆದ್ಯತೆ ನೀಡಿದೆ. ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಅಂತರ್ಜಲ ಚೇತನ ಎಂಬ ವಿನೂತನ ಯೋಜನೆಯನ್ನು ಆರ್ಟ್ ಆಫ್ ಲಿವಿಂಗ್ ಅವರ ಸಹಭಾಗಿತ್ವದಲ್ಲಿ ಈಯೋಜನೆಯನ್ನು ಜಾರಿಗೊಳಿಸಲಾಗುತ್ತಿದ್ದು, ಐದು ವರ್ಷಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 249 ರೂ. ಇದ್ದ ನರೇಗಾ ಯೋಜನೆ ಕೂಲಿ ಹಣ 275ಕ್ಕೆ ಏರಿಸಲಾಗಿದೆ ಎಂದರು.
ಸಭೆಯಲ್ಲಿ ಜಿಪಂ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ, ಉಪಾಧ್ಯಕ್ಷೆ ನಿರ್ಮಲ, ಸಂಸದ ಬಿ.ಎನ್ ಬಚ್ಚೇಗೌಡ, ಶಾಸಕರಾದ ಜೆ.ಕೆ.ಕೃಷ್ಣಾರೆಡ್ಡಿ, ಎಂಲ್ಸಿ ಚೌಡರೆಡ್ಡಿ ತೂಪಲ್ಲಿ, ವೈ.ಎ. ನಾರಾಯಣ ಸ್ವಾಮಿ, ಸರ್ಕಾರದ ಕಾರ್ಯದರ್ಶಿ ಎಲ್.ಕೆ ಅತೀಖ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತ ಡಾ.ವಿಶಾಲ್ ಆರ್, ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತ
ಅನಿರುದ್ಧ್ ಶ್ರವಣ್, ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್, ಎಸ್ಪಿ ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಆರತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.