ಮೈಸೂರು: ಮೇ 13ಕ್ಕೆ ರಾಜ್ಯ ಸರ್ಕಾರ ನಾಲ್ಕು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳ ಬಗ್ಗೆ ಫಲಾನುಭವಿಗಳ ಅಭಿಪ್ರಾಯ ತಿಳಿಯಲು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಕಲಾಮಂದಿರದಲ್ಲಿ ಜನ-ಮನ ಸಂವಾದ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜನಮನ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿ, ರಾಜ್ಯ ಸರ್ಕಾರದ ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿಭಾಗ್ಯ, ಮನಸ್ವಿನಿ ಮೈತ್ರಿ, ವಿದ್ಯಾಸಿರಿ, ಋಣ ಮುಕ್ತ, ಕ್ಷೀರಾಧಾರೆ, ವಸತಿ ಭಾಗ್ಯ, ಮುಂತಾದ ಯೋಜನೆಗಳ ಬಗ್ಗೆ ಫಲಾನುಭವಿಗಳ ಅಭಿಪ್ರಾಯವನ್ನು ಸಚಿವರು ಪಡೆಯಲಿದ್ದಾರೆ.
ಸರ್ಕಾರವೇ ರೂಪಿಸಿ ಅನುಷ್ಠಾನ ಗೊಳಿಸಿದ ಯೋಜನೆಗಳು ಸಮಾಜದ ಎಲ್ಲ ವರ್ಗದ ಜನರನ್ನು ನಿರೀಕ್ಷಿಸಿದಂತೆ ತಲುಪಿ ಸರ್ಕಾರದ ಮೂಲ ಉದ್ದೇಶ ಈಡೇರಿದೆ. ಈ ಬಗ್ಗೆ ಜನರ ಅಭಿಪ್ರಾಯ ಪಡೆಯಲು ಜನ-ಮನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಇಲಾಖಾ ಅಧಿಕಾರಿಗಳು ಎಲ್ಲ ತಾಲೂಕು ಹಾಗೂ ವರ್ಗಗಳಿಂದ ಫಲಾನುಭವಿಗಳನ್ನು ಆಯ್ಕೆ ಮಾಡಿ ಫಲಾನುಭವಿಗಳ ಪಟ್ಟಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸುವುದು. ವಿವಿಧ ಇಲಾಖೆಗಳಿಂದ ಫಲಾನುಭವಿಗಳನ್ನು ಆಯ್ಕೆ ಮಾಡಿ ಕಾರ್ಯಕ್ರಮದ ದಿನದಂದು ಜಿಲ್ಲಾ ಕೇಂದ್ರಕ್ಕೆ ಕರೆದುಕೊಂಡು ಬರಲು ಆಯಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಿಗೆ ತಿಳಿಸಿದರು.
ಜಿಪಂ ಸಿಇಒ ಪಿ. ಶಿವಶಂಕರ್, ಮೈಸೂರು ಉಪ ವಿಭಾಗಾಧಿಕಾರಿ ಆನಂದ್ ಸಿ.ಎಲ್,ಮೈಸೂರು ನಗರ ಉಪ ಪೊಲೀಸ್ ಆಯುಕ್ತ ಡಾ. ಎಚ್.ಟಿ .ಶೇಖರ್, ಮೈಸೂರು ಮಹಾ ನಗರಪಾಲಿಕೆ ಹೆಚ್ಚುವರಿ ಆಯುಕ್ತ ರಾಜು, ಮುಡಾ ಕಾರ್ಯದರ್ಶಿ ಸವಿತಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ರಾಜು ಆರ್. ಇದ್ದರು.