ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಬೆಳ್ತಂಗಡಿಯ ಕೆ. ಹರೀಶ್ ಕುಮಾರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ| ಜಿ. ಪರಮೇಶ್ವರ್ ನೇಮಕಗೊಳಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಡಿಸಿಸಿ ಅಧ್ಯಕ್ಷರಾಗಿ ಹರೀಶ್ ಕುಮಾರ್ ಅವರ ನೇಮಕವನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.
ವಿವಿಧ ಹುದ್ದೆ ನಿರ್ವಹಣೆ ಬೆಳ್ತಂಗಡಿಯ ಹರೀಶ್ ಕುಮಾರ್ ಅವರು ಬಿ.ಎ. ಪದವೀಧರರಾಗಿದ್ದು ವೃತ್ತಿಯಲ್ಲಿ ಕೃಷಿಕರು.
1978ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಅವರು ಕಳೆದ 39 ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಬ್ಲಾಕ್ ಯುವಕಾಂಗ್ರೆಸ್ ಅಧ್ಯಕ್ಷರಾಗಿ, ಯುವಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾಗಿ, ಅವಿಭಜಿತ ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಾಗಿ, ಜಿಲ್ಲಾ ಪರಿಷತ್ ಸದಸ್ಯರಾಗಿ, ಸ್ಥಾಯೀ ಸಮಿತಿ ಸದಸ್ಯರಾಗಿ, ಭೂನ್ಯಾಯ ಮಂಡಳಿ ಸದಸ್ಯರಾಗಿ, ಬೆಳ್ತಂಗಡಿ ತಾ| ಕಾಂಗ್ರೆಸ್ ಅಧ್ಯಕ್ಷರಾಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹೀಗೆ ಗುರುತರ ಹೊಣೆಗಾರಿಕೆಗಳನ್ನು ನಿರ್ವಹಿಸಿದ್ದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇತ್ತೀಚೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಮಾನಾಥ ರೈ ಅವರು ನೇಮಕ ಪತ್ರವನ್ನು ಹರೀಶ್ ಕುಮಾರ್‌ಗೆ ಹಸ್ತಾಂತರಿಸಿದರು. ಶಾಸಕ ಜೆ.ಆರ್. ಲೋಬೋ, ಡಿಸಿಸಿ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಗೇರು ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ಮನಪಾ ಉಪಮೇಯರ್ ರಜನೀಶ್, ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಯುವಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಪ್ರಮುಖರಾದ ಸದಾಶಿವ ಉಳ್ಳಾಲ, ಪದ್ಮನಾಭ ನರಿಂಗಾನ, ವಿಶ್ವಾಸ್‌ದಾಸ್, ಟಿ.ಕೆ. ಸುಧೀರ್, ನಜೀರ್ ಬಜಾಲ್, ಸಂತೋಷ್ ಕುಮಾರ್ ಶೆಟ್ಟಿ, ಶಬ್ಬೀರ್ ಉಪಸ್ಥಿತರಿದ್ದರು.