Advertisement

ಕಾರ್ಮಿಕರ ಬೆಂಬಲಕ್ಕೆ ಕಾಂಗ್ರೆಸ್ ಸದಾ ನಿಲ್ಲಲಿದೆ: ಡಿ.ಕೆ ಶಿವಕುಮಾರ್

03:48 PM Aug 10, 2020 | sudhir |

ಬೆಂಗಳೂರು: ಕಾರ್ಮಿಕರ ಬದುಕು ಉಳಿಸಲು ಎಲ್ಲ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ಸರ್ಕಾರ ಕೋವಿಡ್ ಪಿಡುಗಿನ ಪರಿಸ್ಥಿತಿಯಲ್ಲಿ ಕಾರ್ಮಿಕರ ಹಿತಾಸಕ್ತಿ ಕಾಪಾಡಬೇಕು. ಕಾಂಗ್ರೆಸ್ ಪಕ್ಷ ಸದಾ ಕಾರ್ಮಿಕರ ಬೆಂಬಲಕ್ಕೆ ನಿಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

Advertisement

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಭಾರತ ರಕ್ಷಿಸಿ’ ಆಂದೋಲನ ಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತೆರಳಿ ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಅವರು ಮಾತನಾಡಿದ ಅವರು,

‘ದೇಶವನ್ನು ರಕ್ಷಿಸಲು ಇಂದು ಎಲ್ಲ ಕಾರ್ಮಿಕ ಸಂಘಟನೆಗಳು ಒಂದಾಗಿ ಹೋರಾಟಕ್ಕೆ ನಿಂತಿವೆ. ಇಂದು ದೇಶ ಉಳಿಯಬೇಕಾಗಿದೆ. ಜೀವ ಇದ್ದರೆ ಜೀವನ. ಸ್ವಾತಂತ್ರ್ಯ ಬಂದ ನಂತರ ಅನೇಕ ಕಾನೂನುಗಳನ್ನು ತಿದ್ದುಪಡಿ ಮಾಡಿಕೊಂಡು ದೇಶ ನಡೆಸಿಕೊಂಡು ಬಂದಿದ್ದೇವೆ. ಈ ಹಿಂದೆ ಕಾನೂನು ತಿದ್ದುಪಡಿ ಮಾಡಬೇಕಾದರೆ ಅನೇಕ ಹೋರಾಟ ಸಂಘಟನೆಗಳ ಜತೆ ಚರ್ಚೆ ಮಾಡಿ ತಿದ್ದುಪಡಿ ಮಾಡಲಾಗುತ್ತಿತ್ತು.

ಇವತ್ತು ಅಸಂಘಟಿತ ಕಾರ್ಮಿಕರು, ರೈತರು, ಕೈಗಾರಿಕೆಗಳ ಕಾರ್ಮಿಕರು ಸೇರಿದಂತೆ ಎಲ್ಲಾ ವರ್ಗದ ಕಾರ್ಮಿಕರು ಇಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಯಾವುದೇ ಸರ್ಕಾರ ಅಥವಾ ಸಂಸ್ಥೆ ಸರಿಯಾಗಿ ನಡೆಯಬೇಕಾದರೆ ತಳಮಟ್ಟದಿಂದ ಮೇಲ್ಮಟ್ಟದ ವರೆಗೂ ಸಂಘಟಿತವಾಗಿ ಕೆಲಸ ಮಾಡಬೇಕು.

ಸರ್ಕಾರ ಕೋವಿಡ್ ನಿರ್ವಹಣೆಗೆ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಮಾಡಿದೆ. ರಾಜ್ಯ ಸರ್ಕಾರ 1610 ಕೋಟಿ ಪ್ಯಾಕೇಜ್ ಘೋಷಣೆ ಮಾಡಿದೆ. ಆದರೆ ಇದರಲ್ಲಿ ಶೇ.10ರಿಂದ 15 ರಷ್ಟು ಫಲಾನುಭವಿಗಳಿಗೆ ಮಾತ್ರ ಹಣ ತಲುಪಿದೆ. ಸರ್ಕಾರ ತನ್ನ ಮಾತನ್ನು ಉಳಿಸಿಕೊಂಡು ಇವರಿಗೆ ನೆರವಾಗಬೇಕು. ಇಂದು ಕಾರ್ಮಿಕರು ತಮ್ಮ ಬದುಕು ಉಳಿಸಿಕೊಳ್ಳಲು ಇಂದು ಒಟ್ಟಾಗಿ ಹೋರಾಟಕ್ಕೆ ನಿಂತಿವೆ. ಕಾರ್ಮಿಕರ ಹಿತ ಕಾಯಲು ಹಾಗೂ ಕಾರ್ಮಿಕರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಸದಾ ಬೆಂಬಲ ನೀಡುತ್ತದೆ. ಕಾರ್ಮಿಕರ ಪರವಾಗಿ ಹೋರಾಟ ಮಾಡುತ್ತಿರುವ ಎಲ್ಲ ಸಂಘಟನೆಗಳಿಗೆ ಶುಭವಾಗಲಿ.

Advertisement

ನಾವು ಉಳುವವನೆ ಭೂಮಿಯ ಒಡೆಯ ಎಂದು ಭೂಮಿಯನ್ನು ರೈತರಿಗೆ ಹಂಚಿದೆವು. ಆದರೆ ಇಂದು ಅದೇ ಭೂಮಿಯನ್ನು ಕಸಿದುಕೊಳ್ಳಲು ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುತ್ತಿದೆ. ಜತೆಗೆ ಕಾರ್ಮಿಕರ ಹಿತಕ್ಕೆ ಮಾರಕವಾಗಿರುವ ಕಾರ್ಮಿಕ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡುತ್ತಿದೆ.

ನಮ್ಮ ಕಾರ್ಮಿಕ ಕಾಯ್ದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗಿತ್ತು. ಇಂದು ಯಾವುದೇ ಕಾರ್ಖಾನೆ, ಕೈಗಾರಿಕೆಗಳು ಕೇಳದಿದ್ದರೂ ಸರ್ಕಾರ ಕಾರ್ಮಿಕ ಕಾಯ್ದೆ ತಿದ್ದುಪಡಿ ತಂದಿದೆ. ಇದರ ವಿರುದ್ಧ ಎಲ್ಲರೂ ಹೋರಾಟ ಮಾಡೋಣ ಕಾಂಗ್ರೆಸ್ ಪಕ್ಷ ನಿಮ್ಮ ಜತೆ ನಿಲ್ಲಲಿದೆ’ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next