ನವದೆಹಲಿ/ಬೆಂಗಳೂರು: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಾಲ್ಕನೇ ದಿನವೂ ವಿಚಾರಣೆ ಮುಂದುವರಿಸಿದ್ದಾರೆ. ಮತ್ತೊಂದೆಡೆ ಇಡಿ ಅಧಿಕಾರಿಗಳು ಡಿಕೆ ವಿಚಾರಣೆಯನ್ನು ನಡೆಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ದೆಹಲಿ, ಬೆಂಗಳೂರು ಫ್ಲ್ಯಾಟ್ ಗಳಲ್ಲಿ ಸಿಕ್ಕಿರುವ 8 ಕೋಟಿ ರೂಪಾಯಿ ಹಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ವಿಚಾರಣೆ ನಡೆಸುತ್ತಿದ್ದು, ಈ ಬಾರಿ ಗೌರಿ-ಗಣೇಶ್ ಹಬ್ಬ ಆಚರಿಸದಂತಾಗಿದೆ.
ಮಂಗಳವಾರ ಕರ್ನಾಟಕ ಭವನದಿಂದ ಇಡಿ ಕಚೇರಿಗೆ ಡಿಕೆ ಶಿವಕುಮಾರ್ ವಿಚಾರಣೆಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಡಿಕೆಶಿ, ನಾವೇ ಕಾನೂನು ರಚನೆ ಮಾಡಿದ್ದೇವೆ. ವಿಚಾರಣೆ ನಡೆಸುವ ಅಧಿಕಾರ ಅವರಿಗೆ ಇದೆ. ಇ.ಡಿ.ವಿಚಾರಣೆ ಯಾವಾಗ ಮುಗಿಯುತ್ತದೋ ಗೊತ್ತಿಲ್ಲ ಎಂದು ಹೇಳಿದರು.
ಆನೇಕಲ್, ಮೈಸೂರಿನಲ್ಲಿ ಪ್ರತಿಭಟನೆ:
ಕಾಂಗ್ರೆಸ್ ಹಿರಿಯ ಮುಖಂಡ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದು ರಾಜಕೀಯ ಪ್ರೇರಿತ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಆನೇಕಲ್ ನಲ್ಲಿ ಪ್ರತಿಭಟನೆ ನಡೆಸಿದರು.
ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿದರು.