ಹುಬ್ಬಳ್ಳಿ: ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಬಸ್ ಯಾತ್ರೆ ಶೀಘ್ರದಲ್ಲೇ ಆರಂಭಿಸಲಾಗುವುದು. ಇದಕ್ಕೆ ಪಕ್ಷದ ಯಾವ ನಾಯಕರು ಷರತ್ತು ಹಾಕಿಲ್ಲ. ಎಲ್ಲರೊಂದಿಗೆ ಚರ್ಚಿಸಿಯೇ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ. 30ರಂದು ಕೃಷ್ಣಾ ನದಿ ನೀರು ಹಂಚಿಕೆ ಕುರಿತು ವಿಜಯಪುರದಲ್ಲಿ ಹಾಗೂ ಜ. 2ರಂದು ಮಹಾದಾಯಿ ಯೋಜನೆ ಅನುಷ್ಠಾನ ಕುರಿತು ಹುಬ್ಬಳ್ಳಿಯಲ್ಲಿ ಹಾಗೂ ಜ. 8ರಂದು ಎಸ್ಸಿ, ಎಸ್ಟಿ ಮೀಸಲಾತಿ ಬಗ್ಗೆ ಚಿತ್ರದುರ್ಗದಲ್ಲಿ ಸಭೆ ನಡೆಸಲಾಗುವುದು ಎಂದರು.
ಇದನ್ನೂ ಓದಿ: ʼಪಠಾಣ್ʼ ದೇಶಭಕ್ತಿಯನ್ನು ಸಾರುವ ಸಿನಿಮಾ: ಶಾರುಖ್ ಖಾನ್
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಕುರಿತು ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಅವರು, ಕಾಂಗ್ರೆಸ್ ಯಾವಾಗಲೂ ಭಯೋತ್ಪಾದನೆ ವಿರೋಧಿಸುತ್ತ ಬಂದಿದೆ. ಇಂತಹ ಕೃತ್ಯಗಳಿಂದಾಗಿ ನಾವು ಪಕ್ಷದ ಹಲವು ನಾಯಕರನ್ನು ಕಳೆದುಕೊಂಡಿದ್ದೇವೆ. ಮಂಗಳೂರು ಪೊಲೀಸ್ ಆಯುಕ್ತರು ಘಟನೆ ಬಗ್ಗೆ ಪ್ರತಿಕ್ರಿಯಿಸದಂತೆ ಸೂಚಿಸಿದ್ದರು. ಆದರೆ ಈ ಬಗ್ಗೆ ಗೃಹ ಸಚಿವರು, ಡಿಜಿಪಿ ಏಕಾಏಕಿ ಹೇಳಿಕೆ ನೀಡುವ ಮೂಲಕ ಭ್ರಷ್ಟಾಚಾರ, ಮತ ಕಳ್ಳತನ ಆರೋಪಗಳನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ ಎಂದರು.
ಅಮಾಯಕ ನೊಬೆಲ್ ಪ್ರಶಸ್ತಿ ಯಾವಾಗ ಕೊಡುತ್ತಾರೆ ತಿಳಿಸಲಿ. ಅದನ್ನು ಸ್ವೀಕರಿಸಲು ನಾನು ಸಿದ್ಧನೆಂದು ಸಚಿವ ಆರ್. ಅಶೋಕ ಹೇಳಿಕೆಗೆ ತಿರುಗೇಟು ನೀಡಿದರು.
ಟಿಕೆಟ್ ಬಯಸಿ ಕೆಪಿಸಿಸಿಗೆ ಸಾವಿರಕ್ಕೂ ಅಧಿಕ ಅರ್ಜಿ ಬಂದಿವೆ. ಈ ಕುರಿತು ಇಂದು ಬೆಳಗಾವಿಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲೆ ನೇತೃತ್ವದಲ್ಲಿ ನಡೆಯಲಿರುವ ರಾಜ್ಯ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚಿಸಲಾಗುವುದು. ಗೆಲ್ಲುವ ಅರ್ಹತೆವುಳ್ಳ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದರು.