Advertisement

ವಿಐಎಸ್ಎಲ್ ವಿಚಾರದಲ್ಲಿ ಬಿಜೆಪಿಯವರು ಕೊಟ್ಟ ಮಾತು ಉಳಿಸಿಕೊಂಡಿಲ್ಲ: ಡಿ.ಕೆ. ಶಿವಕುಮಾರ್

04:08 PM Feb 08, 2023 | Team Udayavani |

ಭದ್ರಾವತಿ: ‘ಬಿಜೆಪಿ ನಾಯಕರು ಕೊಟ್ಟ ಮಾತಿನಂತೆ ಕೇಂದ್ರ ಸರ್ಕಾರದಿಂದ ವಿಐಎಸ್ಎಲ್ ಕಾರ್ಖಾನೆಗೆ ಬಂಡವಾಳ ತಂದು ಪುನರಾರಂಭ ಮಾಡಲು ವಿಫಲರಾಗಿದ್ದಾರೆ. ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದರೆ ಕೇವಲ ಅರ್ಧ ಗಂಟೆಯಲ್ಲಿ ತೀರ್ಮಾನ ಮಾಡಬಹುದು. ಆದರೆ ಈ ಬಗ್ಗೆ ಡಬಲ್ ಇಂಜಿನ್ ಸರ್ಕಾರ ವಿಫಲವಾಗಿದೆ. ಹೀಗಾಗಿ ಬಿಜೆಪಿಯವರು ಈ ಜನರ ಮುಂದೆ ಬಂದು ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹರಿಹಾಯ್ದಿದ್ದಾರೆ.

Advertisement

ಭದ್ರಾವತಿಯಲ್ಲಿ ಪ್ರಜಾಧ್ವನಿ ಸಮಾವೇಶಕ್ಕೂ ಮುನ್ನ ವಿಐಎಸ್ಎಲ್ ಕಾರ್ಮಿಕರ ಜತೆ ಚರ್ಚೆ ಮಾಡಿ ಅವರ ಅಳಲು ಕೇಳಿದ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಸರ್ಕಾರದ ನಿರ್ಲಕ್ಷ್ಯತನದ ಬಗ್ಗೆ ಕಿಡಿಕಾರಿದರು. ಅಲ್ಲದೆ ಈ ಕಾರ್ಖಾನೆ ಮುಚ್ಚುವ ನಿರ್ಧಾರ ಕೈಬಿಟ್ಟು ಪುನರಾರಂಭ ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ‘ನಾವು ಮಲೆನಾಡು ಭಾಗಕ್ಕೆ ಬಂದಿದ್ದು, ಶಿವಮೊಗ್ಗ, ಭದ್ರಾವತಿಯಲ್ಲಿ ಮಾತ್ರ ನಮ್ಮ ಪಕ್ಷದ ಶಾಸಕರಾಗಿದ್ದಾರೆ. ಕಳೆದ ಚುನಾವಣೆ ನಂತರ ತೀರ್ಥಹಳ್ಳಿಯ ಮಂಜುನಾಥ್ ಗೌಡ, ಸೊರಬದ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಡಬಲ್ ಇಂಜಿನ ಸರ್ಕಾರವಿದೆ. ಈ ಜಿಲ್ಲೆ ಬಹಳ ನಾಯಕರನ್ನು ನೀಡಿದೆ. ರಾಜ್ಯದ ಗೃಹ ಸಚಿವರು ಈ ಜಿಲ್ಲೆಯವರು.

ಶಿವಮೊಗ್ಗ ಜಿಲ್ಲೆಯಲ್ಲಿ ರೈತರು, ಕಾರ್ಮಿಕರು, ವ್ಯಾಪಾರ ವರ್ಗದವರನ್ನು ನೆಮ್ಮದಿಯಾಗಿ ಬದುಕಲು ಬಿಡುತ್ತಿಲ್ಲ. ನಾನು ಈ ಹಿಂದೆ ಶಿವಮೊಗ್ಗಕ್ಕೆ ಬಂದಾಗ ಜಾಗತಿಕ ಬಂಡವಾಳ ಹೂಡಿಕೆಯಲ್ಲಿ ಶಿವಮೊಗ್ಗಕ್ಕೆ ಎಷ್ಟು ಕೋಟಿ ಬಂಡವಾಳ ಹೂಡಿಕೆಯಾಗಿದೆ ಎಂದು ಕೇಳಿದ್ದೆ. ಮೈಸೂರು ಮಹಾರಾಜರು ಕೊಟ್ಟ ವಿಐಎಸ್ಎಲ್ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಮುಚ್ಚಲು ಹೋದಾಗ, ಸಿದ್ದರಾಮಯ್ಯ ಅವರ ಸರ್ಕಾರವಿತ್ತು. ಆಗ ಸಂಗಮೇಶ್ ಅವರು ಮಾಜಿ ಶಾಸಕರಾಗಿದ್ದರೂ ಈ ಕಾರ್ಖಾನೆಗೆ ಗಣಿ ಜಾಗ ಮಂಜೂರು ಮಾಡಿಸಿದ್ದರು. ಆದರೂ ಕೇಂದ್ರ ಸರ್ಕಾರ ಈ ಕಾರ್ಖಾನೆಗೆ ಬಂಡವಾಳ ಹೂಡಿಕೆ ಮಾಡಿ ಮತ್ತೆ ಆರಂಭಕ್ಕೆ ಆದ್ಯತೆ ನೀಡಲಿಲ್ಲ. ಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪನವರು 1 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುವ ಭರವಸೆ ನೀಡಿದರು. ನಂತರ ಕೇಂದ್ರ ಸಚಿವರು ಬಂದು 6 ಸಾವಿರ ಕೋಟಿ ಬಂಡವಾಳ ಹೂಡಿಕೆ ನೀಡುವುದಾಗಿ ಹೇಳಿದ್ದರು. ಇದ್ಯಾವುದನ್ನು ಮಾಡಲಿಲ್ಲ. ಶಿವಮೊಗ್ಗ ಸಂಸದರೂ ಸೇರಿ ರಾಜ್ಯದಿಂದ 25 ಬಿಜೆಪಿ ಸಂಸದರಿದ್ದಾರೆ. ಆದರೂ ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿರುವ ಈ ಕಾರ್ಖಾನೆ ಉಳಿಸಲು ಪ್ರಯತ್ನಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಸ್ಥಾಪಿಸಿದ ಸಾರ್ವಜನಿಕ ಉದ್ದಿಮೆಗಳನ್ನು ಬಿಜೆಪಿ ಸರ್ಕಾರ ಖಾಸಗಿಯವರಿಗೆ ಮಾರುತ್ತಿದೆ. ಈಗ ಈ ಕಾರ್ಖಾನೆ ಮಾರಾಟ ಮಾಡಲು ಮುಂದಾಗಿದ್ದು, ಖರೀದಿ ಮಾಡಲು ಯಾರೂ ಬಂದಿಲ್ಲ ಎಂದು ಈಗ ಮುಚ್ಚಲು ಮುಂದಾಗಿದ್ದಾರೆ.

ಜನರಿಗೆ ಉದ್ಯೋಗ ನೀಡಿ, ಸುಸ್ಥಿರ ವ್ಯಾಪಾರ ವಹಿವಾಟು ನಡೆಸಲು ನೆಹರೂ ಅವರು ಅನೇಕ ಸಾರ್ವಜನಿಕ ಕಾರ್ಖಾನೆ , ಸಂಸ್ಥೆಗಳನ್ನು ಸ್ಥಾಪಿಸಿದ್ದರು. ಉಕ್ಕಿನ ಕಾರ್ಖಾನೆ ಹಾಗೂ ಕಾಗದ ಕಾರ್ಖಾನೆ ಎರಡು ಸರ್ಕಾರದ ಸ್ವಾಮ್ಯದಲ್ಲೇ ಮುಂದುವರಿಯಬೇಕು, ಅವುಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಖಾಸಗಿಯವರಿಂದ ನಡೆಸಲಾಗುವ ಕಾರ್ಖಾನೆಯನ್ನು ಸರ್ಕಾರ ಯಾಕೆ ನಡೆಸಲು ಸಾಧ್ಯವಾಗುತ್ತಿಲ್ಲ? ಅಂದರೆ ನಿಮಗೆ ಆಡಳಿತ ನಡೆಸಲು ಆಗುತ್ತಿಲ್ಲ ಎಂಬುದು ಸಾಬೀತಾಗುತ್ತಿದೆ.

Advertisement

ಈ ಜಿಲ್ಲೆಯಲ್ಲಿ ಕೋಮುಗಲಭೆ ಮಾಡಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಬಿಜೆಪಿ ಸರ್ಕಾರ ಅಶಾಂತಿ ಮೂಡಿಸಿ, ಸಂಜೆ ಆರು ಗಂಟೆಗೆ ಎಲ್ಲಾ ಅಂಗಡಿ ಮುಂಗಟ್ಟು ಮುಚ್ಚಿಸುತ್ತಿದ್ದಾರೆ. ಹೀಗಾಗಿ ಇಲ್ಲಿ ಬಂಡವಾಳ ಹೂಡಿಕೆ ಮಾಡಲು ಯಾರು ಮುಂದೆ ಬರುತ್ತಿಲ್ಲ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಎಷ್ಟು ಬಂಡವಾಳ ಹೂಡಿಕೆಯಾಗಿದೆ, ಎಷ್ಟು ಯೋಜನೆ ಜಾರಿಯಾಗಿವೆ ಎಂದು ಯಡಿಯೂರಪ್ಪ, ಸಂಸದ ರಾಘವೇಂದ್ರ ಹಾಗೂ ಈಶ್ವರಪ್ಪ ಅವರು ಉತ್ತರಿಸಬೇಕು. ಇಲ್ಲಿನ ಗೃಹ ಸಚಿವರ ಹೇಳಿಕೆಗಳು, ಅವರ ಹಗರಣಗಳನ್ನು ಹೇಳುತ್ತಿದ್ದರೆ ಅದರ ಬಗ್ಗೆಯೇ ದೊಡ್ಡ ಚರ್ಚೆ ಮಾಡಬಹುದು. ಇನ್ನು ಈ ಭಾಗದ ಪ್ರಮುಖ ಬೆಳೆ ಅಡಕೆಗೆ ಭವಿಷ್ಯವಿಲ್ಲ, ಅದನ್ನು ಬೆಳೆಯುವುದು ಬಿಡಿ ಎನ್ನುತ್ತಿದ್ದಾರೆ. ಅವರು ರಾಜಕಾರಣ ಮಾಡುವುದನ್ನು ಬಿಡಲಿ, ಅಧಿಕಾರ ಯಾಕೆ ಬೇಕು? ಕೇಂದ್ರ ಸರ್ಕಾರ ವಿದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಿದರೆ ಸಾಕು. ಮಲೆನಾಡು ಮಾತ್ರವಲ್ಲ ರಾಜ್ಯದ ಬೇರೆ ಕಡೆಗಳಲ್ಲೂ ಬೆಳೆಯುತ್ತಿದ್ದಾರೆ. ಈ ಸರ್ಕಾರ ರೈತರಿಗೆ ಬೆಂಬಲ ಬೆಲೆ ನೀಡಲಿಲ್ಲ, ಕೊಟ್ಟ ಮಾತನ್ನೂ ಉಳಿಸಿಕೊಳ್ಳಲಿಲ್ಲ.

ಈ ಕಾರ್ಖಾನೆ ಮುಚ್ಚಲು ಬಿಡುವುದಿಲ್ಲ, ಬಂಡವಾಳ ಹೂಡಿಕೆ ಮಾಡಿಸುವುದಾಗಿ ಮಾತು ಕೊಟ್ಟ ಮೇಲೆ ಸಂಸತ್ ಎದುರಿರುವ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಿಯಾದರೂ ಕಾರ್ಖಾನೆ ಪುನಶ್ಚೇತನಕ್ಕೆ ಬಂಡವಾಳ ಹೂಡಿಕೆಯಾಗುವಂತೆ ಮಾಡಬೇಕು. ಅಧಿಕಾರ ಮಾತ್ರ ಬೇಕು, ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದಿಲ್ಲ ಎಂದರೆ ಹೇಗೆ? ಜನರ ನೋವು ಕೇಳಲು ನಾವು ಪ್ರಜಾಧ್ವನಿ ಯಾತ್ರೆ ಮೂಲಕ ಬಂದಿದ್ದೇವೆ. ವಿಐಎಸ್ ಎಲ್, ಎಂಪಿಎಂ ಕಾರ್ಮಿಕರ ಜತೆ ಮಾತನಾಡಿದ್ದೇನೆ.

ಜನ ಈ ಡಬಲ್ ಇಂಜಿನ ಸರ್ಕಾರಕ್ಕೆ ಅಧಿಕಾರ ಕೊಟ್ಟಾಗಿದೆ. ಯಡಿಯೂರಪ್ಪ ವಿಫಲರಾದರೂ ಎಂದು ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಮೇಲೆ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ನಾವು ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ಮಾಡುವುದಾಗಿ ಹೇಳಿದ್ದರು. ಈಗ ಪ್ರಧಾನಮಂತ್ರಿಗಳ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದಿದ್ದಾರೆ. ಆ ಮೂಲಕ ಬೊಮ್ಮಾಯಿ ಅವರ ಆಡಳಿತವೂ ವಿಫಲವಾಗಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ. ನಾಯಕತ್ವ ಇಲ್ಲದ ಬಿಜೆಪಿ ಈಗ ಮೋದಿ ಅವರ ಮುಂದಿಟ್ಟು ಚುನಾವಣೆ ಮಾಡುತ್ತಿದೆ.

ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರಿಲ್ಲ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ‘ ಅವರು ಗಾಂಧಿ ಕುಟುಂಬವನ್ನು ಗುರಿಯಾಗಿಸಿ ಏನೇಲ್ಲಾ ಆರೋಪ ಮಾಡುತ್ತಿದ್ದಾರೆ ಎಂದು ನೀವು ನೋಡುತ್ತಿದ್ದೀರಿ. ಮಲ್ಲಿಕಾರ್ಜುನ ಖರ್ಗೆ ಅವರು ಈಗ ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರು ನಿನ್ನೆ ಮೊನ್ನೆ ಬಂದವರಲ್ಲ’ ಎಂದು ತಿಳಿಸಿದರು.

ಪಕ್ಷದ ಟಿಕೆಟ್ ವಿಚಾರವಾಗಿ ಕೇಳಿದಾಗ, ‘ಈಗಾಗಲೇ ಎರಡು ಸಭೆ ಮಾಡಿದ್ದೇವೆ. ಇನ್ನು ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಬೇಕು. ನಮ್ಮ ಪಕ್ಷದ ಪ್ರಕ್ರಿಯೆ ಮೂಲಕ ಟಿಕೆಟ್ ತೀರ್ಮಾನ ಮಾಡಲಾಗುವುದು’ ಎಂದು ತಿಳಿಸಿದರು.

ಅಕ್ರಮ ಆಸ್ತಿ ವಿಚಾರವಾಗಿ ಚಾರ್ಜ್ ಶೀಟ್ ಸಲ್ಲಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಈ ವಿಚಾರವಾಗಿ ದಿನನಿತ್ಯ ನನಗೆ ನೊಟೀಸ್ ನೀಡುತ್ತಿದ್ದಾರೆ. ನಿನ್ನೆ ನನ್ನ ಮಗಳ ಕಾಲೇಜಿಗೆ ಹೋಗಿ ನೋಟೀಸ್ ನೀಡಿದ್ದು, ವಿದ್ಯಾರ್ಥಿಗಳು ಕಟ್ಟಿರುವ ಶುಲ್ಕದ ವಿವರ ಕೇಳಿದ್ದಾರೆ. ಈ ಬಗ್ಗೆ ನಾನೇನು ಹೇಳಲಿ? ಈ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ ಅಂದರೆ ಅವರು ನನಗೆ ಹೇಗೆಲ್ಲಾ ಕಿರುಕುಳ ನೀಡುತ್ತಿದ್ದಾರೆ ನೀವೇ ಆಲೋಚಿಸಿ. ಇಡಿ ಅಧಿಕಾರಿಗಳ ಮುಂದೆ ಎಲ್ಲ ಉತ್ತರ ನೀಡಿದ್ದೇನೆ. ನ್ಯಾಷನಲ್ ಹೆರಾಲ್ಡ್ ವಿಚಾರವಾಗಿ ಉತ್ತರ ನೀಡಿದ್ದೇನೆ. ಆದರೂ 22 ರಂದು ಇಡಿ ವಿಚಾರಣೆಗೆ ಹಾಜರಾಗಬೇಕು ಎಂದು ಹೇಳಿದ್ದಾರೆ. ನಾನು ಪ್ರಜಾಧ್ವನಿ ಯಾತ್ರೆ ಮಾಡಲೋ ವಿಚಾರಣೆಗೆ ಹಾಜರಾಗಲೋ? ಆಡಳಿತ ಪಕ್ಷದವರು ಎಷ್ಟು ಸಾವಿರ ಕೋಟಿ ಲೂಟಿ ಹೊಡೆದರೂ ಕೇಳುವುದಿಲ್ಲ. ಈ ವಿಚಾರಣೆ ಏನಿದ್ದರೂ ವಿರೋಧ ಪಕ್ಷಗಳ ನಾಯಕರಿಗೆ ಮಾತ್ರ ಸೀಮಿತ’ ಎಂದು ತಿಳಿಸಿದರು.

ಕಾರ್ಖಾನೆ ನೌಕರರ ಸಂಕಷ್ಟ ಆಲಿಸಿದ ಶಿವಕುಮಾರ್

ಇದಕ್ಕೂ ಮುನ್ನ ಡಿ.ಕೆ. ಶಿವಕುಮಾರ್ ಅವರು ಕಾರ್ಖಾನೆ ನೌಕಕರಿಂದ ಕಾರ್ಖಾನೆಯ ಸ್ಥಿತಿಗತಿಗಳ ಬಗ್ಗೆ ಹಾಗೂ ಅವರ ಕಷ್ಟಗಳ ಬಗ್ಗೆ ಮಾಹಿತಿ ಪಡೆದರು.

ಯಡಿಯೂರಪ್ಪನವರು ಕೇಂದ್ರ ಸರ್ಕಾರದಿಂದ ಕಾರ್ಖಾನೆಗೆ 1 ಸಾವಿರ ಕೋಟಿ ರು. ಬಂಡವಾಳ ಹೂಡಿಕೆ ಮಾಡಿಸುವ ಭರವಸೆ ನೀಡಿದ್ದರು. ನಂತರ ಕೇಂದ್ರ ಸಚಿವ ತೋಮರ್ ಅವರು 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುವ ಮಾತು ಕೊಟ್ಟಿದ್ದರು. ಸಿದ್ದರಾಮಯ್ಯ ಅವರ ಸರ್ಕಾರ ಈ ಕಾರ್ಖಾನೆ ಪುನರಾರಂಭಕ್ಕೆ 150 ಎಕರೆ ಗಣಿ ಭೂಮಿ ಮಂಜೂರು ಮಾಡಿದೆ. ಆದರೂ ಬಿಜೆಪಿ ನಾಯಕರು ಕೇಂದ್ರ ಸರ್ಕಾರದಿಂದ ಬಂಡವಾಳ ಹೂಡಿಕೆ ಮಾಡಿಸದೇ ಕೊಟ್ಟ ಮಾತು ಉಳಿಸಿಕೊಂಡಿಲ್ಲ ಎಂದು ವಿವರಿಸಿದರು.

ಈ ಕಾರ್ಖಾನೆ ಮುಚ್ಚಿದರೆ ಸಾವಿರಾರು ಕುಟುಂಬಗಳು ಬೀದಿಗೆ ಬೀಳಲಿವೆ. ಹೀಗಾಗಿ ಕೂಡಲೇ ಕಾರ್ಖಾನೆ ಮುಚ್ಚುವ ಕೇಂದ್ರ ಸರ್ಕಾರದ ತೀರ್ಮಾನವನ್ನು ತಡೆ ಹಿಡಿಯಬೇಕು ಎಂದು ತಮ್ಮ ಅಳಲು ತೋಡಿಕೊಂಡರು.

ಇದನ್ನೂ ಓದಿ: ದಾವಣಗೆರೆ: ಅಪರಿಚಿತ ವಾಹನ ಢಿಕ್ಕಿಯಾಗಿ ಚಿರತೆ ಸಾವು

Advertisement

Udayavani is now on Telegram. Click here to join our channel and stay updated with the latest news.

Next